ರಾಹುಲ್ ಸಂಸತ್ ಸದಸ್ಯತ್ವ ರದ್ದು: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದು ಪಡಿಸಿದ್ದನ್ನು ಖಂಡಿಸಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ (ಜು.8) : ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ರದ್ದು ಪಡಿಸಿದ್ದನ್ನು ಖಂಡಿಸಿ ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.
ಇಲ್ಲಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಮಾವೇಶಗೊಂಡ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಕೇಂದ್ರ ಸರಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಹುಲ್ ಗಾಂಧಿಗೆ ಶಿಕ್ಷೆ ತಗ್ಗಿಸದ ಹೈಕೋರ್ಟ್: ಅನರ್ಹತೆ ತಡೆಯಾಜ್ಞೆ ಅರ್ಜಿ ತಿರಸ್ಕಾರ
ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ‘ಕೇಂದ್ರ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆ ನಾಶ ಮಾಡುತ್ತಿದೆ. ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಅವರ ಸದಸ್ಯತ್ವ ರದ್ದುಗೊಳಿಸಿರುವುದು ಖಂಡನೀಯ. ಬಿಜೆಪಿಯ ದ್ವೇಷ ರಾಜಕಾರಣವನ್ನು ದೇಶದ ಜನರು ಗಮನಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಸರಕಾರದ ಆಡಳಿತಕ್ಕೆ ಬೇಸತ್ತು ರಾಜ್ಯದ ಜನರು ತಕ್ಕ ಪಾಠ ಕಲಿಸಿದ್ದಾರೆ. ಇನ್ನು ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಜನರು ಒಗ್ಗಟ್ಟಾಗಿ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಮನೆಗೆ ಕಳುಹಿಸಲಿದ್ದಾರೆ ಎಂದರು.
ಗ್ರಾಮೀಣ ಘಟಕದ ಅಧ್ಯಕ್ಷ ಅನಿಲಕುಮಾರ ಪಾಟೀಲ, ಪ್ರಧಾನಿ ಮೋದಿಯವರ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡುವುದರಿಂದ ನಾಯಕ ರಾಹುಲ್ ಗಾಂಧಿಯವರ ಸದಸ್ಯತ್ವ ಅನರ್ಹಗೊಳಿಸಲಾಗಿದೆ. ಇದು ಖಂಡನೀಯ. ಅಧಿಕಾರ ಶಾಶ್ವತವಲ್ಲ. ಅದರ ದುರುಪಯೋಗವೂ ಸರಿಯಲ್ಲ. ಬರುವ ಚುನಾವಣೆಯಲ್ಲಿ ಜನರು ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದರು.
ಮೋದಿ ಸರ್‌ನೇಮ್ ಹೇಳಿಕೆ ವಿವಾದ: ಶಿಕ್ಷೆ ವಿರುದ್ಧ ರಾಹುಲ್ ಮೇಲ್ಮನವಿ: ಇಂದು ಹೈಕೋರ್ಟ್ ತೀರ್ಪು
ಮುಖಂಡರಾದ ಸದಾನಂದ ಡಂಗನವರ, ನಾಗೇಶ ಕಲಬುರ್ಗಿ, ಗಂಗಾಧರ ದೊಡವಾಡ, ನವೀದ ಮುಲ್ಲಾ, ಆರೀಫ್ ಭದ್ರಾಪುರ, ದೀಪಾ ಗೌರಿ ಇತರರು ಇದ್ದರು.