Asianet Suvarna News Asianet Suvarna News

ಬಿಜೆಪಿ, ಕಾಂಗ್ರೆಸ್‌ನಿಂದ ಬಂಡಾಯ ಅಭ್ಯರ್ಥಿಗಳು ಕಣಕ್ಕೆ

ಸುರೇಶಗೌಡ ಪಾಟೀಲ್‌, ಹೂಡಿ ವಿಜಿಕುಮಾರ್‌ ಬಿಜೆಪಿ ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕೆ, ಬೀದರ್‌ ದಕ್ಷಿಣದಲ್ಲಿ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಚಂದ್ರಾಸಿಂಗ್‌ ನಾಮಪತ್ರ ಸಲ್ಲಿಕೆ. 

Rebel Candidates Contest from BJP, Congress of Karnataka Assembly Elections 2023 grg
Author
First Published Apr 14, 2023, 9:27 AM IST | Last Updated Apr 14, 2023, 9:27 AM IST

ಬೆಂಗಳೂರು(ಏ.14): ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪಟ್ಟಿಬಿಡುಗಡೆ ಬೆನ್ನ ಹಿಂದೆಯೇ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಬಂಡಾಯ ಭುಗಿಲೆದ್ದಿದ್ದು, ಟಿಕೆಟ್‌ ವಂಚಿತರು ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ. ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನವೇ ರಾಜ್ಯದ ಕೆಲವೆಡೆ ಬಂಡಾಯ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಬಂಡಾಯ ಅಭ್ಯರ್ಥಿಗಳು:

ಬ್ಯಾಡಗಿ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ಸುರೇಶಗೌಡ ಪಾಟೀಲ್‌ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದರು. ಇದೇ ವೇಳೆ, ಟಿಕೆಟ್‌ ಸಿಗದಿದ್ದರೂ ಕುಂದಗೋಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹು-ಧಾ ಮಹಾನಗರ ಪಾಲಿಕೆ ಮಾಜಿ ಸದಸ್ಯಶಿವಾನಂದ ಮುತ್ತಣ್ಣವರ ಅವರು ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿ, ಹಿಂದುಳಿದ ವರ್ಗದ ಕುರುಬ ಸಮುದಾಯಕ್ಕೆ ಸ್ಪರ್ಧೆಗೆ ಅವಕಾಶ ಕೇಳಿದ್ದೇನೆ. ನನಗೆ ‘ಬಿ’ ಫಾಮ್‌ರ್‍ ಸಿಗುವ ವಿಶ್ವಾಸವಿದ್ದು, ಮತ್ತೊಮ್ಮೆ ಅಧಿಕೃತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಕೋಲಾರ ಜಿಲ್ಲೆ ಮಾಲೂರಿನಿಂದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಹೂಡಿ ವಿಜಿಕುಮಾರ್‌ ಅವರು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಪಾಳೆಯದಲ್ಲಿ ಬಂಡಾಯದ ಕಿಚ್ಚು, 25 ಕ್ಷೇತ್ರಗಳಲ್ಲಿ ಇತರ ಪಕ್ಷಗಳಿಗೆ ಲಾಭ ಹೆಚ್ಚು

ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಗಳು:

ಇದೇ ವೇಳೆ, ಶಿವಮೊಗ್ಗ ನಗರ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿರುವ ವೈ.ಎಚ್‌.ನಾಗರಾಜ್‌ ಅವರು ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದರು. ಪಕ್ಷ ನನಗೆ ಟಿಕೆಟ್‌ ಕೊಡುತ್ತದೆ ಎಂಬ ನಂಬಿಕೆಯಿದ್ದು, ಈ ನಂಬಿಕೆಯಿಂದ ನಾಮಪತ್ರ ಸಲ್ಲಿಸಿದ್ದೇನೆ ಎಂದರು. ಇದೇ ವೇಳೆ, ಕಾಂಗ್ರೆಸ್‌ ಟಿಕೆಟ್‌ ಸಿಗದಿದ್ದಕ್ಕೆ ಅಸಮಾಧಾನಗೊಂಡು, ಬೀದರ್‌ ದಕ್ಷಿಣ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚಂದ್ರಾಸಿಂಗ್‌ ನಾಮಪತ್ರ ಸಲ್ಲಿಸಿದ್ದಾರೆ. ತಮ್ಮ ಬೆಂಬಲಿಗರ ಜೊತೆ ಅವರು ಎತ್ತಿನ ಗಾಡಿಯಲ್ಲಿ ಆಗಮಿಸಿ, ತಹಸೀಲ್ದಾರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.

ಅಫಜಲಪುರದಲ್ಲಿ ಅಣ್ಣನ ವಿರುದ್ಧ ತೊಡೆ ತಟ್ಟಿದ ತಮ್ಮ:

ಅಫಜಲ್ಪುರದಲ್ಲಿ ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿರುವ ಮಾಲೀಕಯ್ಯಾ ಗುತ್ತೇದಾರ್‌ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದರೆ, ತಮ್ಮ ನಿತಿನ್‌ ಗುತ್ತೇದಾರ್‌ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಆ ಮೂಲಕ, ಭೀಮಾ ತೀರದ ಅಫಜಲ್ಪುರದಲ್ಲಿ ಗುತ್ತೇದಾರ್‌ ಸಹೋದರರ ನಡುವೆ ಬಂಡಾಯ ಭುಗಿಲೆದ್ದಿದೆ.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

Latest Videos
Follow Us:
Download App:
  • android
  • ios