ಬೆಂಗಳೂರು, (ಅ.08): ಆರ್.ಆರ್.ನಗರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಡಿಕೆ ರವಿ ಅವರ ಪತ್ನಿ ಕುಸುಮಾ ಅವರು ಗುರುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು.

ಕಾಂಗ್ರೆಸ್‌ ಅಭ್ಯರ್ಥಿ ಎಂದು ಘೋಷಣೆಯಾದ ಬಳಿಕ ಮೊದಲ ಬಾರಿಗೆ ಕುಸುಮಾ ಅವರು, ಮಾಜಿ ಸಚಿವ ಚೆಲುವರಾಯಸ್ವಾಮಿ ಅವರೊಂದಿಗೆ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

RR ನಗರ ಬೈ ಎಲೆಕ್ಷನ್: ಟಿಕೆಟ್ ಘೋಷಣೆ ಬೆನ್ನಲ್ಲೇ ಪಣತೊಟ್ಟ ಕಾಂಗ್ರೆಸ್ ಅಭ್ಯರ್ಥಿ

ಕುಸುಮಾ ಹನುಮಂತರಾಯಪ್ಪ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚಿಸಿದ ಅಭ್ಯರ್ಥಿಯಾಗಿದ್ದು, ಚುನಾವಣಾ ಪ್ರಚಾರಕ್ಕೆ ಬರುವಂತೆ ಸಿದ್ದರಾಮಯ್ಯಗೆ ಕುಸುಮಾ ಮನವಿ ಮಾಡಿದರು.

ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ಕುಸುಮಾ, ನನಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಟಿಕೆಟ್ ನೀಡಿರುವುದಕ್ಕೆ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಲು ಬಂದಿದ್ದೆ ಎಂದು ಸ್ಪಷ್ಟಪಡಿಸಿದರು.

ಆರ್ ಆರ್ ನಗರದಲ್ಲಿ ತಮ್ಮ ಪರ ಉತ್ತಮ ಅಭಿಪ್ರಾಯ ಮೂಡಿಬಂದಿದೆ. ನಾನು ಆರ್ ಆರ್ ನಗರ ಕ್ಷೇತ್ರದ ಹೆಣ್ಣು ಮಗಳು. ಈ ಕ್ಷೇತ್ರದ ಎಲ್ಲ ಸಮಸ್ಯೆಗಳ ಬಗ್ಗೆ ನನಗೆ ತಿಳಿದಿದೆ. ನಾನು ಬೇರೆ ಕ್ಷೇತ್ರದಿಂದ ಬಂದಿಲ್ಲ. ನನಗೆ ರಾಜಕೀಯ ಕ್ಷೇತ್ರ ಹೊಸದೇನಲ್ಲ. ನಮ್ಮ ತಂದೆಯ ರಾಜಕೀಯವನ್ನು ನೋಡಿಕೊಂಡು ಬಂದಿದ್ದೇನೆ ಎಂದು ಹೇಳಿದರು.