ಸರಣಿ ಹತ್ಯೆಗಳಿಗೂ, ಸಂಘ ಪರಿವಾರದೊಳಗಿನ ಆಂತರಿಕ ಬಿಕ್ಕಟ್ಟುಗಳಿಗೂ ಸಂಬಂಧ: ಸಿದ್ದು ಅನುಮಾನ

ಮಂಗಳೂರಿನಲ್ಲಿ ಸರಣಿ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Siddaramaiah Hits out at Karnataka BJP And RSS Over Mangaluru Murder Cases rbj

ಬೆಂಗಳೂರು, (ಜುಲೈ.29): ದಕ್ಷಿಣ ಕನ್ನಡದಲ್ಲಿ ನಡೆದ ಸರಣಿ ಹತ್ಯೆ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲ ಮೂಡಿಸಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕ ಮಧ್ಯೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ.

ಇನ್ನು ಈ ಬಗ್ಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್ ಮಾಡಿದ್ದು,  ದಕ್ಷಿಣ ಕನ್ನಡದ ಇತ್ತೀಚಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳಿಗೂ, ಸಂಘ ಪರಿವಾರದೊಳಗಿನ ಆಂತರಿಕ ಬಿಕ್ಕಟ್ಟುಗಳಿಗೂ ಸಂಬಂಧ ಇರುವಂತೆ ಕಾಣುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಕರಾವಳಿಯ ಸರಣಿ ಹತ್ಯೆಗಳಿಗೆ ಸಿದ್ದರಾಮಯ್ಯ ಕಾರಣ, ಬಿಜೆಪಿ ಗಂಭೀರ ಆರೋಪ

ಈ ಬೆಳವಣಿಗೆಗಳನ್ನು ಕೂಡಾ ಗಮನದಲ್ಲಿಟ್ಟುಕೊಂಡು ಪೊಲೀಸರು ತನಿಖೆ ನಡೆಸಿದರೆ ಸತ್ಯ ಬಯಲಾದೀತು.  ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅಂತಿಮ ದರ್ಶನಕ್ಕೆ ಆಗಮಿಸಿದ ವೇಳೆ ನಳಿನ್ ಕುಮಾರ್ ಕಟೀಲ್, ಸಚಿವ ಸುನೀಲ್ ಕುಮಾರ್, ವಿ.ಎಚ್.ಪಿ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಸ್ಥಳೀಯ ಶಾಸಕರ ವಿರುದ್ಧ ಭುಗಿಲೆದ್ದ ಜನಾಕ್ರೋಶದ ಹಿನ್ನೆಲೆಯನ್ನೂ ಪೊಲೀಸರು ತನಿಖೆ ಮಾಡಬೇಕಾಗಿದೆ ಎಂದು ಆಗ್ರಹಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರಿಗೆ ಆತ್ಮೀಯನಾಗಿದ್ದ ಮೃತ ಪ್ರವೀಣ್ ನೆಟ್ಟಾರ್ ಒಂದಷ್ಟು ಕಾಲ ನಳಿನ್ ಅವರ ಕಾರಿಗೆ ಚಾಲಕನೂ ಆಗಿದ್ದರಂತೆ. ಇಷ್ಟೊಂದು ಆತ್ಮೀಯರಾಗಿದ್ದವರು ದೂರವಾಗಿರುವುದು ಯಾಕೆ? ಪೊಲೀಸರು ಅವರನ್ನೂ ವಿಚಾರಣೆಗೊಳಪಡಿಸಿದರೆ ದುಷ್ಕರ್ಮಿಗಳ ಪತ್ತೆಗೆ ನೆರವಾದೀತು ಎಂದು ಟ್ವೀಟ್ ಮಾಡಿದ್ದಾರೆ.

ಹಿಂದುಗಳು ಸತ್ತರೆ ಮುಸ್ಲಿಮರ ಮೇಲೆ, ಮುಸ್ಲಿಮರು ಸತ್ತರೆ ಹಿಂದುಗಳ ಮೇಲೆ ಸಂಶಯ ಪಡುವುದು ಸಾಮಾನ್ಯವಾಗಿಬಿಟ್ಟಿದೆ.  ಪೊಲೀಸ್ ತನಿಖೆಯೂ ಇದೇ ಜಾಡಿನಲ್ಲಿ ಸಾಗುತ್ತಿರುವುದರಿಂದ  ಸಾವಿನ ಹಿಂದಿನ ಅಸಲಿ ಸತ್ಯ ಹೊರಗೆ ಬರದೆ ಮುಚ್ಚಿಹೋಗುತ್ತಿದೆ. ಹತ್ಯೆ ನಡೆಸಿರುವ ದುಷ್ಕರ್ಮಿಗಳು ಯಾವುದೇ ಪಕ್ಷ, ಜಾತಿ, ಧರ್ಮ ಇಲ್ಲವೇ ಸಂಘಟನೆಗಳಿಗೆ ಸೇರಿದ್ದರೂ ಮುಲಾಜಿಲ್ಲದೆ ಅವರನ್ನು ಬಂಧಿಸಿ ಜೈಲಿಗಟ್ಟಬೇಕು.  ಯಾವುದಾದರೂ ಸಂಘಟನೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದರೆ ಅವುಗಳನ್ನು ನಿಷೇಧಿಸುವ ದಿಟ್ಟತನವನ್ನು ರಾಜ್ಯ ಬಿಜೆಪಿ ಸರ್ಕಾರ ತೋರಬೇಕು ಎಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬಹಿರಂಗವಾಗಿ ಮುಸ್ಲಿಮರ ಬಗ್ಗೆ ಬೆಂಕಿ ಕಾರಿದರೂ ಮುಸ್ಲಿಂ ಉದ್ಯಮಿಗಳ ಜೊತೆ ಅವರಿಗೆ ಹಾರ್ದಿಕ ಸಂಬಂಧ ಇರುವುದನ್ನು ಅವರೇ ಹಲವಾರು ಬಾರಿ ಬಹಿರಂಗ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ಈ ಸಂಬಂಧಗಳು ಕೇವಲ ಸಾಮಾಜಿಕವಾದುದ್ದೇ? ಇಲ್ಲವೇ ವ್ಯಾಪಾರ ವಹಿವಾಟಿನದ್ದೇ?  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾಕೆ ಹಿಂದುಳಿದ ಜಾತಿಗಳ ಅದರಲ್ಲೂ ಮುಖ್ಯವಾಗಿ ಬಿಲ್ಲವ ಯುವಕರೇ ಕೋಮುಘರ್ಷಣೆಯಲ್ಲಿ ಬಲಿಯಾಗುತ್ತಿದ್ದಾರೆ? ರಾಜಕೀಯ ಪ್ರಾತಿನಿಧ್ಯ ಕಳೆದುಕೊಳ್ಳುತ್ತಿರುವ ಈ ಸಮುದಾಯದ ಯುವಕರು ಪ್ರಾಣವನ್ನೂ ಯಾಕೆ ಕಳೆದುಕೊಳ್ಳುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರಿಗಷ್ಟೇ ಮುಖ್ಯಮಂತ್ರಿಗಳೋ?
ಬಸವರಾಜ ಬೊಮ್ಮಾಯಿ ಅವರು ಕೇವಲ ಬಿಜೆಪಿ ಕಾರ್ಯಕರ್ತರಿಗಷ್ಟೇ ಮುಖ್ಯಮಂತ್ರಿಗಳೋ? ಇಲ್ಲವೇ ರಾಜ್ಯದ ಸಮಸ್ತ ಆರುವರೆ ಕೋಟಿ ಜನತೆಗೋ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು. ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ್ದ ಬೊಮ್ಮಾಯಿ ಅವರು ದುಷ್ಕರ್ಮಿಗಳಿಂದ ಹತ್ಯೆಯಾದ ಮಸೂದ್ ಮನೆಗೆ ಹೋಗದಿರಲು ಕಾರಣ ಏನೆಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮೃತ ಬಿಜೆಪಿ ಕಾರ್ಯಕರ್ತರಿಗೆ ಪಕ್ಷ ಎಷ್ಟೇ ಮೊತ್ತದ ಪರಿಹಾರ ನೀಡಿದರೂ ಅದು ಅವರ ಸಂಘಟನೆಗೆ ಸಂಬಂಧಿಸಿದ್ದು,  ಆದರೆ ವಿಚಾರಣಾ ಹಂತದಲ್ಲಿರುವ ಹತ್ಯೆ ಪ್ರಕರಣಗಳಲ್ಲಿ ಕುಟುಂಬಗಳಿಗೆ ಪರಿಹಾರ ನೀಡುವಾಗ ಭೇದಭಾವ ಆಗದಂತೆ ಎಚ್ಚರಿಕೆ ವಹಿಸುವುದು ಸಿಎಂ ಬೊಮ್ಮಾಯಿ ಅವರ ಕರ್ತವ್ಯವಾಗಿದೆ. ರಾಜ್ಯದ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಪಕ್ಷ ಇಲ್ಲವೇ ಸರ್ಕಾರದ ಮೇಲೆ ಯಾವುದೇ ನಿಯಂತ್ರಣ ಇಲ್ಲ. ಅಸಹಾಯಕರಾಗಿರುವ ಬೊಮ್ಮಾಯಿಯವರು ಕುರ್ಚಿ ಉಳಿಸಿಕೊಳ್ಳಲಿಕ್ಕಾಗಿ ಆರ್.ಎಸ್.ಎಸ್ ಹೇಳಿದಂತೆ ಬೊಂಬೆ ರೀತಿ ಕುಣಿಯುತ್ತಿದ್ದಾರೆ ಅವರ ಕುರ್ಚಿಯ ಉಳಿವು, ರಾಜ್ಯದ ಅಳಿವಾಗಿದೆ ಎಂದು ಟೀಕಿಸಿದ್ದಾರೆ.

Latest Videos
Follow Us:
Download App:
  • android
  • ios