* ಪಕ್ಷ ಸಂಘಟನೆ, ರಾಜಕೀಯ ಬೆಳವಣಿಗೆ ಚರ್ಚೆ* ಕಾಂಗ್ರೆಸ್‌ ಹೈಕಮಾಂಡ್‌ ಮುಖಂಡರನ್ನು ಭೇಟಿಯಾದ ಡಿಕೆಶಿ* ಈ ಹಿಂದೆಯೇ ರಾಹುಲ್‌ ಗಾಂಧಿ ಭೇಟಿಗೆ ಕಾಲಾವಕಾಶ ಕೇಳಿದ್ದ ಸಿದ್ದರಾಮಯ್ಯ 

ನವದೆಹಲಿ(ಜೂ.23): ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೈಕಮಾಂಡ್‌ ಭೇಟಿಗಾಗಿ ಜುಲೈ ಮೊದಲ ವಾರದಲ್ಲಿ ದೆಹಲಿಗೆ ತೆರಳುವ ಸಾಧ್ಯತೆಯಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಕಾಂಗ್ರೆಸ್‌ ಹೈಕಮಾಂಡ್‌ ಮುಖಂಡರನ್ನು ಭೇಟಿಯಾದ ಬೆನ್ನಲ್ಲೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಹ ದೆಹಲಿಗೆ ತೆರಳಲಿದ್ದಾರೆ. ಪಕ್ಷ ಸಂಘಟನೆ ಹಾಗೂ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ಹೇಳಿವೆ.

ಕೆಪಿಸಿಸಿಗೆ ಭಾರೀ ಸರ್ಜರಿ?: ರಾಹುಲ್‌ ಭೇಟಿಗಾಗಿ ಡಿಕೆಶಿ ದಿಲ್ಲಿಗೆ, ಭಾರೀ ಕುತೂಹಲ!

ಮೂರು ದಿನಗಳ ಕಾಲ ದೆಹಲಿ ಪ್ರವಾಸ ಮಾಡಿರುವ ಡಿ.ಕೆ.ಶಿವಕುಮಾರ್‌ ಅವರು ರಾಹುಲ್‌ ಗಾಂಧಿ ಮತ್ತು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರನ್ನು ಭೇಟಿಯಾಗಿ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದರು. ಸಿದ್ದರಾಮಯ್ಯ ಸಹ ಈ ಹಿಂದೆಯೇ ರಾಹುಲ್‌ ಗಾಂಧಿಯವರ ಭೇಟಿಗೆ ಕಾಲಾವಕಾಶ ಕೇಳಿದ್ದರು.

ಪ್ರಸ್ತುತ ಕೆಪಿಸಿಸಿ ಅಧ್ಯಕ್ಷರು ಹೈಕಮಾಂಡ್‌ ಭೇಟಿ ಮಾಡಿ ಪದಾಧಿಕಾರಿಗಳ ನೇಮಕ, ಜಿಲ್ಲಾಧ್ಯಕ್ಷರ ಬದಲಾವಣೆ ವಿಚಾರಗಳ ಬಗ್ಗೆ ಚರ್ಚೆ ನಡೆಸಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಅಭಿಪ್ರಾಯವನ್ನು ಹೈಕಮಾಂಡ್‌ ಪಡೆಯಲಿದೆ. ಈ ಪ್ರಕ್ರಿಯೆ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ವೇಳೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.