ಶ್ರೀರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ ಅಚ್ಚರಿ ಮೂಡಿಸಿದ ಸಿದ್ದು
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೀರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ ಅಚ್ಚರಿ ಮೂಡಿಸಿದ್ದಾರೆ.
ಮೈಸೂರು, (ಫೆ.19) : ಅಯೋಧ್ಯೆಯ ವಿವಾದಾತ್ಮಕ ರಾಮ ಮಂದಿರಕ್ಕೆ ನಾನು ದೇಣಿಗೆಯನ್ನು ನೀಡುವುದಿಲ್ಲ. ಬೇರೆ ಎಲ್ಲಿಯಾದರೂ ರಾಮನ ಮಂದಿರಕ್ಕೆ ಬೇಕಾದರೇ ದೇಣಿಗೆ ನೀಡುತ್ತೇನೆ ಎಂದು ಹೇಳುವ ಮೂಲಕ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿವಾದ ಸೃಷ್ಟಿಸಿಕೊಂಡಿದ್ದರು.
ಇದೀಗ ಮೈಸೂರಿನಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದರು.
ಹೌದು...ಮೈಸೂರು ಜಿಲ್ಲೆಯ ಕೆ.ಆರ್. ನಗರದಲ್ಲಿ ಇಂದು (ಶುಕ್ರವಾರ) ಉಪ್ಪಾರ ಸಮುದಾಯದವರು ನಿರ್ಮಿಸಿರುವ ಶ್ರೀರಾಮ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಪೂಜೆ ಸಲ್ಲಿಸಿದರು.
'ವಿವಾದಿತ ರಾಮ ಮಂದಿರಕ್ಕೆ ದೇಣಿಗೆ ಕೊಡಲ್ಲ, ಬೇರೆ ಕಡೆ ಕಟ್ಟಿದರೇ ದೇಣಿಗೆ ಕೊಡುತ್ತಿದ್ದೆ'
ಕಾರ್ಯಕ್ರಮದಲ್ಲಿ ಭಗೀರಥ ಮಹಾ ಸಂಸ್ಥಾನ ಮಠದ ಶ್ರೀ ಪುರುಷೋತ್ತಮಾನಂದ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕರಾದ ರವಿಶಂಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು ಎಂದು ಸ್ವತಃ ಸಿದ್ದರಾಮಯ್ಯ ಅವರು ಫೋಟೋ ಸಮೇತ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಸಿದ್ದರಾಮಯ್ಯ ಅವರು ಶ್ರೀರಾಮ ಮಂದಿರದ ದೇಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ನೀಡಿದ ವಿವಾದಾತ್ಮಕ ಹೇಳಿಕೆಗೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಕಾರಣಕ್ಕಾಗಿ ಹಲವು ರಾಜಕೀಯದ ಪ್ರಮುಖ ನಾಯಕರು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.