ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಹಲವು ಸಚಿವ ಸ್ಥಾನಾಕಾಂಕ್ಷಿಗಳು ಪಟ್ಟಿಯಲ್ಲಿದ್ದಾರೆ. ಆದರೆ ಮುಸ್ಲಿಂ ಮತ್ತು ದಲಿತ ಕೋಟಾದಲ್ಲಿ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದ ವರಿಷ್ಠರು ಗಂಭೀರವಾಗಿ ಚಿಂತನೆ ನಡೆಸಿದ್ದಾರೆ.

ಬೆಂಗಳೂರು : ಪಕ್ಷದೊಳಗೆ ಭಿನ್ನದನಿ ಹುಟ್ಟಿಗೆ ಅವಕಾಶ ನೀಡದೆ ಸಚಿವ ಸಂಪುಟ ವಿಸ್ತರಣೆ ವೇಳೆ ಖಾಲಿ ಇರುವ ಎರಡು ಸಚಿವ ಸ್ಥಾನಗಳನ್ನು ಭರ್ತಿ ಮಾಡಲು ಜೆಡಿಎಸ್‌ ಪಾಳೆಯದಲ್ಲಿ ಕಸರತ್ತು ನಡೆಯುತ್ತಿದ್ದು, ಮುಸ್ಲಿಂ ಮತ್ತು ದಲಿತ ಕೋಟಾದಲ್ಲಿ ಸಚಿವ ಸ್ಥಾನ ನೀಡುವ ಬಗ್ಗೆ ಪಕ್ಷದ ವರಿಷ್ಠರು ಗಂಭೀರವಾಗಿ ಚಿಂತನೆ ನಡೆಸಿದ್ದಾರೆ.

ಆರ್ಥಿಕ ಸಂಕಷ್ಟದಲ್ಲಿ ಪಕ್ಷಕ್ಕೆ ಅಪದ್ಬಾಂಧವ ಮತ್ತು ಸಂಪನ್ಮೂಲ ವ್ಯಕ್ತಿಯಾಗಿರುವ ವಿಧಾನಪರಿಷತ್‌ ಸದಸ್ಯ ಬಿ.ಎಂ.ಫಾರೂಕ್‌ಗೆ ಎರಡನೇ ಹಂತದ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ನೀಡುವ ಸಾಧ್ಯತೆ ಹೆಚ್ಚಿದೆ. ಬಿಎಸ್‌ಪಿ ಶಾಸಕ ಎನ್‌.ಮಹೇಶ್‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ದಲಿತ ಕೋಟಾದಲ್ಲಿ ಶಾಸಕ ಎಚ್‌.ಕೆ.ಕುಮಾರಸ್ವಾಮಿ ಅವರಿಗೆ ಸಚಿವ ಸ್ಥಾನ ಭಾಗ್ಯ ಒಲಿದು ಬರುವ ಸಂಭವ ಇದೆ ಎಂದು ತಿಳಿದು ಬಂದಿದೆ.

ಆದರೆ, ಹಂಗಾಮಿ ಸಭಾಪತಿಯಾಗಿರುವ ಹಿರಿಯ ನಾಯಕ ಬಸವರಾಜ ಹೊರಟ್ಟಿಸಹ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಅವರಿಗೆ ಸ್ಥಾನ ಸಿಗುವ ಸಾಧ್ಯತೆ ಕ್ಷೀಣಿಸುತ್ತಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಜೆಡಿಎಸ್‌ ಪಾಳೆಯದಲ್ಲಿ ಮುಸ್ಲಿಂ ಸಮುದಾಯದ ಯಾವೊಬ್ಬ ಶಾಸಕರೂ ಆಯ್ಕೆಯಾಗಿಲ್ಲ. ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಫಾರೂಕ್‌ ಅವರನ್ನು ಸೋಲಿಸಲಾಯಿತು. ಪಕ್ಷದ ಸಂಪನ್ಮೂಲ ವ್ಯಕ್ತಿಯಾಗಿರುವ ಕಾರಣ ಅವರಿಗೆ ಮನ್ನಣೆ ನೀಡಲು ವಿಧಾನಪರಿಷತ್‌ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು. ಮೈತ್ರಿ ಸರ್ಕಾರದಲ್ಲಿ ಜೆಡಿಎಸ್‌ಗೆ ಸಿಕ್ಕಿರುವ ಸ್ಥಾನಗಳ ಪೈಕಿ ಸದ್ಯಕ್ಕೆ ಎರಡು ಖಾಲಿ ಇದ್ದು, ಒಂದು ಸ್ಥಾನವನ್ನು ಫಾರೂಕ್‌ಗೆ ನೀಡಲು ಈಗಾಗಲೇ ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ. ಹೀಗಾಗಿ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮುಸ್ಲಿಂ ಕೋಟಾದಡಿ ಫಾರೂಕ್‌ಗೆ ಸ್ಥಾನ ನೀಡುವುದು ಬಹುತೇಕ ಖಚಿತ ಎಂದು ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ.

ಇನ್ನು ದಲಿತ ಕೋಟಾದಲ್ಲಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಬಿಎಸ್‌ಪಿಯ ಎನ್‌.ಮಹೇಶ್‌ ಅವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಆದರೆ, ಬಿಎಸ್‌ಪಿಯಲ್ಲಿ ನಡೆದ ಬೆಳವಣಿಗೆಯಿಂದಾಗಿ ಮಹೇಶ್‌ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ರಾಜೀನಾಮೆ ನೀಡುತ್ತಿದ್ದಂತೆ ಜೆಡಿಎಸ್‌ನ ದಲಿತ ಕೋಟಾದಲ್ಲಿ ಸಚಿವ ಸ್ಥಾನಕ್ಕೆ ಲಾಬಿ ಶುರುವಾಗಿದೆ. ಎಚ್‌.ಕೆ.ಕುಮಾರಸ್ವಾಮಿ ಜೆಡಿಎಸ್‌ನಿಂದ ಆರು ಬಾರಿ ಶಾಸಕರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಲೆಕ್ಕಾಚಾರ ನಡೆದಿದೆ. ಆದರೆ, ಕುಮಾರಸ್ವಾಮಿ ಅವರಿಗೆ ಮಂಡ್ಯ ಜಿಲ್ಲೆಯ ಶಾಸಕ ಅನ್ನದಾನಿ ಪೈಪೋಟಿ ಒಡ್ಡುತ್ತಿದ್ದಾರೆ.

ಮುಸ್ಲಿಂ ಕೋಟಾದಲ್ಲಿ ಸಚಿವ ಸ್ಥಾನ ನೀಡಲು ವರಿಷ್ಠರಿಗೆ ಯಾವುದೇ ಸಮಸ್ಯೆ ಇಲ್ಲ. ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ತಮ್ಮ ರಾಜಕೀಯ ಲೆಕ್ಕಾಚಾರದಲ್ಲಿ ತೊಡಗಿದ್ದು, ಅಂತಿಮ ಹಂತದಲ್ಲಿ ಯಾರಿಗೆ ಅವಕಾಶ ನೀಡಲಿದ್ದಾರೆ ಎಂಬುದು ಪಕ್ಷದಲ್ಲಿಯೂ ಕುತೂಹಲ ಮೂಡಿಸಿದೆ.

ಮಂಡ್ಯ ಜಿಲ್ಲೆಯಿಂದ ಪ್ರತಿನಿಧಿಸುವ ಸಚಿವರು ಈಗಾಗಲೇ ಇಬ್ಬರಿದ್ದಾರೆ. ಜಾತಿ ಲೆಕ್ಕಾಚಾರದಲ್ಲಿ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಕ್ಕೆ ಸೇರಿದ ಶಾಸಕರು ಸ್ಥಾನವನ್ನು ಆಲಂಕರಿಸಿದ್ದಾರೆ. ಜೊತೆಗೆ ಲೋಕಸಭಾ ಚುನಾವಣೆ ದೃಷ್ಟಿಯಿಂದ ಹಾಸನದ ಎಚ್‌.ಕೆ.ಕುಮಾರಸ್ವಾಮಿಗೆ ಸಚಿವ ಸ್ಥಾನ ನೀಡಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.


ವರದಿ : ಪ್ರಭುಸ್ವಾಮಿ ನಟೇಕರ್‌