Asianet Suvarna News Asianet Suvarna News

ರಾಜ್ಯಾದ್ಯಂತ ಕನ್ನಡ ನಾಮಫಲಕಕ್ಕೆ ಸರ್ಕಾರದಿಂದ ಫೆ.28 ಗಡುವು: ಸಿಎಂ ಸಿದ್ದರಾಮಯ್ಯ

ಕನ್ನಡ ನಾಮಫಲಕಗಳ ಕುರಿತು ರಾಜ್ಯಾದ್ಯಂತ ನಡೆಯುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಜತೆ ಗೃಹ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು.

Statewide Kannada nameplate deadline set by Govt on Feb 28 Says CM Siddaramaiah gvd
Author
First Published Dec 29, 2023, 4:45 AM IST

ಬೆಂಗಳೂರು (ಡಿ.29): ರಾಜ್ಯಾದ್ಯಂತ ಅಂಗಡಿ-ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು ಕಡ್ಡಾಯಗೊಳಿಸುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಅಲ್ಲದೆ, ಸುಗ್ರೀವಾಜ್ಞೆ ಮೂಲಕ ಜಾರಿಯಾಗಲಿರುವ ತಿದ್ದುಪಡಿ ಕಾನೂನು ಅನ್ವಯ 2024ರ ಫೆಬ್ರವರಿ 28ರ ಒಳಗಾಗಿ ರಾಜ್ಯದಲ್ಲಿನ ಎಲ್ಲಾ ‘ವಾಣಿಜ್ಯ ಕೈಗಾರಿಕೆ, ವ್ಯಾಪಾರ ಸಂಸ್ಥೆ, ಸಮಾಲೋಚನಾ ಕೇಂದ್ರ, ಆಸ್ಪತ್ರೆ, ಪ್ರಯೋಗಾಲಯ, ಮನೋರಂಜನಾ ಕೇಂದ್ರ ಮತ್ತು ಹೋಟೆಲ್‌’ ಮುಂತಾದವುಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಮಾಡಬೇಕು. ಉಳಿದ ಶೇ.40ರಷ್ಟು ಮಾತ್ರ ಇತರೆ ಭಾಷೆ ಇರಬೇಕು. ಇಲ್ಲದಿದ್ದರೆ ಕಾನೂನು ಪ್ರಕಾರ ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಪ್ರಧಾನಿ ಮೋದಿ ಗ್ಯಾರಂಟಿಗಳ ಬಗ್ಗೆ ಮಾತನಾಡದ ಕಾಂಗ್ರೆಸ್ ಸರ್ಕಾರ: ನಾರಾಯಣಸ್ವಾಮಿ ವಾಗ್ದಾಳಿ

ಕನ್ನಡ ನಾಮಫಲಕಗಳ ಕುರಿತು ರಾಜ್ಯಾದ್ಯಂತ ನಡೆಯುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ಜತೆ ಗೃಹ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿದ್ದರಾಮಯ್ಯ ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2018ರ ಮಾರ್ಚ್ ತಿಂಗಳಲ್ಲಿ ನಮ್ಮ ಸರ್ಕಾರವು ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಹಾಗೂ ಶೇ.40 ರಷ್ಟು ಇತರೆ ಭಾಷೆ ಇರಬೇಕು ಎಂದು ಸುತ್ತೋಲೆ ಹೊರಡಿಸಿತ್ತು. 

ಬಳಿಕ 2023ರ ಮಾರ್ಚ್‌ ತಿಂಗಳಲ್ಲಿ ಹಿಂದಿನ ಬಿಜೆಪಿ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ 2022ರ ಸೆಕ್ಷನ್‌ 17 (6) ರ ಪ್ರಕಾರ ನಾಮಫಲಕದ ಅರ್ಧಭಾಗವು (ಶೇ.50) ಕನ್ನಡದಲ್ಲಿ ಇರತಕ್ಕದ್ದು ಎಂದು ತಿಳಿಸಿದೆ. ಇದೀಗ ನಮ್ಮ ಸರ್ಕಾರವು 2018ರ ಸುತ್ತೋಲೆಯಂತೆಯೇ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಕಾಯಿದೆ 2022ರ ಸೆಕ್ಷನ್‌-17 (6)ಕ್ಕೆ ತಿದ್ದುಪಡಿ ತಂದಿದ್ದು, 2024ರ ಫೆಬ್ರವರಿ 28 ರೊಳಗೆ ಅನುಷ್ಠಾನಗೊಳಿಸಲು ವಾಣಿಜ್ಯ ಮಳಿಗೆಗಳಿಗೆ ಗಡುವು ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಜಾಹೀರಾತು, ಸೂಚನಾ ಫಲಕದಲ್ಲೂ ಕನ್ನಡಕ್ಕೆ ಆದ್ಯತೆ: ಇನ್ನು ಈ ಕಾಯ್ದೆಯ ನಿಯಮ 17(8) ರಲ್ಲಿ ರಾಜ್ಯದಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾದ ಜಾಹೀರಾತು ಮತ್ತು ಸೂಚನೆಗಳನ್ನು ಪ್ರದರ್ಶಿಸುವ ಎಲ್ಲ ಫಲಕಗಳಲ್ಲಿನ ವಿಷಯಗಳ ನಿಗದಿತ ಶೇಕಡಾವಾರು ಪ್ರಮಾಣವು ಕನ್ನಡ ಭಾಷೆಯಲ್ಲಿರಬೇಕು. ಜಾಹೀರಾತುಗಳ ವರ್ಗೀಕರಣ ಮತ್ತು ಕನ್ನಡದಲ್ಲಿ ಪ್ರದರ್ಶಿಸಬೇಕಾದ ಜಾಹೀರಾತು ವಿಷಯಗಳ ಶೇಕಡಾವಾರು ಪ್ರಮಾಣವು ರಾಜ್ಯ ಸರ್ಕಾರದಿಂದ ಸೂಚಿಸಿದಂತೆ ಇರಬೇಕು ಎಂಬ ನಿಯಮ ಇದೆ. ಈ ಅಧಿನಿಯಮಕ್ಕೆ ಉಭಯ ಸದನಗಳಲ್ಲಿ ಒಪ್ಪಿಗೆ ಸಿಕ್ಕಿದ್ದು ರಾಜ್ಯಪಾಲರೂ ಅಂಗೀಕಾರ ಸೂಚಿಸಿದ್ದಾರೆ. ಆದರೆ, ಈ ಬಗ್ಗೆ ನಿಯಮಗಳನ್ನು ರೂಪಿಸುವ ಕೆಲಸ ಆಗಿಲ್ಲ. ಇದೀಗ ಸುಗ್ರೀವಾಜ್ಞೆ ಹೊರಡಿಸಿ ತಕ್ಷಣ ನಿಯಮಗಳನ್ನು ರೂಪಿಸಿ ಜಾರಿಗೆ ತರಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ರಾಜ್ಯಾದ್ಯಂತ ಅನ್ವಯ: ಈ ನಾಮಫಲಕ, ಜಾಹೀರಾತು ಹಾಗೂ ಸೂಚನಾಫಲಕದ ನಿಯಮ ರಾಜ್ಯಾದ್ಯಂತ ಅನ್ವಯ ಆಗಲಿದೆ. ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಈ ಬಗ್ಗೆ ನಿಗಾ ವಹಿಸಲಿವೆ. ಫೆ.28ರ ಬಳಿಕವೂ ಕನ್ನಡ ಬಳಕೆ ನಿಯಮಾನುಸಾರ ಆಗದಿದ್ದರೆ ಅಂತಹವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.

ಸುಗ್ರೀವಾಜ್ಞೆ ಯಾಕೆ?: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ಕ್ಕೆ ಉಭಯ ಸದನಗಳಲ್ಲಿ ಒಪ್ಪಿಗೆ ದೊರೆತು ರಾಜ್ಯಪಾಲರ ಅಂಗೀಕಾರ ಸಿಕ್ಕಿದ್ದರೂ ನಿಯಮಾವಳಿ ರೂಪಿಸಿ ಜಾರಿಯಾಗಿಲ್ಲ. ಇದೀಗ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ಮಾಡಬೇಕಾದರೆ ಉಭಯ ಸದನಗಳಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಬೇಕು. ಮೂಲಗಳ ಪ್ರಕಾರ, ಮುಂದಿನ ಜಂಟಿ ಅಧಿವೇಶನವು 2024ರ ಫೆಬ್ರುವರಿ ಎರಡನೇ ವಾರದಲ್ಲಿ ನಡೆಯಲಿದೆ. ಹೋರಾಟ ಕಾವು ಪಡೆದಿರುವುದರಿಂದ ಅಲ್ಲಿಯವರೆಗೂ ನಾಮಫಲಕಗಳಲ್ಲಿ ಕನ್ನಡ ಬಳಕೆ ನಿಯಮ ಅನುಷ್ಠಾನಕ್ಕೆ ಕಾಯಲು ಸಾಧ್ಯವಿಲ್ಲ. ಹೀಗಾಗಿ ಸುಗ್ರೀವಾಜ್ಞೆ ತರಲು ನಿರ್ಧರಿಸಲಾಗಿದೆ.

ರಾಜ್ಯದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ: ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಭಾಷೆ. ಕನ್ನಡವೇ ಆಡಳಿತ ಭಾಷೆ. ನಾನು ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿದ್ದವನು. ನಾನು ಸಹಿ ಸಹಿತ ಕಡತಗಳ ಮೇಲೆ ಯಾವುದೇ ಸೂಚನೆಯನ್ನೂ ಕನ್ನಡದಲ್ಲೇ ಬರೆಯುತ್ತೇನೆ. ನಮ್ಮ ಸರ್ಕಾರ ಕನ್ನಡಕ್ಕಾಗಿ ಬದ್ಧವಾಗಿದೆ.

ಕಾನೂನು ಕೈಗೆತ್ತಿಕೊಂಡರೆ ಸಹಿಸಲ್ಲ: ಇನ್ನು ಶಾಂತಿಯುತವಾದ ಪ್ರತಿಭಟನೆ ಮಾಡಲು ಸರ್ಕಾರದ ವಿರೋಧ ಇಲ್ಲ. ನಮಗೆ ಪ್ರಜಾಪ್ರಭುತ್ವದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇದೆ. ಆದರೆ ಕಾನೂನಿಗೆ ವಿರುದ್ಧವಾಗಿ ಯಾರಾದರೂ ನಡೆದುಕೊಂಡರೆ ಅದನ್ನು ಸರ್ಕಾರ ಸಹಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳ ಬಯಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅಲ್ಪಸಂಖ್ಯಾತರ ಸರ್ಕಾರ ಮಾಡ್ತೀರಾ?: ಸಚಿವ ದಿನೇಶ್‌ಗೆ ರೇಣುಕಾಚಾರ್ಯ ಪ್ರಶ್ನೆ

2022ರ ಮಾ.3ರಂದು ಹೈಕೋರ್ಟ್‌ ಪ್ರತಿಭಟನೆ, ಧರಣಿಗಳನ್ನು ಸ್ವಾತಂತ್ರ್ಯ ಉದ್ಯಾನವನದಲ್ಲಿ ಮಾತ್ರ ಮಾಡಬೇಕು. ಇದನ್ನು ಸರ್ಕಾರ ಖಾತರಿಪಡಿಸಬೇಕು ಎಂದು ಸ್ಪಷ್ಟ ಆದೇಶ ನೀಡಿದೆ. ಹೀಗಿದ್ದರೂ ರಾಜ್ಯದ ಹಿತದೃಷ್ಟಿಯಿಂದ ಶಾಂತಿಯುತ ಪ್ರತಿಭಟನೆ ಮಾಡಿದರೆ ನಾವು ವಿರೋಧಿಸುವುದಿಲ್ಲ. ಆದರೆ ಕಾನೂನು ಕೈಗೆ ತೆಗೆದುಕೊಂಡರೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ಸಂಘಟನೆಯಿರಲಿ, ವ್ಯಕ್ತಿಗಳಿರಲಿ, ಖಾಸಗಿ ಸಂಸ್ಥೆಗಳಿರಲಿ ಯಾರಾದರೂ ಸಂವಿಧಾನಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು. ಯಾರೂ ಕಾನೂನು ಕೈಗೆ ತೆಗೆದುಕೊಳ್ಳಬೇಡಿ ಎಂದು ಮನವಿ ಮಾಡುತ್ತೇನೆ.

Latest Videos
Follow Us:
Download App:
  • android
  • ios