ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಉಪಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಾರಂಭ
ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಮತಸಮರಕ್ಕೆ ಸಜ್ಜಾಗಿದ್ದು, ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಶುಕ್ರವಾರ ಅಧಿಸೂಚನೆ ಪ್ರಕಟವಾಗಲಿದೆ. ತನ್ಮೂಲಕ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಬೆಂಗಳೂರು (ಅ.18): ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಮತಸಮರಕ್ಕೆ ಸಜ್ಜಾಗಿದ್ದು, ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಶುಕ್ರವಾರ ಅಧಿಸೂಚನೆ ಪ್ರಕಟವಾಗಲಿದೆ. ತನ್ಮೂಲಕ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ.
ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಿಸಲಿದ್ದಾರೆ. ಶುಕ್ರವಾರ ಅಧಿಸೂಚನೆ ಪ್ರಕಟವಾಗಲಿದ್ದು, ಇದೇ ತಿಂಗಳು 25ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. 28ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. 30ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ನ.13ರಂದು ಮತದಾನ ನಡೆಯಲಿದ್ದು, ನ.23ರಂದು ಮತ ಎಣಿಕೆ ಜರುಗಲಿದೆ.
ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆಗೆ ಒತ್ತಡ ಇದೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಚನ್ನಪಟ್ಟಣ, ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾವಿ ಮತ್ತು ಇ.ತುಕಾರಾಂ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಿಗದಿ ಆಗಿದೆ. ಈ ನಡುವೆ ಮೂರೂ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆಗಾಗಿ ಕಸರತ್ತು ಆರಂಭವಾಗಿದ್ದು, ಎರಡು ಅಥವಾ ಮೂರು ದಿನಗಳಲ್ಲಿ ಅಂತಿಮಗೊಳ್ಳುವ ನಿರೀಕ್ಷೆಯಿದೆ.
ಜಿಲ್ಲಾಡಳಿತ ಸಜ್ಜು: ಸಂಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಪಾರದರ್ಶಕ, ನ್ಯಾಯಸಮ್ಮತ ಚುನಾವಣೆ ನಡೆಸಲು ಪೂರಕ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.ಸಂಡೂರು ವಿಧಾನಸಭೆ ಕ್ಷೇತ್ರ ಉಪ ಚುನಾವಣೆ-2024ರ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.
ಬೈಎಲೆಕ್ಷನ್‌ನಿಂದ ಡಿಕೆಶಿಗೆ ಚನ್ನಪಟ್ಟಣ ನೆನಪಾಗ್ತಿದೆ: ಎಚ್.ಡಿ.ಕುಮಾರಸ್ವಾಮಿ
ಸಂಡೂರು ವಿಧಾನಸಭೆ ಉಪಚುನಾವಣೆಗೆ ಹೊರಡಿಸಿರುವ ವೇಳಾಪಟ್ಟಿಯಂತೆ ಅ.18ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಸಲು ಅ.25 ಕೊನೆಯ ದಿನವಾಗಿದ್ದು, ಅ.28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅ.30 ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ನ.13ಕ್ಕೆ ಮತದಾನ, ನ.23ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ನ.25ರಂದು ಸಂಪೂರ್ಣ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಬೇಕಾದ ದಿನವಾಗಿದೆ ಎಂದು ತಿಳಿಸಿದರು.