ಬಿಆರ್‌ಎಸ್ ಮಿತ್ರ ಪಕ್ಷ ಜೆಡಿಎಸ್‌ಗೆ ಬೆಂಬಲ ಘೋಷಿಸಿದ ತೆಲಂಗಾಣ ಸಿಎಂ ಕೆಸಿಆರ್!
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಮೀಪಿಸುತ್ತಿದೆ. ಇದೀಗ ತೆಲಂಗಾಣದ ಭಾರತ್ ರಾಷ್ಟ್ರ ಸಮಿತಿ ಪಕ್ಷದ ಮುಖ್ಯಸ್ಥ, ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್, ಜೆಡಿಎಸ್‌ಗೆ ಬೆಂಬಲ ಸೂಚಿಸಿದ್ದಾರೆ.
ಹೈದರಾಬಾದ್(ಮಾ.26): ಕರ್ನಾಟಕ ವಿಧಾಸಭಾ ಚುನಾವಣೆ ಕೆಲವೇ ದಿನಗಳಲ್ಲಿ ಘೋಷಣೆಯಾಗಲಿದೆ. ಈಗಾಗಲೇ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಬಾರಿ ಅಧಿಕಾರ ನಮ್ಮದೆ ಎಂದು ಭರ್ಜರಿ ಪ್ರಚಾರ ಮಾಡುತ್ತಿದೆ. ಜೆಡಿಎಸ್ ಪಂಚರತ್ನ ಯಾತ್ರೆ ಮೂಲಕ ಈ ಬಾರಿ ವಿಶೇಷ ಪ್ರಚಾರ ನಡೆಸಿದೆ. ಇಂದು ಸಮಾರೋಪ ಸಮಾರಂಭಕ್ಕೂ ಮೊದಲೇ ಜೆಡಿಎಸ್‌ಗೆ ಸಿಹಿ ಸುದ್ದಿ ಸಿಕ್ಕಿದೆ. ಜೆಡಿಎಸ್ ಮಿತ್ರ ಪಕ್ಷ ಭಾರತ್ ರಾಷ್ಟ್ರ ಸಮಿತಿ ಬಹಿರಂಗವಾಗಿ ಜೆಡಿಎಸ್‌ಗೆ ಬೆಂಬಲ ಸೂಚಿಸಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಹೇಳಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣಾ ಅಖಾಡಕ್ಕೆ ಧುಮುಕಲು ಪ್ಲಾನ್ ಮಾಡಿದ್ದ ಭಾರತ್ ರಾಷ್ಟ್ರ ಸಮಿತಿ ಪಕ್ಷ ಇದೀಗ ಈ ನಿರ್ಧಾರ ಕೈಬಿಟ್ಟಿದೆ. ಇದರ ಬದಲು ಜೆಡಿಎಸ್ ಪಕ್ಷಕ್ಕೆ ಸಂಪೂರ್ಣ ಬೆಂಬಲ ಘೋಷಿಸಿದೆ. ಇತ್ತೀಚೆಗೆ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ತಮ್ಮ ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ ಪಕ್ಷವಾಗಿ ಬದಲಿಸಿದ್ದರು. ರಾಷ್ಟ್ರೀಯ ಪಕ್ಷವಾಗಿ ಘೋಷಿಸಿದ ಕೆಸಿಐರ್, ಕಲ್ಯಾಣ ಕರ್ನಾಟಕದ ಭಾಗದಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿ ರಾಷ್ಟ್ರೀಯ ಪಕ್ಷದ ಅಧಿಕೃತ ಹಣೆ ಪಟ್ಟಿ ಪಡೆದುಕೊಳ್ಳುವ ಭಾರಿ ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಈ ನಿರ್ಧಾರ ಕೈಬಿಟ್ಟಿರುವ ಕೆಸಿಆರ್, ಜೆಡಿಎಸ್‌ಗೆ ಬೆಂಬಲ ನೀಡುವುದಾಗಿ ಹೇಳಿದೆ.
ಇಬ್ಬರು ಘಟಾನುಘಟಿ ನಾಯಕರ ಸ್ಪರ್ಧೆ: ಬೊಂಬೆನಗರಿ ಚನ್ನಪಟ್ಟಣ ಹೈವೋಲ್ಟೇಜ್ ಕದನ!
ಮಾಜಿ ಪ್ರಧಾನಿ ದೇವೇಗೌಡರ ಮಾರ್ಗದರ್ಶನ, ಹೆಚ್‌ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಈ ಬಾರಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಜೆಡಿಎಸ್ ನಮ್ಮ ಮಿತ್ರ ಪಕ್ಷ. ಹೀಗಾಗಿ ನಾವು ಜೆಡಿಎಸ್‌ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದೇವೆ ಎಂದು ಕೆ ಚಂದ್ರಶೇಖರ್ ರಾವ್ ಹೇಳಿದ್ದಾರೆ. ಕಲ್ಯಾಣ ಕರ್ನಾಟಕದಲ್ಲಿನ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಕೆಸಿಆರ್ ಹಾಗೂ ಇತರ ಪ್ರಮುಖ ನಾಯಕರು ಪ್ರಚಾರ ಮಾಡಲಿದ್ದಾರೆ. ಈ ಮೂಲಕ ತೆಲುಗು ಭಾಷಿಗರು ಇರುವ ಪ್ರಾಂತ್ಯಗಳಲ್ಲಿ ಜೆಡಿಎಸ್ ಅಧಿಪತ್ಯ ಸಾಧಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ.
ಇನ್ನು ಇತ್ತೀಚೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭೇಟಿಯಾದ ಹೆಚ್‌ಡಿ ಕುಮಾರಸ್ವಾಮಿ, ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ತಮ್ಮ ಅಭ್ಯರ್ಥಿಗಳ ಪ್ರಚಾರಕ್ಕೆ ಆಗಮಿಸಬೇಕಾಗಿ ಮನವಿ ಮಾಡಿದ್ದಾರೆ. ಇತ್ತ ಮಮತಾ ಬ್ಯಾನರ್ಜಿ ಈ ಮನವಿಯನ್ನು ಒಪ್ಪಿಕೊಂಡಿದ್ದಾರೆ.
ನನ್ನನ್ನು ಕಟ್ಟಿಹಾಕಲು ಯಾರಿಂದಲೂ ಆಗುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ
ಈ ಬಾರಿಯ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಪಣ ತೊಟ್ಟಿರುವ ಜೆಡಿಎಸ್ , ಭಾರಿ ರಣತಂತ್ರ ಹೂಡಿದೆ. ಇತ್ತ ಕಾಂಗ್ರೆಸ್ ಹಾಗೂ ಬಿಜೆಪಿ ಕೂಡ ಗೆಲುವಿನ ವಿಶ್ವಾಸದಲ್ಲಿದೆ. ಇತರ ನಡುವೆ ಕೆಲ ಸಮೀಕ್ಷೆಗಳು ಕರ್ನಾಟಕದಲ್ಲಿ ಅತಂತ್ರ ವಿಧಾನಸಭಾ ಸೃಷ್ಟಿಯಾಗಲಿದೆ ಎಂದಿವೆ. ಹೀಗಾಗಿ ಕುತೂಹಲ ಹೆಚ್ಚಾಗಿದೆ.