ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾದ 16 ನೇ ಹಣಕಾಸು ಯೋಜನೆಯ ಅನುದಾನ ಮಿತಿ ಕಡಿಮೆ ಮಾಡದಂತೆ ಬಿಡುಗಡೆ ಮಾಡಬೇಕು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದರು.

ಯಲಬುರ್ಗಾ (ಜೂ.29): ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಬರಬೇಕಾದ 16 ನೇ ಹಣಕಾಸು ಯೋಜನೆಯ ಅನುದಾನ ಮಿತಿ ಕಡಿಮೆ ಮಾಡದಂತೆ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಲಾಗಿದೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಹಿಂದೆ 15ನೇ ಹಣಕಾಸು ಯೋಜನೆಯಡಿ ರಾಜ್ಯಕ್ಕೆ ಶಿಫಾರಸ್ಸು ಮಾಡಲಾಗಿದ್ದ ₹11495ಕೋಟಿ ವಿಶೇಷ ಅನುದಾನ ಲಭ್ಯವಾಗದ ಕಾರಣ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಹಿನ್ನಡೆಯಾಯಿತು.

15ನೇ ಹಣಕಾಸು ಆಯೋಗದಡಿ ಒಟ್ಟಾರೆ ₹80 ಸಾವಿರ ಕೋಟಿ ರಾಜ್ಯಕ್ಕೆ ನಷ್ಟವಾಗಿದೆ. ರಾಜ್ಯದ ಅಭಿವೃದ್ಧಿ ಹಿತದೃಷ್ಟಿಯಿಂದ 16ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಮುಂದಿನ ಐದು ವರ್ಷಗಳ ಕಾಲ ಪ್ರತಿ ವರ್ಷ ವಿತರಣೆಯಾಗುವ ಕೇಂದ್ರ ಸರ್ಕಾರದ ಅನುದಾನ ಕಡಿಮೆ ಆಗದಂತೆ ನೋಡಿಕೊಳ್ಳಬೇಕು. ಅಲ್ಲದೆ ಬೆಂಗಳೂರು ನಗರಕ್ಕೆ ಸುಮಾರು ₹50 ಸಾವಿರ ಕೋಟಿ, ಕಲ್ಯಾಣ ಕರ್ನಾಟಕಕ್ಕೆ ₹25000 ಕೋಟಿ ವಿಶೇಷ ಅನುದಾನ, ಮಲೆನಾಡು ಪ್ರದೇಶಕ್ಕೆ ಸುಮಾರು ₹10000 ಕೋಟಿ ಅನುದಾನ ಮತ್ತು ಪ್ರತಿವರ್ಷ ₹85000 ಕೋಟಿ ಕೇಂದ್ರದಿಂದ ನೀಡಬೇಕಾಗುತ್ತದೆ.

ನಮ್ಮ ಬೇಡಿಕೆಯನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಈ ಹಿಂದೆ ಆಗಿರುವ ಲೋಪದೋಷ ಮರುಕಳಿಸದಂತೆ ನೋಡಿಕೊಳ್ಳಬೇಕು. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ತಿಳಿಸಿದರು. ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಿಎಂ ಸಿದ್ದರಾಮಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಮತ್ತು ಆರ್ಥಿಕ ಇಲಾಖೆಯ ಅಧಿಕಾರಿಗಳು ನವದೆಹಲಿಯಲ್ಲಿ ಭೇಟಿ ಮಾಡಿ ಮನವರಿಕೆ ಮಾಡಲಾಯಿತು ತಿಳಿಸಿದರು.

2022-23ನೇ ಸಾಲಿನ ಕೇಂದ್ರದ ಬಜೆಟ್‌ನಲ್ಲಿ ಭದ್ರಾ ನೀರಾವರಿ ಯೋಜನೆಗೆ ₹5400ಕೋಟಿ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಈವರೆಗೆ ಹಣ ಬಿಡುಗಡೆಯಾಗಿಲ್ಲ. ೧೫ನೇ ಹಣಕಾಸು ಆಯೋಗದ ಶಿಫಾರಸಿನಿಂದ ಬರಬೇಕಾದ ₹11500 ಕೋಟಿ ಕೂಡಲೇ ಬಿಡುಗಡೆ ಮಾಡಬೇಕು. ಈ ವಿಷಯದ ಬಗ್ಗೆ ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಾಗುವುದು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ತಿಳಿಸಿದ್ದಾರೆ.