ಹಾಸನ[ಜ.30]: ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ ಆಗುವ ಸ್ಥಿತಿ ಇಲ್ಲ. ಏಕೆಂದರೇ ಎಲ್ಲರೂ ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತರು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಚನ್ನರಾಯಪಟ್ಟಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನಂತೂ ಅಧಿಕಾರಕ್ಕಾಗಿ ರಾಜಕೀಯ ಮಾಡುತ್ತಿಲ್ಲ. ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ದೇವರ ಆಶೀರ್ವಾದದಿಂದ ಅಧಿಕಾರ ಸಿಕ್ಕಿದೆ. ನಾನು ಉಪಮುಖ್ಯಮಂತ್ರಿ ಆಗಬೇಕೆಂಬುದು ಜನರ ಆಸೆ. ಆ ನಿರೀಕ್ಷೆಯಲ್ಲಿ ಕೆಲಸ ಮಾಡುತ್ತಿಲ್ಲ. ನಮ್ಮ ಹಾಗೂ ಜನರ ಅಭಿಪ್ರಾಯ ಏನೇ ಇರಲಿ ಪಕ್ಷದ ತೀರ್ಮಾನ ಮುಖ್ಯ ಎಂದು ಹೇಳಿದರು.

ರಾಜ್ಯಕ್ಕೆ ಮತ್ತೊಬ್ಬ ಉಪಮುಖ್ಯಮಂತ್ರಿ!: ಯಾರಿಗೆ ಹುದ್ದೆ?

ನಾನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಮುಜುಗರ ಮಾಡುವುದಿಲ್ಲ. ಇನ್ನು ಎರಡ್ಮೂರು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಬಿಜೆಪಿಯ ಎಲ್ಲ ಶಾಸಕರು ಒಗ್ಗಟ್ಟಿನಿಂದ ಇದ್ದೇವೆ. ಯಾವುದೇ ಗೊಂದಲವಿಲ್ಲದೆ ಸಚಿವ ಸಂಪುಟ ವಿಸ್ತರಣೆ ಆಗಲಿದೆ. ಇನ್ನು ಮಾಜಿ ಸಚಿವ ಎಚ್‌.ವಿಶ್ವನಾಥ್‌ಗೆ ಮಂತ್ರಿ ಸ್ಥಾನ ಕೊಡುವುದು ಹೈಕಮಾಂಡ್‌ ತೀರ್ಮಾನ. ನಮ್ಮದು ರಾಷ್ಟ್ರೀಯ ಪಕ್ಷ, ಇಲ್ಲಿ ವೈಯಕ್ತಿಕ ನಿರ್ಧಾರ ವಿಚಾರ ಮುಖ್ಯ ಆಗುವುದಿಲ್ಲ. ಪಕ್ಷ ಕೈಗೊಳ್ಳುವ ತೀರ್ಮಾನಕ್ಕೆ ಹಳಬರು, ಹೊಸಬರು ಬದ್ಧ ಎಂದು ಹೇಳಿದರು.