ಜೆಡಿಎಸ್ನ ಮತ್ತಿಬ್ಬರು ನಾಯಕರು ಕಾಂಗ್ರೆಸ್ಗೆ..!
ಜೆಡಿಎಸ್ ಪಕ್ಷದ ಇಬ್ಬರು ಪ್ರಮುಖ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ. ನೀವು (ಡಿಕೆಶಿ) ಹಾಗೂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಹೊರಟಿದ್ದು, ನಾವು ಸಹ ಕಾಂಗ್ರೆಸ್ ಪಕ್ಷಕ್ಕೆ ಅಳಿಲು ಸೇವೆ ಮಾಡುತ್ತೇವೆ ಎಂದು ಬಂದಿದ್ದಾರೆ: ಡಿ.ಕೆ. ಶಿವಕುಮಾರ್

ಬೆಂಗಳೂರು(ಜ.10): ಕನಕಪುರ ಕ್ಷೇತ್ರದಲ್ಲಿ 2008ರ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕೇವಲ 7,179 ಮತಗಳ ಅಂತರದಿಂದ ಸೋತಿದ್ದ ಡಿ.ಎಂ. ವಿಶ್ವನಾಥ್ ಹಾಗೂ ಮಂಡ್ಯ ಕ್ಷೇತ್ರದ ರಾಧಾಕೃಷ್ಣ ಸೇರಿ ಇಬ್ಬರು ಪ್ರಮುಖ ಜೆಡಿಎಸ್ ನಾಯಕರು ಸೋಮವಾರ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಜೆಡಿಎಸ್ ಪಕ್ಷದ ಇಬ್ಬರು ಪ್ರಮುಖ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ. ನೀವು (ಡಿಕೆಶಿ) ಹಾಗೂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಹೊರಟಿದ್ದು, ನಾವು ಸಹ ಕಾಂಗ್ರೆಸ್ ಪಕ್ಷಕ್ಕೆ ಅಳಿಲು ಸೇವೆ ಮಾಡುತ್ತೇವೆ ಎಂದು ಬಂದಿದ್ದಾರೆ. ನಮ್ಮ ಪಕ್ಷದಲ್ಲಿ ಹೊಸಬರು, ಹಳಬರು ಎಂಬ ವ್ಯತ್ಯಾಸವಿಲ್ಲದೆ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಲಾಗುವುದು ಎಂದು ಹೇಳಿದರು.
ನನ್ನ ತೇಜೋವಧೆ ಮಾಡಲು ಬಿಜೆಪಿ ಪುಸ್ತಕ: ಸಿದ್ದು ಆಕ್ರೋಶ
ಇನ್ನು ಮಂಡ್ಯದಲ್ಲಿ ಎಸ್.ಎಂ. ಕೃಷ್ಣ ಅವರ ಜತೆ ಉತ್ತಮ ಒಡನಾಟ ಇಟ್ಟುಕೊಂಡಿದ್ದವರು ಹಾಗೂ ಜೆಡಿಎಸ್ ಪಕ್ಷದ ಜತೆ ಗುರುತಿಸಿಕೊಂಡಿದ್ದ ರಾಧಾಕೃಷ್ಣ ಕಾಂಗ್ರೆಸ್ ಸೇರಿದ್ದಾರೆಂದರು. ಅವರು ಬಹಳ ಹಿಂದೆಯೇ ಯಾವುದೇ ಷರತ್ತು ಇಲ್ಲದೆ ಪಕ್ಷಕ್ಕೆ ಸೇರುತ್ತೇವೆ ಎಂದು ಹೇಳಿದ್ದರು. ಇದೀಗ ನನ್ನ ಭವಿಷ್ಯ ನಿಮ್ಮ ಕೈಯಲ್ಲಿದೆ ಎಂದು ಮಂಡ್ಯ ಜಿಲ್ಲೆಯ ನಾಯಕರ ಸಮ್ಮುಖದಲ್ಲಿ ಪಕ್ಷ ಸೇರುತ್ತಿದ್ದಾರೆ. ಎಲ್ಲರೂ ಸೇರಿ ಪಕ್ಷವನ್ನು ಅಧಿಕಾರಕ್ಕೆ ತರಲು ಕೆಲಸ ಮಾಡೋಣ ಎಂದು ಕರೆ ನೀಡಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಸಂಸದ ಡಿ.ಕೆ. ಸುರೇಶ್, ಮಾಜಿ ಸಚಿವ ಚೆಲುವರಾಯಸ್ವಾಮಿ ಸೇರಿದಂತೆ ಹಲವರು ಹಾಜರಿದ್ದರು.