ಮೋದಿ ಭೇಟಿ ಮಾಡಿದ ಸಚಿವ ಸೋಮಣ್ಣ: ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚೆ
ತುಮಕೂರು ಜಿಲ್ಲೆಯ ಅಭಿವೃದ್ಧಿ ಕುರಿತು ವಿಶೇಷ ಪ್ರಸ್ತಾವನೆಯನ್ನು ಪ್ರಧಾನಮಂತ್ರಿಗಳಿಗೆ ಸಲ್ಲಿಸಿದ ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರು, ತುಮಕೂರು ಲೋಕಸಭಾ ಕ್ಷೇತ್ರದ ಸರ್ವೋತೋಮುಖ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.
ತುಮಕೂರ(ಅ.09): ಕೇಂದ್ರ ರೈಲ್ವೆ ಮತ್ತು ಜಲ ಶಕ್ತಿ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಅವರು ನವದೆಹಲಿಯಲ್ಲಿ ಮಂಗಳವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು. ತುಮಕೂರು ಜಿಲ್ಲೆಯ ಅಭಿವೃದ್ಧಿ ಕುರಿತು ವಿಶೇಷ ಪ್ರಸ್ತಾವನೆಯನ್ನು ಪ್ರಧಾನಮಂತ್ರಿಗಳಿಗೆ ಸಲ್ಲಿಸಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದ ಸರ್ವೋತೋಮುಖ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.
ತುಮಕೂರು ಜಿಲ್ಲೆಯ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಕೇಂದ್ರ ಸಚಿವಾಲಯದಿಂದ 87 ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ಮೂಲಕ ಇಲಾಖೆಯ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಅತ್ಯಂತ ಸಹಕಾರ ನೀಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಅಭಿನಂದನೆ ಸಲ್ಲಿಸಿ, ತುಮಕೂರು- ರಾಯದುರ್ಗ ಮತ್ತು ತುಮ ಕೂರು-ಚಿತ್ರದುರ್ಗ - ದಾವಣಗೆರೆ ರೈಲ್ವೆ ಮಾರ್ಗವನ್ನು 2027ರ ಜೂನ್ ಮಾಹೆಯಲ್ಲಿ ಲೋಕಾರ್ಪಣೆ ಮಾಡಲು ತುಮಕೂರಿಗೆ ಆಗಮಿಸುವಂತೆ ಮತ್ತು ತುಮಕೂರು ರೈಲ್ವೆ ನಿಲ್ದಾಣಕ್ಕೆ ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಯಿಟಿ: ಕೇಂದ್ರ ಸಚಿವ ಸೋಮಣ್ಣ
ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದ ತುಮಕೂರು-ರಾಯದುರ್ಗ ರೈಲ್ವೇ ಮಾರ್ಗಕ್ಕೆ ಸಂಬಂಧಿಸಿದಂತೆ ಭೂಸ್ವಾಧಿನ ಪ್ರಕ್ರಿಯೆಯನ್ನು 3 ತಿಂಗಳಲ್ಲಿ ಶೇ.90ರಷ್ಟು ಪೂರ್ಣಗೊಳಿಸಿರುವ ಬಗ್ಗೆ ಮತ್ತು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಪ್ರಗತಿ ಪರಿಶೀಲನಾ ಸಭೆ ನಡೆಸಿರುವ ಕುರಿತು ಹಾಗೂ ರೈಲು ಮಾರ್ಗದ ಭೂಸ್ವಾಧೀನ ಪ್ರಕ್ರಿಯೆ ಪ್ರಗತಿಗೆ ಜಿಲ್ಲಾಡಳಿತ ಮತ್ತು ರೈಲ್ವೇ ಅಧಿಕಾರಿಗಳು ಉತ್ತಮ ಸಹಕಾರ ನೀಡುತ್ತಿರುವ ಬಗ್ಗೆ ಪ್ರಧಾನ ಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ.