ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಮೂಲಕ ಗೆಲುವು ಸಾಧಿಸಿ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು.

ಬೆಂಗಳೂರು (ಆ.09): ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಮೂಲಕ ಗೆಲುವು ಸಾಧಿಸಿ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ‘ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ’ ಪ್ರತಿಭಟನಾ ಸಮಾವೇಶದಲ್ಲಿ ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿಯಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು. ಜತೆಗೆ ರಾಹುಲ್‌ ಗಾಂಧಿ ಅವರು ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭಿಸಿದ್ದು, ಅದಕ್ಕೆ ನಾವೆಲ್ಲ ಬೆಂಬಲವಾಗಿ ನಿಲ್ಲುತ್ತೇವೆ ಎಂದು ಘೋಷಿಸಿದರು.

ಮತಗಳ್ಳತನ ವಿರುದ್ಧ ಕರ್ನಾಟಕದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ದೇಶದೆಲ್ಲೆಡೆ ವ್ಯಾಪಿಸಲಿದೆ. ಮತಗಳ್ಳತನದ ಕುರಿತು ರಾಹುಲ್‌ ಗಾಂಧಿ ಅವರು ಸಂಪೂರ್ಣ ಅಧ್ಯಯನ ಮಾಡಿ, ದಾಖಲೆಗಳನ್ನು ಜನರ ಮುಂದಿಟ್ಟಿದ್ದಾರೆ. ಸಂವಿಧಾನ ಕೊಟ್ಟಿರುವ ಮತದಾನದ ಹಕ್ಕನ್ನು ಯಾರೂ ಕಿತ್ತುಕೊಳ್ಳಲಾಗದು. ಅದಕ್ಕೆ ದೇಶದ ಜನ ಅವಕಾಶ ಕೊಡುವುದಿಲ್ಲ. ಆದರೂ, ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿ ಆ ಕೆಲಸಕ್ಕಿಳಿದಿದೆ ಎಂದು ಆರೋಪಿಸಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತಗಳ್ಳತನದ ಮೂಲಕ ಅಧಿಕಾರಕ್ಕೆ ಬಂದಿದೆ. ಅಲ್ಲದೆ, ನರೇಂದ್ರ ಮೋದಿ ಅವರು ಅದರ ಭಾಗವಾಗಿದ್ದು, ಪ್ರಧಾನಿಯಾಗಿದ್ದಾರೆ. ಅವರಿಗೆ ಪ್ರಧಾನಿಯಾಗಿ ಮುಂದುವರಿಯಲು ಯಾವುದೇ ನೈತಿಕತೆಯಿಲ್ಲ.

ಈ ಕೂಡಲೇ ಅವರು ರಾಜೀನಾಮೆ ನೀಡಬೇಕು. ಮತ್ತೊಮ್ಮೆ ನ್ಯಾಯಯುತ ಚುನಾವಣೆ ಎದುರಿಸಬೇಕು ಎಂದು ಆಗ್ರಹಿಸಿದರು. ಮನುವಾದಿಗಳು ಸಂವಿಧಾನದ ಪ್ರಕ್ರಿಯೆಯನ್ನೇ ತಪ್ಪು ದಾರಿಗೆಳೆಯುತ್ತಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ವಂಚನೆ ಕಾರಣದಿಂದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಸೋಲುವಂತಾಗಿದೆ. ಅಲ್ಲದೆ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್‌ ಕನಿಷ್ಠ 14 ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆಯಿತ್ತು. ಆದರೆ, ಮತಗಳ್ಳತದಿಂದ ನಾವು ಸೋತಿದ್ದೇವೆ. ಇದು ಈಗ ದಾಖಲೆ ಸಹಿತ ದೃಢಪಟ್ಟಿದೆ ಎಂದರು.

ಪ್ರತಿ ಕ್ಷೇತ್ರದಲ್ಲಿ ಲೀಗಲ್‌ ಬ್ಯಾಂಕ್‌ ಸ್ಥಾಪನೆ: ಸಂವಿಧಾನ, ಮತ ಹಕ್ಕನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಆ ಮತ ಹಕ್ಕನ್ನು ಉಳಿಸಲು ಮತ್ತು ನಕಲಿ ಮತದಾರರನ್ನು ಪಟ್ಟಿಯಲ್ಲಿ ಸೇರಿಸುವುದನ್ನು ತಡೆಯಲು ಆಸ್ಪತ್ರೆಗಳಲ್ಲಿ ಬ್ಲಡ್‌ ಬ್ಯಾಂಕ್‌ ಇರುವಂತೆ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಲೀಗಲ್‌ ಬ್ಯಾಂಕ್‌ ಮಾಡುತ್ತೇವೆ. ಅದರ ಮೂಲಕ ಸಂವಿಧಾನ ರಕ್ಷಣೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.