ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರ ಮನಸ್ಸು ಬಿಜೆಪಿಯಲ್ಲೇ ಇತ್ತು. ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಅಪೇಕ್ಷೆಯೂ ಇತ್ತು. ಅಪೇಕ್ಷೆಗೆ ತಕ್ಕಂತೆ ಉತ್ತಮ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 

ಬೆಂಗಳೂರು(ಜ.27): ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬರುವ ಯಾವುದೇ ನಾಯಕರನ್ನು ಪಕ್ಷಕ್ಕೆ ಸ್ವಾಗತಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರ ಮನಸ್ಸು ಬಿಜೆಪಿಯಲ್ಲೇ ಇತ್ತು. ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಅಪೇಕ್ಷೆಯೂ ಇತ್ತು. ಅಪೇಕ್ಷೆಗೆ ತಕ್ಕಂತೆ ಉತ್ತಮ ನಿರ್ಧಾರ ಮಾಡಿದ್ದಾರೆ ಎಂದು ತಿಳಿಸಿದರು.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳನ್ನೂ ಗೆಲ್ಲುವ ಗುರಿ ಇದೆ. ನಾನು ಈ ಮಾತನ್ನು ಸುಮ್ಮನೆ ಹೇಳುತ್ತಿಲ್ಲ. ರಾಜ್ಯದಾದ್ಯಂತ ನರೇಂದ್ರ ಮೋದಿ ಅವರ ಪರವಾದ ಅಲೆ ಇದೆ. ಹಾಗಾಗಿ ಈ ವಿಚಾರದಲ್ಲಿ ನನಗೆ ವಿಶ್ವಾಸ ಇದೆ ಎಂದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ ಎಂಬುದರ ಬಗ್ಗೆ ಪಕ್ಷದ ಕೇಂದ್ರದ ವರಿಷ್ಠರು ನಿರ್ಧಾರ ಮಾಡುತ್ತಾರೆ. ಪಕ್ಷದ ಕಾರ್ಯಕರ್ತರ ನಿರೀಕ್ಷೆಗೆ ಅನುಗುಣವಾಗಿ ಈ ನಿರ್ಧಾರ ಇರಲಿದೆ ಎಂದು ಹೇಳಿದರು.

ವಿಜಯೇಂದ್ರ ನೇತೃತ್ವದಲ್ಲಿ ಇಂದು ರಾಜ್ಯ ಬಿಜೆಪಿ ಮೊದಲ ಕಾರ್ಯಕಾರಿಣಿ

ಶೆಟ್ಟರ್ ಯಾವುದೇ ಬೇಡಿಕೆ ಇಟ್ಟಿಲ್ಲ: ವಿಜಯೇಂದ್ರ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಯಾವುದೇ ಬೇಡಿಕೆ ಇಲ್ಲದೆ ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ. ಶೆಟ್ಟರ್‌ಬಿಜೆಪಿ ಸೇರ್ಪಡೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಮಾಹಿತಿ ಇರಲಿಲ್ಲ. ಈವಿಚಾರದಲ್ಲಿ ಸಿದ್ದರಾಮಯ್ಯ ಅವರ ಇಂಟೆಲಿಜೆನ್ಸ್ ಕೂಡ ಕೈ ಕೊಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿ, ಶೆಟ್ಟರ್ ಬಿಜೆಪಿ ಸೇರ್ಪಡೆ ವಿಚಾರ ತಿಳಿದು ಕಾಂಗ್ರೆಸ್ ನಾಯಕರು ಕಕ್ಕಾಬಿಕ್ಕಿಯಾಗಿದ್ದಾರೆ ಎಂದರು. ಇನ್ನು ಮಾಜಿ ಸಚಿವ ಲಕ್ಷ್ಮಣ ಸವದಿ ಅವರು ದೈಹಿಕವಾಗಿ ಕಾಂಗ್ರೆಸ್ ಪಕ್ಷದಲ್ಲಿ ಇದ್ದರೂ ಮಾನಸಿಕವಾಗಿ ಬಿಜೆಪಿಯಲ್ಲಿದ್ದಾರೆ. ನಾವು ಯಾರಹಿಂದೆಯೂ ಹೋಗಿಲ್ಲ. ಬಿಜೆಪಿಗೆ ಯಾರೇ ಬಂದರೂ ಸ್ವಾಗತಿಸುತ್ತೇವೆ ಎಂದು ವಿಜಯೇಂದ್ರ ಹೇಳಿದರು.