ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಪ್ರವಾಸವು ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಚರ್ಚೆಗಾಗಿಯೇ ಹೊರತು ಬೇರೆ ಕಾರಣಕ್ಕಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ವಿಶ್ವಾಸ. ಕುರುಬ ಸಮುದಾಯದ ಎಸ್‌ಟಿ ಮೀಸಲಾತಿ ಹೇಳಿದ್ದೇನು?

ದಾವಣಗೆರೆ: ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮಹಿಳಾ ಮೀಸಲಾತಿ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸ ಹೋಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ, ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶುಕ್ರವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಸಿದ್ದರಾಮಯ್ಯನವರು ದೆಹಲಿಗೆ ಹೋಗಿರುವುದು ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆ ಕುರಿತಂತೆ ಚರ್ಚಿಸಲು ಎಂದರು. ಸಿಎಂ ಬದಲಾವಣೆ ವಿಚಾರದ ಬಗ್ಗೆ ನವೆಂಬರ್‌ನಿಂದಲೇ ಹೇಳುತ್ತಿದ್ದಾರೆ. ಅದರ ಬಗ್ಗೆ ಜಾಸ್ತಿ ಮಾತನಾಡಬೇಕಾಗಿಲ್ಲ. ಸಿದ್ದರಾಮಯ್ಯ ಸದನದಲ್ಲೇ ಅದರ ಬಗ್ಗೆ ಉತ್ತರ ನೀಡಿದ್ದಾರೆ. ಉಪ ಚುನಾವಣೆ ಫಲಿತಾಂಶ ಬಳಿಕ ರಾಜಕೀಯ ಜಂಗಿ ನಿಕಾಲಿ ಕುಸ್ತಿ ಎಂದೆಲ್ಲಾ ವಿಪಕ್ಷದವರು ಹೇಳುತ್ತಿದ್ದಾರೆ. ಆದರೆ, ವಿಪಕ್ಷದವರು ಅಂದಿದ್ದೆಲ್ಲಾ ಆಗುವುದಿಲ್ಲ ಎಂದರು.

ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರ ಎರಡರಲ್ಲೂ ನಮ್ಮ ಪರ ಒಲವಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಉಭಯ ಕ್ಷೇತ್ರಗಳಲ್ಲಿ ಶೇಕಡವಾರು ಮತದಾನ ಪ್ರಮಾಣ ಹೆಚ್ಚಾಗಿರುವುದು ಸಹ ನಮಗೆ ಪ್ಲಸ್ ಪಾಯಿಂಟ್ ಆಗಿದೆ. ಎರಡೂ ಕಡೆಯಲ್ಲೂ ನಮ್ಮ ಪಕ್ಷದ ಅಭ್ಯರ್ಥಿಗಳೇ ಜಯ ಸಾಧಿಸಲಿದ್ದಾರೆ ಎಂದು ಅವರು ಹೇಳಿದರು.

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧವೇ ಸ್ವಪಕ್ಷದ ನಾಯಕರು ಷಡ್ಯಂತ್ರ ಮಾಡಿದ್ದಾರೆಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಸಲೀಂ ಅಹಮ್ಮದ್ ಹೇಳಿಕೆ ನೀಡಿರುವ ಬಗ್ಗೆ ಕುರಿತ ಪ್ರಶ್ನೆಗೆ, ಅವರ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ನಮ್ಮೆಲ್ಲಾ ನಾಯಕರು, ಮುಖಂಡರು, ಕಾರ್ಯಕರ್ತರು ಒಟ್ಟಾಗಿ, ಒಗ್ಗಟ್ಟಿನಿಂದ ಪಕ್ಷದ ಗೆಲುವಿಗಾಗಿ ಕೆಲಸ ಮಾಡಿದ್ದೇವೆ ಎಂದು ಪ್ರತಿಕ್ರಿಯಿಸಿದರು.

ಕುರುಬ ಸಮುದಾಯ ಎಸ್‌ಟಿಗೆ ಸೇರ್ಪಡೆ ವಿಚಾರದ ಬಗ್ಗೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಿದೆ. ಕೇಂದ್ರ ಸರ್ಕಾರ ಒಂದಿಷ್ಟು ಕ್ಲ್ಯಾರಿಫಿಕೇಷನ್ ಕೇಳಿದ್ದು, ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದೆ. ಕೇಂದ್ರದವರು ಏನು ಮಾಡುತ್ತಾರೋ ನೋಡಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.