ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಮನೆಯನ್ನು ಬಡವರಿಗೆ ಕೊಟ್ಟಿದ್ದನ್ನು ಸಾಬೀತು ಮಾಡಿದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಚಿವ ಜಮೀರ್ ಅಹಮದ್‌ ಖಾನ್ ಸವಾಲು ಹಾಕಿದ್ದಾರೆ.

ಕೊಪ್ಪಳ (ಅ.07): ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಮನೆಯನ್ನು ಬಡವರಿಗೆ ಕೊಟ್ಟಿದ್ದನ್ನು ಸಾಬೀತು ಮಾಡಿದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ವಕ್ಫ್‌, ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹಮದ್‌ ಖಾನ್ ಸವಾಲು ಹಾಕಿದ್ದಾರೆ. ಕೊಪ್ಪಳ ನಗರದ ಅಗಡಿ ಲೇಔಟ್‌ನಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿಯೇ ಸಚಿವ ಜಮೀರ್‌ ಆಕ್ರೋಶದಿಂದ ಸವಾಲು ಹಾಕಿದ್ದಾರೆ.

2013ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ 2.30 ಲಕ್ಷ ಮನೆ ನೀಡಿದ್ದರು. ಆದರೆ, ಅವು ಪೂರ್ಣಗೊಂಡಿರಲಿಲ್ಲ. ಆದರೆ, ಮತ್ತೆ ಅವರು ಅಧಿಕಾರಕ್ಕೆ ಬಂದ ಮೇಲೆ ಅವುಗಳನ್ನು ನಾವು ಪೂರ್ಣಗೊಳಿಸಿದ್ದೇವೆ. ಅದಕ್ಕಾಗಿ ಹೆಚ್ಚುವರಿಯಾಗಿ ₹9500 ಕೋಟಿಯನ್ನು ಸಿದ್ದರಾಮಯ್ಯ ನೀಡಿದ್ದಾರೆ. ಈ ನಡುವೆ ಅಧಿಕಾರ ನಡೆಸಿದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರ ಬಡವರಿಗೆ ಒಂದೇ ಒಂದು ಮನೆ ನೀಡಿಲ್ಲ. ನೀಡಿರುವುದು ಎಂದು ಸಾಬೀತು ಮಾಡಿದರೆ ಇವತ್ತೇ ರಾಜ್ಯಪಾಲರ ಬಳಿ ಹೋಗಿ, ರಾಜೀನಾಮೆ ನೀಡುವುದಾಗಿ ಸಚಿವ ಜಮೀರ್‌ ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಯಲ್ಲಿ ಮನೆ ನಿರ್ಮಾಣ ಮಾಡಲು ಸಹಾಯಧನ ನೀಡಲಾಗುತ್ತಿತ್ತು. ಇದರಲ್ಲಿ ಕೇಂದ್ರ ಸರ್ಕಾರ ಒಂದೂವರೆ ಲಕ್ಷ ರು. ಸಹಾಯಧನ ನೀಡಿ, ಅದರಲ್ಲಿ ₹1.30 ಲಕ್ಷ ಜಿಎಸ್‌ಟಿ ಮೂಲಕ ವಾಪಸ್‌ ಪಡೆಯುತ್ತಿತ್ತು ಎಂದು ಕಿಡಿಕಾರಿದರು. ಬಿಜೆಪಿಯವರು ಕೇವಲ ಧರ್ಮ, ಜಾತಿ ಎಂದು ಹೇಳಿಕೊಂಡು ಸಮಾಜ ಒಡೆಯುವ ಕೆಲಸ ಮಾಡುತ್ತಾರೆ. ಅವರಿಗೆ ಬಡವರ ಬಗ್ಗೆ, ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲ. ಅಂಥವರನ್ನು ದೂರವೇ ಇಡಿ ಎಂದು ಜನರಲ್ಲಿ ಮನವಿ ಮಾಡಿದರು.

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ

ಸಿದ್ದರಾಮಯ್ಯ ಅವರೇ ಪೂರ್ಣಾವಧಿಯವರೆಗೆ ಸಿಎಂ ಆಗಿರುತ್ತಾರೆ. ಇದರಲ್ಲಿ ಯಾವ ಬದಲಾವಣೆಯೂ ಇಲ್ಲ. ನವೆಂಬರ್‌ಗೆ ಯಾವ ಕ್ರಾಂತಿಯೂ ಆಗುವುದಿಲ್ಲ ಎಂದು ಪುನರುಚ್ಚರಿಸಿದರು. ನಗರದ ಖಾಸಗಿ ಹೋಟೆಲ್‌ಗೆ ಭೇಟಿ ನೀಡಿದ್ದ ವೇಳೆ ತಮ್ಮನ್ನು ಭೇಟಿಯಾದ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಈಗ ಮುಖ್ಯಮಂತ್ರಿ ಕುರ್ಚಿಯಲ್ಲಿ ಸಿದ್ದರಾಮಯ್ಯ ಕುಳಿತಿದ್ದಾರೆ. ಅವರೇ ಅವಧಿ ಮುಗಿಯುವವರೆಗೆ ಮುಖ್ಯಮಂತ್ರಿ ಆಗಿರುತ್ತಾರೆ. ಈ ವಿಷಯವನ್ನು ಸ್ವತಃ ಡಿ.ಕೆ.ಶಿವಕುಮಾರ್ ಕೂಡ ಹೇಳಿದ್ದಾರೆ. ಐದು ವರ್ಷ ನಾನೇ ಸಿಎಂ ಅಂತ ಮೈಸೂರಿನಲ್ಲಿ ಸಿದ್ದರಾಮಯ್ಯ ಕೂಡ ಹೇಳಿದ್ದಾರೆ.

ಆದರೂ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ. ಅವರವರ ಬೆಂಬಲಿಗರಿಗೆ ಅವರವರ ನಾಯಕರು ಮುಖ್ಯಮಂತ್ರಿ ಆಗಬೇಕು ಅನ್ನೋದು ಆಸೆ ಇರುತ್ತೆ, ಅದು ತಪ್ಪಲ್ಲ ಎಂದು ಜಾರಿಕೆ ಉತ್ತರ ನೀಡಿದರು. ನಮ್ಮ ಅಧ್ಯಕ್ಷರು (ಡಿ.ಕೆ.ಶಿವಕುಮಾರ್‌) ಯಾರ ಬಗ್ಗೆ ಮಾತನಾಡಬಾರದು ಅಂತ ಸೂಚನೆ ಕೊಟ್ಟಿದ್ದಾರೆ‌. ನಮ್ಮಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ಯಾರಾದರೂ ಮಾತನಾಡಿದರೆ ಕ್ರಮಕ್ಕೆ ಸೂಚನೆ ಕೊಟ್ಟಿದ್ದಾರೆ. ಈಗಾಗಲೇ ಹಲವರಿಗೆ ನೋಟಿಸ್ ಕೊಟ್ಟಿದ್ದಾರೆ. ಸದ್ಯಕ್ಕೆ ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.