ಪ್ರತಿ ಕುಟುಂಬಕ್ಕೂ ಉದ್ಯೋಗ ನನ್ನ ಗುರಿ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 101 ಗ್ರಾಮ ಪಂಚಾಯಿತಿಗಳಿದ್ದು, ಸುಮಾರು 2 ಲಕ್ಷ ಕುಟುಂಬಗಳಿವೆ. ಪ್ರತಿ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಿಕೊಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಹೇಳಿದ ಸಚಿವ ಕೆ.ಎಚ್.ಮುನಿಯಪ್ಪ
ದೇವನಹಳ್ಳಿ(ಸೆ.14): ಜಿಲ್ಲೆಯಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳ ಆಯೋಜಿಸುವ ಮೂಲಕ 2025ರ ಅಕ್ಟೋಬರ್ 2ರೊಳಗೆ ಜಿಲ್ಲೆಯ ಪ್ರತಿಯೊಂದು ಕುಟುಂಬದ ಒಬ್ಬರಿಗೆ ಉದ್ಯೋಗ ಸಿಗುವಂತೆ ಮಾಡುವುದು ನನ್ನ ಗುರಿ ಎಂದು ಆಹಾರ ಇಲಾಖೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೈಗಾರಿಕೆ ಕೇಂದ್ರ ಸಹಯೋಗದಲ್ಲಿ ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.
ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ: ಅ.3 ರಂದು ನಡೆಸಲು ನಿರ್ಧಾರ
ಜಿಲ್ಲೆಯಲ್ಲಿ 101 ಗ್ರಾಮ ಪಂಚಾಯಿತಿಗಳಿದ್ದು, ಸುಮಾರು 2 ಲಕ್ಷ ಕುಟುಂಬಗಳಿವೆ. ಪ್ರತಿ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಿಕೊಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಹೇಳಿದರು.
ಕಂಪನಿಗಳು ಕೂಡ ಉದ್ಯೋಗ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆ ಕೈಜೋಡಿಸಬೇಕು. ಕೌಶಲ್ಯ ಆಧಾರಿತ ಅಭ್ಯರ್ಥಿಗಳ ಅವಶ್ಯಕತೆ ಇದ್ದಲ್ಲಿ ಕಂಪನಿಗಳು ಮಾಹಿತಿಯನ್ನು ಸಂಬಂಧಪಟ್ಟ ಜಿಲ್ಲಾಡಳಿತಕ್ಕೆ ನೀಡಿದರೆ ಕಂಪನಿಗಳ ಬೇಡಿಕೆಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ಇಲಾಖೆಯಿಂದ ಕೌಶಲ್ಯ ತರಬೇತಿ ಕಲ್ಪಿಸಿಕೊಡಲಾಗುವುದು ಎಂದರು.
ಕಿಯೋನಿಕ್ಸ್ ಅಧ್ಯಕ್ಷ ಹಾಗೂ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಮಾತನಾಡಿ, ಯುವಕರಿಗೆ ವಿದ್ಯಾಭ್ಯಾಸವಷ್ಟೇ ನೀಡಿದರೆ ಸಾಕಾಗದು, ಅವರ ಶಿಕ್ಷಣಕ್ಕೆ ತಕ್ಕ ಉದ್ಯೋಗ ಕೊಡಿಸಿ, ಕುಟುಂಬದ ಆರ್ಥಿಕ ಸ್ಥಿತಿಗತಿ ಸುಧಾರಿಸುವ ಮೂಲಕ ಸಬಲರಾಗಿಸಬೇಕು ಎಂದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಮಾತನಾಡಿದರು.
ಸರ್ಕಾರಿ ನೌಕರಿ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ಎಲ್ಲ ವರ್ಗಕ್ಕೂ 3 ವರ್ಷ ವಯೋಮಿತಿ ಸಡಿಲಿಸಿದ ಸರ್ಕಾರ!
ನೇಮಕಾತಿ ಪತ್ರ ವಿತರಣೆ:
ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಮಾತನಾಡಿ, ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳದಲ್ಲಿ 163 ಕಂಪನಿಗಳು ಹಾಗೂ 12 ಸಾವಿರ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. 1097 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ವಿತರಿಸಲಾಗಿದೆ. 3500 ಅಭ್ಯರ್ಥಿಗಳನ್ನು ಮುಂದಿನ ಸಂದರ್ಶನಕ್ಕಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್, ಗ್ಯಾರಂಟಿ ಅನುಷ್ಠಾನಗಳ ಜಿಲ್ಲಾಧ್ಯಕ್ಷ ರಾಜಣ್ಣ, ಗ್ಯಾರಂಟಿ ಅನುಷ್ಠಾನಗಳ ದೇವನಹಳ್ಳಿ ತಾಲೂಕು ಅಧ್ಯಕ್ಷ ಜಗನ್ನಾಥ, ದೊಡ್ಡಬಳ್ಳಾಪುರ ಮಾಜಿ ಶಾಸಕರಾದ ವೆಂಕಟರಮಣಯ್ಯ, ಜಿಪಂ ಸಿಇಒ ಡಾ.ಕೆ.ಎನ್.ಅನೂರಾಧ, ಸಚಿವರ ಆಪ್ತ ಕಾರ್ಯದರ್ಶಿ ನಟರಾಜ್, ಅಪರ ಜಿಲ್ಲಾಧಿಕಾರಿ ಸುಮಾ, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕರಾದ ನರೇಂದ್ರ ಬಾಬು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಸೇರಿದಂತೆ ಇತರರು ಇದ್ದರು.