ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮೀಸಲಾತಿ ಕುಗ್ಗಿಸಿದ ಕಾಂಗ್ರೆಸ್ ಸರ್ಕಾರ
ರಾಜ್ಯದ ಎಲ್ಲ ಖಾಸಗಿ ವಲಯದಲ್ಲಿ ಶೇ.100 ಉದ್ಯೋಗ ಮೀಸಲಾತಿ ನೀಡುವುದಾಗಿ ಘೋಷಣೆ ಮಾಡಿದ ಕಾಂಗ್ರೆಸ್ ಸರ್ಕಾರ ಕೆಲವೇ ಕ್ಷಣಗಳಲ್ಲಿ ತೀರ್ಮಾನ ಬದಲಿಸಿ ಶೇ.50 ರಿಂದ ಶೇ.75ಕ್ಕೆ ಮೀಸಲಾತಿಯನ್ನು ತಗ್ಗಿಸಿದೆ.
ಬೆಂಗಳೂರು (ಜು.17): ರಾಜ್ಯದಲ್ಲಿ ಕಾರ್ಯ ನಿರ್ವಹಿಸುವ ಎಲ್ಲ ಖಾಸಗಿ ಕಾರ್ಖಾನೆಗಳು, ಕೈಗಾರಿಕೆಗಳು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಉದ್ಯೋಗಗಳನ್ನು ಶೇ.100 ಕನ್ನಡಿಗರಿಗೆ ನೀಡಬೇಕು ಎಂದು ನಿರ್ಣಯ ಕೈಗೊಂಡು ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿತ್ತು. ಆದರೆ, ಐಟಿ ಉದ್ಯಮಿಗಳಾದ ಮೋಹನ್ ದಾಸ್ ಪೈ, ಕಿರಣ್ ಮಜುಂದಾರ್ ಷಾ ಸೇರಿದಂತೆ ವಿವಿಧ ಖಾಸಗಿ ಕಂಪನಿಗಳ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದರಿಂದ ಮೀಸಲಾತಿ ಪ್ರಮಾಣವನ್ನು ಕುಗ್ಗಿಸಲಾಗಿದೆ.
ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ "ಸಿ ಮತ್ತು ಡಿ" ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ಕಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಆದರೆ, ಇದಕ್ಕೆ ಖಾಸಗಿ ಕಂಪನಿ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗದ ಬೆನ್ನಲ್ಲಿಯೇ ಟ್ವೀಟ್ ಡಿಲೀಟ್ ಮಾಡಿದ್ದಾರೆ.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ದುಡ್ಡಿದ್ದವರ ವಿರೋಧಕ್ಕೆ ಮಣಿದು ಟ್ವೀಟ್ ಡಿಲೀಟ್ ಮಾಡಿದ್ರಾ ಸಿಎಂ!?
ಇದಾದ ನಂತರ ಮೀಸಲಾತಿಯನ್ನು ತಗ್ಗಿಸಿರುವ ಸರ್ಕಾರ ತೀರ್ಮಾನವನ್ನು ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಪೋಸ್ಟ್ ಮಾಡಿಕೊಂಡಿದ್ದಾರೆ. 'ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ.
ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪೋಸ್ಟ್ ಮಾಡಿಕೊಂಡಿದ್ದಾರೆ.
ಕನ್ನಡಿಗರಿಗೆ ಖಾಸಗಿ ಉದ್ಯಮದಲ್ಲಿ ಶೇ.100 ಉದ್ಯೋಗ ಖಾತ್ರಿ, ಶೀಘ್ರ ಗೊಂದಲಗಳಿಗೆ ತೆರೆ: ಎಂ ಬಿ ಪಾಟೀಲ