ಯುವಜನತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಡಿಸೆಂಬರ್‌ 30ರಂದು ನಗರದಲ್ಲಿ ಬೃಹತ್‌ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ತಿಳಿಸಿದ್ದಾರೆ. ಈ ಮೇಳದಲ್ಲಿ 200ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುವ ನಿರೀಕ್ಷೆಯಿದೆ.

ಮಂಗಳೂರು: ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಡಿ. 30ರಂದು ನಗರದಲ್ಲಿ ಬೃಹತ್‌ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ 200ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿದ್ದು, ಈಗಾಗಲೇ 170 ಕಂಪನಿಗಳು ನೋಂದಾಯಿಸಿವೆ. ಐದು ಜಿಲ್ಲೆಗಳ ಸುಮಾರು 10 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್‌ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 3,000ಕ್ಕೂ ಹೆಚ್ಚು ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಮೇಳದ ದಿನ ನೇರವಾಗಿ ಭಾಗವಹಿಸಲು ಅವಕಾಶವಿದ್ದರೂ, ಆನ್‌ಲೈನ್‌ ಮೂಲಕ ಮುಂಗಡವಾಗಿ ನೋಂದಣಿ ಮಾಡಿಕೊಂಡವರಿಗೆ ಮೊದಲ ಆದ್ಯತೆ ನೀಡುವ ಹಿನ್ನೆಲೆಯಲ್ಲಿ ಅವಕಾಶ ವಂಚಿತರಾಗದಿರಲು ಆನ್‌ಲೈನ್‌ ನೋಂದಣಿ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

ರಂಗಮಂದಿರ ಟೆಂಡರ್‌ ಪೂರ್ಣ:

ದ.ಕ. ಜಿಲ್ಲೆಯ ಕಲಾಭಿಮಾನಿಗಳ ಬಹುದಿನಗಳ ಬೇಡಿಕೆಯಾಗಿದ್ದ ಸುಸಜ್ಜಿತ ರಂಗ ಮಂದಿರವನ್ನು ನಗರದ ಬೋಂದೆಲ್‌ನಲ್ಲಿ 8.17 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಟೆಂಡರ್ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಖಾದರ್ ತಿಳಿಸಿದರು.

ರಾತ್ರಿ ವ್ಯಾಪಾರ ವ್ಯವಸ್ಥೆ:

ರಾತ್ರಿ ವ್ಯಾಪಾರ, ವಹಿವಾಟಿಗೆ ಸಮಯ ವಿಸ್ತರಣೆ ಮಾಡುವ ವಿಚಾರ ಪೊಲೀಸ್‌ ಇಲಾಖೆಗೆ ಬಿಟ್ಟಿದ್ದು. ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ವ್ಯವಸ್ಥೆಯನ್ನು ಪೊಲೀಸರು ಮಾಡಲಿದ್ದಾರೆ. 24 ಗಂಟೆ ವ್ಯಾಪಾರ ವಹಿವಾಟು ನಡೆದರೂ ನಮಗೆ ಚಿಂತೆ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಖಾದರ್‌ ಪ್ರತಿಕ್ರಿಯಿಸಿದರು.

ಮುಡಾ ಅಧ್ಯಕ್ಷ ಸಂತೋಷ್‌ ಕುಮಾರ್‌ ಶೆಟ್ಟಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮುಖಂಡರಾದ ವಿಶ್ವಾಸ್‌ ಕುಮಾರ್‌ ದಾಸ್‌, ಮುಖಂಡರಾದ ದಿನೇಶ್‌ ಕುಂಪಲ, ದೀಪಕ್‌, ಮುರಳೀಧರ ಶೆಟ್ಟಿ ನರಿಂಗಾನ ಮತ್ತಿತರರಿದ್ದರು.

ಉದ್ಯೋಗ ಸೇತು ಪೋರ್ಟಲ್‌ನಲ್ಲಿ ನೋಂದಣಿಗೆ ಸೂಚನೆ

ಕೊಪ್ಪಳ: ರಾಜ್ಯದ ನಿರುದ್ಯೋಗಿ ಯುವಜನರಿಗೆ ಸೂಕ್ತ ಉದ್ಯೋಗಾವಕಾಶ ಕಲ್ಪಿಸುವ ಹಾಗೂ ಉದ್ಯೋಗದಾತರು ಮತ್ತು ಉದ್ಯೋಗಾಕಾಂಕ್ಷಿಗಳ ನಡುವೆ ನೇರ ಸಂಪರ್ಕ ಏರ್ಪಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ''''ಉದ್ಯೋಗ ಸೇತು'''' ಎಂಬ ಏಕೀಕೃತ ಡಿಜಿಟಲ್ ಪೋರ್ಟಲ್ ಜಾರಿಗೆ ತಂದಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ವತಿಯಿಂದ ಈ ಪೋರ್ಟಲ್ ಅನುಷ್ಠಾನಗೊಳಿಸಲಾಗಿದೆ. ಆಸಕ್ತ ನಿರುದ್ಯೋಗಿ ಯುವಜನರು http://yuvaudyogasethu.karnataka.gov.in/ ಲಿಂಕ್ ಮೂಲಕ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡು ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕು. ಅದರಲ್ಲೂ ಯುವನಿಧಿ ಯೋಜನೆಯಡಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಈಗಾಗಲೇ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳು ಉದ್ಯೋಗ ಸೇತು ಪೋರ್ಟಲ್‌ನಲ್ಲಿಯೂ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.