ರಾಯಚೂರು[ನ.9]: 2020-21 ನೇ ಸಾಲಿನಿಂದ ತಾತ್ಕಾಲಿಕವಾಗಿ ಐಐಐಟಿಯನ್ನು ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾರಂಭಿಸಲು ಅಧಿಕಾರಿಗಳು ಅಗತ್ಯ ಕ್ರಮಗಳು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರು ತಿಳಿಸಿದ್ದಾರೆ. 

ನಗರದ ಜಿಲ್ಲಾಧಿಕಾರಿ ಸಂಭಾಂಗಣದಲ್ಲಿ ಐಐಐಟಿ ತರಗತಿ ನಡೆಸುವ ಕುರಿತು ಹಮ್ಮಿಕೊಂಡಿದ್ದ ಸಭೆಯಲ್ಲಿ ಶುಕ್ರವಾರ ಮಾತನಾಡಿ, ಮುಂದಿನ ಶೈಕ್ಷಣಿಕ ವರ್ಷದಿಂದ ಐಐಐಟಿ ತರಗತಿ ಆರಂಭಿಸಲು ಹೈದರಾಬಾದನ ಅಧಿಕಾರಿಗಳು ತಂಡದೊಂದಿಗೆ ಚರ್ಚಿಸಿ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ತಾತ್ಕಾಲಿತವಾಗಿ ನಡೆಸಲು 2020-21 ನೇ ಸಾಲಿನ ಮೊದಲ ವರ್ಷದಿಂದ ಆರಂಭಕ್ಕೆ ಅಗತ್ಯ ಸೌಲಭ್ಯಗಳನ್ನ ಕಲ್ಪಿಸಲು, ಹೆಚ್ಚುವರಿ ಅನುದಾನಕ್ಕಾಗಿ ಕೆಕೆಆರ್‌ಡಿಬಿಗೆ ಪ್ರಸ್ತಾವನೆ ಸಲ್ಲಿಸಬೇಕು ಎಂದರು. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ತಾಲೂಕಿನ ವಡವಟ್ಟಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಐಐಐಟಿ ಪ್ರಾರಂಭಕ್ಕೆ ಸುಮಾರು 4 ರಿಂದ 5 ವರ್ಷ ಬೇಕಾಗುತ್ತದೆ. ಸುಮಾರು 100 ವಿದ್ಯಾರ್ಥಿಗಳಿಗೆ ಸೌಕರ್ಯಗಳು ಕಲ್ಪಿಸಲು ಕಟ್ಟಡಗಳ ಮತ್ತು ವಸತಿ ನಿಲಯಗಳು ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. 1.5 ಕೋಟಿ ರೂ. ವೆಚ್ಚದಲ್ಲಿ ವಸತಿ ನಿರ್ಮಿಸಲಿದ್ದು, ಮುಂದಿನ ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ತಾತ್ಕಾಲಿಕವಾಗಿ ಸಿಬ್ಬಂದಿ ನೇಮಕ ಮತ್ತು ರಸ್ತೆ ನಿರ್ಮಾಣ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಬೇಕಾಗಿದೆ ಎಂದರು. 

ಈ ಸಂದರ್ಭದಲ್ಲಿ ತಹಶೀಲ್ದಾರ್ ಹಂಪಣ್ಣ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.