‘ಡಿಕೆಶಿ ಎಂತಹ ಸನ್ನಿವೇಶ, ಸವಾಲುಗಳನ್ನು ಎದುರಿಸಲೂ ಸದೃಢ’
ಮಾಜಿ ಸಚಿವ ಡಿಕೆ ಶಿವಕುಮಾರ್ ಎಲ್ಲಾ ರೀತಿಯ ಸನ್ನಿವೇಶಗಳನ್ನೂ ಎದುರಿಸಲು ಸದೃಢವಾಗಿದ್ದಾರೆ. ಎಲ್ಲವನ್ನು ಧೈರ್ಯದಿಂದ ಎದುರಿಸುತ್ತಾರೆ ಎಂದು ಮುಖಂಡರರ್ವರು ಹೇಳಿದ್ದಾರೆ.
ರಾಮನಗರ [ಅ.19]: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಎಲ್ಲಾ ಸನ್ನಿವೇಶ ಹಾಗೂ ಸವಾಲುಗಳನ್ನು ಧೈರ್ಯವಾಗಿ ಎದುರಿಸಲು ಮಾನಸಿಕವಾಗಿ ಸದೃಢರಾಗಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಸಂಬಂಧಿಯಾದ ವಿಧಾನ ಪರಿಷತ್ ಸದಸ್ಯ ಎಸ್ .ರವಿ ಪ್ರತಿಕ್ರಿಯೆ ನೀಡಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಾನು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಲು ಸಾಧ್ಯವಾಗಿಲ್ಲ. ಆದರೆ, ಮಾನಸಿಕವಾಗಿ ಸದೃಢರಾಗಿರುವ ಅವರು ಎಲ್ಲಾ ಸನ್ನಿವೇಶಗಳನ್ನು ಎದುರಿಸುವ ಧೈರ್ಯವಿದೆ ಎಂದರು.
ಆಕ್ಷೇಪ ಇಲ್ಲ: ಡಿ.ಕೆ.ಶಿವಕುಮಾರ್ ರವರ ಪ್ರಕರಣದ ವಿಚಾರಣೆ ತಡವಾಗುತ್ತಿದೆ ಎಂದು ನ್ಯಾಯಾಲಯದ ಕಾರ್ಯವೈಖರಿ ಬಗ್ಗೆ ನಾನು ಆಕ್ಷೇಪ ವ್ಯಕ್ತಪಡಿಸಿಲ್ಲ. ನ್ಯಾಯಾಲಯ ಅದರ ಕರ್ತವ್ಯವನ್ನು ಸರಿಯಾಗಿ ನಡೆಸಿಕೊಂಡು ಹೋಗುತ್ತಿದೆ. ಮುಂದಿನ ದಿನಗಳಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುತ್ತಾರೆಂಬ ವದಂತಿ ಇದೆಯಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ರವಿರವರು, ಡಿ.ಕೆ.ಶಿವಕುಮಾರ್ ಅವರು ರಾಜ್ಯದಲ್ಲಿ ತಮ್ಮದೇ ಆದ ವ್ಯಕ್ತಿತ್ವವನ್ನು ಹೊಂದಿದ್ದಾರೆ. ಆದರೆ, ಹಲವಾರು ಜನ ಹಲವು ರೀತಿಯ ಅಭಿಪ್ರಾಯಗಳನ್ನು ಹೊಂದಿರುತ್ತಾರೆ. ಅದಕ್ಕೆಲ್ಲ ನಾವು ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದರು.
ಇಡಿ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ಅವರಿಗೆ ಕಿರುಕುಳ ನೀಡುತ್ತಿದ್ದಾರೆಂದು ವಿಧಾನ ಪರಿಷತ್ ಸದಸ್ಯ ಸಿ.ಎಂ.ಲಿಂಗಪ್ಪ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರಲ್ಲ ಎಂಬ ಪ್ರಶ್ನೆಗೆ ಈ ಬಗ್ಗೆ ಅವರನ್ನೇ ಕೇಳಬೇಕು. ಲಿಂಗಪ್ಪರವರು ಯಾವ ರೀತಿ ಹೇಳಿದ್ದಾರೊ ಗೊತ್ತಿಲ್ಲ ಎಂದು ಉತ್ತರಿಸಿದರು.
ನೋಟಿಸ್, ಸಮನ್ಸ್ ಬಂದಿಲ್ಲ: ಕನಕಪುರ ಹಾಗೂ ಸಾತನೂರು ಅರಣ್ಯ ಪ್ರದೇಶದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಗಣಿಗಾರಿಕೆ ಮತ್ತು ಅರಣ್ಯ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸಮಗ್ರ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ವಿಚಾರವಾಗಿ ನನಗೆ ಈವರೆಗೂ ಯಾವುದೇ ನೋಟಿಸ್, ಸಮನ್ಸ್ ಬಂದಿಲ್ಲ ಎಂದು ರವಿ ಹೇಳಿದರು.