ಪಿತೃತ್ವ ನಿರ್ಧರಿಸಲು ಡಿಎನ್‌ಎ ಪರೀಕ್ಷೆಗೆ ಆದೇಶಿಸುವ ಮುನ್ನ ಇತರ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ. ಖಾಸಗಿತನದ ಉಲ್ಲಂಘನೆ ತಡೆಯಲು ಲಭ್ಯವಿರುವ ಎಲ್ಲ ಅವಕಾಶಗಳ ಕುರಿತು ಕೌಟುಂಬಿಕ ನ್ಯಾಯಾಲಯ ಪರಿಶೀಲಿಸಬೇಕು ಎಂದು ಹೇಳಿದೆ.

ಬೆಂಗಳೂರು: ಮಗುವಿನ ಪಾಲನೆ, ಪೋಷಣೆ ಸಂಬಂಧಿಸಿದ ಕೌಟುಂಬಿಕ ಕಲಹ ಪ್ರಕರಣದಲ್ಲಿ ಮಗುವಿನ ಪಿತೃತ್ವ ನಿರ್ಧರಿಸಲು ಡಿಎನ್‌ಎ ಪರೀಕ್ಷೆಗೆ ಆದೇಶಿಸುವ ಮುನ್ನ ಇತರ ಸಾಕ್ಷ್ಯಾಧಾರಗಳ ಮೂಲಕ ವಿವಾದ ಪರಿಹರಿಸಲು ಅವಕಾಶವಿದೆಯೇ ಎಂಬುದನ್ನು ವಿವರವಾಗಿ ಪರಿಶೀಲಿಸಬೇಕು ಎಂದು ಹೈಕೋರ್ಟ್ ಹೇಳಿದೆ.

ಕೌಟುಂಬಿಕ ನ್ಯಾಯಾಲಯಕ್ಕೆ ಹೈಕೋರ್ಟ್‌ ಸೂಚನೆ

ಮಗುವಿನ ಪಿತೃತ್ವ ನಿರ್ಧರಿಸಲು ಡಿಎನ್‌ಎ ಪರೀಕ್ಷೆಗೆ ಒಳಪಡಿಸಬೇಕೆಂದು ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಈ ಆದೇಶವನ್ನು ಮರುಪರಿಶೀಲಿಸುವಂತೆ ಸೂಚಿಸಿದೆ. ಅಲ್ಲದೆ, ವ್ಯಕ್ತಿಯೊಬ್ಬರ ವೈಯಕ್ತಿಕ ಬದುಕಿನಲ್ಲಿ ಮಧ್ಯಪ್ರವೇಶಿಸುವ ಅಗತ್ಯತೆ ಬಗ್ಗೆಯೂ ಯೋಚಿಸಬೇಕು ಎಂದು ನ್ಯಾಯಮೂರ್ತಿ ಲಲಿತಾ ಕನ್ನೆಗಂಟಿ ಅಭಿಪ್ರಾಯಪಟ್ಟಿದ್ದಾರೆ.

ಪಿತೃತ್ವ ನಿರ್ಧರಿಸಲು ಇಂತಹ ವೈಜ್ಞಾನಿಕ ಪರೀಕ್ಷೆ ನಡೆಸುವುದು ಅಗತ್ಯವಿದೆ ಎಂಬುದು ಕಂಡು ಬಂದಲ್ಲಿ ಪ್ರಕರಣದಲ್ಲಿ ಲಭ್ಯವಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ವಿವಾದ ಪರಿಹರಿಸಲು ಸಾಧ್ಯವಾಗುತ್ತಿಲ್ಲ ಎನ್ನುವ ಕಾರಣಗಳನ್ನು ದಾಖಲಿಸಬೇಕು. ಅಲ್ಲದೆ, ವ್ಯಕ್ತಿಯ ಖಾಸಗಿತನದ ಪ್ರವೇಶ ಅನಿವಾರ್ಯ ಎಂಬುದನ್ನು ವಿವರವಾಗಿ ತಿಳಿಸಬೇಕು. ಡಿಎನ್‌ಎ ಪರೀಕ್ಷೆ ಕುರಿತಾದ ನಿರ್ಧಾರ ಕೈಗೊಳ್ಳುವ ಮೊದಲು ಲಭ್ಯವಿರುವ ಎಲ್ಲ ಅವಕಾಶಗಳ ಕುರಿತು ಪರಿಶೀಲಿಸಬೇಕು ಎಂದು ನ್ಯಾಯಮೂರ್ತಿ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ ಏನು?

ಅಪ್ರಾಪ್ತ ಮಗುವಿನ ನಿರ್ವಹಣೆ ಕೋರಿ ತಾಯಿಯೊಬ್ಬರು ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ, ಮಗುವಿನ ತಂದೆ ಇವರೇ ಎಂಬುದನ್ನು ಸಾಬೀತುಪಡಿಸಲು ಡಿಎನ್‌ಎ ಪರೀಕ್ಷೆಗೂ ಒಳಪಡಿಸಲು ಕೋರಿ ಮತ್ತೊಂದು ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮಾನ್ಯ ಮಾಡಿದ್ದ ಕೋರ್ಟ್, ಮಗು ಮತ್ತು ತಂದೆಯ ಮಾದರಿಗಳನ್ನು ಸಂಗ್ರಹಿಸಿ ಡಿಎನ್‌ಎ ಪರೀಕ್ಷೆ ನಡೆಸಲು ಅನುಮತಿ ನೀಡಿತ್ತು. ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ 56 ವರ್ಷದ ವ್ಯಕ್ತಿ ಹೈಕೋರ್ಟ್ ಮೆಟ್ಟಿಲೇರಿದ್ದರು.