ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಪಾಲಾದ ಮತ್ತೊಂದು ಚಿನ್ನದ ಪದಕ* ಪುರುಷರ ಬ್ಯಾಡ್ಮಿಂಟನ್ ಡಬಲ್ಸ್‌ನಲ್ಲಿ ಚಿನ್ನಕ್ಕೆ ಮುತ್ತಿಕ್ಕಿದ ಭಾರತ* ಇಂಗ್ಲೆಂಡ್ ಎದುರು ಫೈನಲ್‌ನಲ್ಲಿ ಸುಲಭ ಗೆಲುವು ದಾಖಲಿಸಿದ ಭಾರತ
ಬರ್ಮಿಂಗ್‌ಹ್ಯಾಮ್(ಆ.08): ಭಾರತದ ನಂ.1 ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಜೋಡಿ ಎನಿಸಿಕೊಂಡಿರುವ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಜೋಡಿ, ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ. ಇಂಗ್ಲೆಂಡ್ ತಂಡದ ಎದುರು ಅತ್ಯದ್ಭುತ ಪ್ರದರ್ಶನ ತೋರಿದ ಭಾರತದ ಈ ಜೋಡಿ 21-15, 21-13 ನೇರ ಗೇಮ್‌ಗಳಲ್ಲಿ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಕೂಟದ ಕೊನೆಯ ದಿನ ಭಾರತ ಕಣಕ್ಕಿಳಿದ ಮೂರು ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲೂ ಚಿನ್ನದ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ.
ಹೌದು, ಮೊದಲಿಗೆ ಭಾರತದ ಮಹಿಳಾ ಸಿಂಗಲ್ಸ್‌ನಲ್ಲಿ ಪಿ.ವಿ. ಸಿಂಧು ಫೈನಲ್‌ನಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕ ಜಯಿಸಿದ್ದರು. ಇದಾದ ಬಳಿಕ ಪುರುಷರ ಸಿಂಗಲ್ಸ್‌ನಲ್ಲಿ ಫೈನಲ್‌ನಲ್ಲಿ ಕಣಕ್ಕಿಳಿದಿದ್ದ ಲಕ್ಷ್ಯ ಸೆನ್ ಕೂಡಾ ಭರ್ಜರಿ ಪ್ರದರ್ಶನದೊಂದಿಗೆ ಚಿನ್ನದ ಪದಕ ಜಯಿಸಿದ್ದರು.
ಕಾಮನ್‌ವೆಲ್ತ್ ಗೇಮ್ಸ್ ಬ್ಯಾಡ್ಮಿಂಟನ್‌ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನ, ಲಕ್ಷ್ಯ ಸೇನ್‌ಗೆ ಗೋಲ್ಡ್ ಮೆಡಲ್!
ಇನ್ನು ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ಸಾಯಿರಾಜ್ ರಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಜೋಡಿ ಆರಂಭದಿಂದಲೇ ಫೈನಲ್ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಇಂಗ್ಲೆಂಡ್‌ನ ಸೀನ್ ವೆಂಡಿ ಹಾಗೂ ಬೆನ್ ಲೇನ್ ಜೋಡಿಯ ಎದುರು ಸಂಪೂರ್ಣ ಪ್ರಾಬಲ್ಯ ಮೆರೆದ ಭಾರತದ ಅಗ್ರಶ್ರೇಯಾಂಕಿತ ಜೋಡಿ 2-0 ಅಂತರದಲ್ಲಿ ಪಂದ್ಯ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರು. ಮೊದಲ ಗೇಮ್‌ನಲ್ಲಿ 21-15 ಅಂತರದ ಗೆಲುವು ಸಾಧಿಸಿದ ಭಾರತದ ಜೋಡಿ, ಎರಡನೇ ಗೇಮ್‌ನಲ್ಲೂ ಮಿಂಚಿನ ಪ್ರದರ್ಶನ ತೋರುವ ಮೂಲಕ ಅನಾಯಾಸವಾಗಿ ಗೆಲುವು ದಾಖಲಿಸಿದರು.
