ಇನ್ನು ಆಲ್ರೌಂಡರ್‌'ಗಳ ಪಟ್ಟಿಯಲ್ಲಿ ಬಾಂಗ್ಲಾದೇಶದ ಅನುಭವಿ ಆಟಗಾರ ಶಕೀಬ್ ಅಲ್ ಹಸನ್ ಅಗ್ರಸ್ಥಾನ ಪಡೆದರೆ, ಜಡೇಜಾ ಹಾಗೂ ಅಶ್ವಿನ್ ಕ್ರಮವಾಗಿ 2 ಹಾಗೂ 3ನೇ ಸ್ಥಾನವನ್ನು ಕಾಪಾಡಿಕೊಂಡಿದ್ದಾರೆ.
ದುಬೈ(ಜು.10): ಐಸಿಸಿಯು ನೂತನ ಟೆಸ್ಟ್ ಶ್ರೇಯಾಂಕ ಪಟ್ಟಿ ಬಿಡುಗಡೆ ಮಾಡಿದ್ದು ಭಾರತದ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಮತ್ತೋರ್ವ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಎರಡನೇ ಸ್ಥಾನದಲ್ಲೇ ಭದ್ರವಾಗಿದ್ದಾರೆ.
ಒಟ್ಟ 898 ಅಂಕಗಳೊಂದಿಗೆ ಜಡೇಜಾ ಅಗ್ರಸ್ಥಾನ ಕಾಯ್ದುಕೊಂಡಿದ್ದರೆ, 865 ಅಂಕಗಳೊಂದಿಗೆ ಅಶ್ವಿನ್ 2ನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ.
ಇನ್ನು ಆಲ್ರೌಂಡರ್'ಗಳ ಪಟ್ಟಿಯಲ್ಲಿ ಬಾಂಗ್ಲಾದೇಶದ ಅನುಭವಿ ಆಟಗಾರ ಶಕೀಬ್ ಅಲ್ ಹಸನ್ ಅಗ್ರಸ್ಥಾನ ಪಡೆದರೆ, ಜಡೇಜಾ ಹಾಗೂ ಅಶ್ವಿನ್ ಕ್ರಮವಾಗಿ 2 ಹಾಗೂ 3ನೇ ಸ್ಥಾನವನ್ನು ಕಾಪಾಡಿಕೊಂಡಿದ್ದಾರೆ. ಆಸೀಸ್ ವೇಗಿ ಮಿಚೆಲ್ ಸ್ಟಾರ್ಕ್ ಟಾಪ್ 10 ಪಟ್ಟಿಯಿಂದ ಹೊರಬಿದ್ದಿದ್ದಾರೆ.
ಬ್ಯಾಟಿಂಗ್ ವಿಭಾಗದಲ್ಲಿ ಆಸೀಸ್ ನಾಯಕ ಸ್ಟೀವ್ ಸ್ಮಿತ್ ಮೊದಲ ಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ನಾಯಕ ಜೋ ರೂಟ್ ಎರಡನೇ ಪಡೆದಿದ್ದಾರೆ. ಮೂರನೇ ಸ್ಥಾನ ಕೇನ್ ವಿಲಿಯಮ್ಸನ್ ಪಾಲಾದರೆ, ಚೇತೇಶ್ವರ್ ಪೂಜಾರ ಹಾಗೂ ವಿರಾಟ್ ಕೊಹ್ಲಿ ಕ್ರಮವಾಗಿ 4 ಹಾಗೂ 5ನೇ ಸ್ಥಾನದಲ್ಲಿದ್ದರೆ, ಕನ್ನಡಿಗ ಕೆ.ಎಲ್.ರಾಹುಲ್ 9ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧ ಮುಕ್ತಾಯಗೊಂಡ ಮೊದಲ ಟೆಸ್ಟ್'ನಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಮಿಂಚಿ ಇಂಗ್ಲೆಂಡ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಮೊಯಿನ್ ಅಲಿ ಎರಡೂ ವಿಭಾಗದಲ್ಲೂ ಜಿಗಿತ ಕಂಡಿದ್ದಾರೆ. ಬ್ಯಾಟಿಂಗ್'ನಲ್ಲಿ ಅಲಿ 21ನೇ ಸ್ಥಾನ ಪಡೆದಿದ್ದರೆ, ಬೌಲಿಂಗ್'ನಲ್ಲಿ 19ನೇ ಸ್ಥಾನಕ್ಕೇರಿದ್ದಾರೆ.
