ವೈಜಾಗ್[ಫೆ.23]: ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಪಾಕಿಸ್ತಾನ ವಿರುದ್ಧ ಆಡಬೇಕೋ, ಬೇಡವೋ ಎನ್ನುವ ಬಗ್ಗೆ ಬಿಸಿಬಿಸಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ. ಬಿಸಿಸಿಐ ಹಾಗೂ ಕೇಂದ್ರ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಾಗಿದ್ದೇವೆ ಎಂದು ಕೊಹ್ಲಿ ಹೇಳಿದ್ದಾರೆ.

ಭಾರತ-ಪಾಕಿಸ್ತಾನ ವಿಶ್ವಕಪ್ ಹೋರಾಟ- ಯಾರು ಮರೆಯಲ್ಲ ಬದ್ಧವೈರಿಗಳ ಕದನ!

ಪುಲ್ವಾಮಾ ದಾಳಿಯ ಬಳಿಕ ಭಾರತ ತಂಡವು ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಆಡಬಾರದು ಎಂಬ ಕೂಗು ಜೋರಾಗಿದೆ. ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಹಾಗೂ ಹರ್ಭಜನ್ ಸಿಂಗ್ ಪಾಕ್ ವಿರುದ್ಧ ಆಡಬಾರದು ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಸಚಿನ್ ತೆಂಡುಲ್ಕರ್, ಸುನಿಲ್ ಗವಾಸ್ಕರ್ ಭಾರತ ಕ್ರಿಕೆಟ್ ಆಡಬೇಕು ಎಂದು ಹೇಳಿದ್ದಾರೆ. ಭಾರತ ತಂಡವು ಪಾಕಿಸ್ತಾನ ವಿರುದ್ಧ ಜೂನ್ 16ರಂದು ಮ್ಯಾಂಚೆಸ್ಟರ್’ನಲ್ಲಿ ಕ್ರಿಕೆಟ್ ಆಡಲು ಐಸಿಸಿ ವೇಳಾಪಟ್ಟಿ ಪ್ರಕಟಿಸಿದೆ. 

ಪಾಕ್ ವಿರುದ್ಧ ವಿಶ್ವಕಪ್ ಟೂರ್ನಿಯಲ್ಲಿ ಆಡಬೇಕೆ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕೊಹ್ಲಿ, ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಸೈನಿಕರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಬಿಸಿಸಿಐ ಹಾಗೂ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಿರುವುದಾಗಿ ಕೊಹ್ಲಿ ಹೇಳಿದ್ದಾರೆ.

ಬಿಸಿಸಿಐ ಹಾಗೂ ಸುಪ್ರೀಂ ಕೋರ್ಟ್ ನೇಮಿತ ಆಡಳಿತ ಸಮಿತಿ[CoA] ಶುಕ್ರವಾರ ಈ ಕುರಿತಂತೆ ಸಭೆ ಸೇರಿ ಚರ್ಚೆ ನಡೆಸಿತಾದರೂ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿರಲಿಲ್ಲ. ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಬಿಸಿಸಿಐ, ಐಸಿಸಿಗೆ ಪತ್ರಬರೆದಿತ್ತು. ಇದುವರೆಗೆ ಭಾರತ-ಪಾಕಿಸ್ತಾನ ತಂಡಗಳು ವಿಶ್ವಕಪ್ ಟೂರ್ನಿಯಲ್ಲಿ 1992ರಿಂದ 2015ರವರೆಗೆ ಒಟ್ಟು 6 ಬಾರಿ ಮುಖಾಮುಖಿಯಾಗಿದ್ದು, ಟೀಂ ಇಂಡಿಯಾ 6 ಬಾರಿಯೂ ಗೆಲುವಿನ ನಗೆ ಬೀರಿದೆ. 

ಇದೀಗ ಫೆಬ್ರವರಿ 24ರಂದು ವಿಶಾಖಪಟ್ಟಣದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ20 ಪಂದ್ಯವನ್ನು ಆಡಲು ಸಜ್ಜಾಗಿದೆ.