ಬೆಂಗಳೂರಿನ ಐತಿಹಾಸಿಕ ಧರ್ಮರಾಯ ಸ್ವಾಮಿ ದೇವಸ್ಥಾನದಲ್ಲಿ ನಡೆದಿದೆ ಎನ್ನಲಾದ ಚಿನ್ನದ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಜರಾಯಿ ಇಲಾಖೆಯು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೆ. ನಾಗರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿದೆ.

ಬೆಂಗಳೂರು (ಫೆ.03): ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ನಡೆಯುವ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ನಡೆದಿದೆ ಎನ್ನಲಾದ ಚಿನ್ನದ ಸರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಜರಾಯಿ ಇಲಾಖೆಯು, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ (EO) ಕೆ. ನಾಗರಾಜು ಅವರನ್ನು ಸೇವೆಯಿಂದ ಅಮಾನತುಗೊಳಿಸಿ (Suspension) ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಘಟನೆಯ ಹಿನ್ನೆಲೆ:

ಶ್ರೀ ರಾಯ ರಾಯ ಸಮೂಹ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಯಾಗಿರುವ ಕೆ. ನಾಗರಾಜು ಅವರು 09.07.2025 ರಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ವ್ಯಾಪ್ತಿಗೆ ತಿಗಳರಪೇಟೆಯ ಶ್ರೀ ಧರ್ಮರಾಯ ಸ್ವಾಮಿ ದೇವಾಲಯವೂ ಒಳಪಡುತ್ತದೆ. ಇದೀಗ (ದಿನಾಂಕ: 03.02.2026) ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ವರದಿಯಂತೆ, ದೇವಸ್ಥಾನಕ್ಕೆ ಭಕ್ತರು ಹರಕೆ ರೂಪದಲ್ಲಿ ನೀಡಿದ್ದ ಚಿನ್ನದ ನೆಕ್ಲೇಸ್ ಕಳುವಾಗಿತ್ತು. ಕೆಲ ದಿನಗಳ ಬಳಿಕ ಹುಂಡಿಯಲ್ಲಿ ಚಿನ್ನದ ಸರ ಪತ್ತೆಯಾಗಿತ್ತಾದರೂ, ಅದು ಮೂಲ ಸರಕ್ಕಿಂತ ಭಿನ್ನವಾಗಿದೆ (ವ್ಯತ್ಯಾಸವಾಗಿದೆ) ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಬಗ್ಗೆ ದೇವಸ್ಥಾನದ ಮಾಜಿ ಅಧ್ಯಕ್ಷರು ಕೂಡ ಗಂಭೀರ ದೂರು ನೀಡಿದ್ದರು.

ಅಮಾನತಿಗೆ ಕಾರಣವೇನು?

ಮಾಧ್ಯಮಗಳಲ್ಲಿ ವರದಿಯಾದ ಈ ಗಂಭೀರ ಆರೋಪದ ಬಗ್ಗೆ ನಿಷ್ಪಕ್ಷಪಾತ ವಿಚಾರಣೆ ನಡೆಯಬೇಕಿದೆ. ಈ ಹಂತದಲ್ಲಿ ಕೆ. ನಾಗರಾಜು ಅವರು ಅಧಿಕಾರದಲ್ಲಿ ಮುಂದುವರಿದರೆ, ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಅಥವಾ ವಿಚಾರಣೆಗೆ ಅಡ್ಡಿಪಡಿಸುವ ಸಾಧ್ಯತೆಗಳಿವೆ ಎಂದು ಆಯುಕ್ತರು ಅಭಿಪ್ರಾಯಪಟ್ಟಿದ್ದಾರೆ. ಮೇಲ್ನೋಟಕ್ಕೆ ಅಧಿಕಾರಿಯ ಕರ್ತವ್ಯ ಲೋಪ ಕಂಡುಬಂದ ಹಿನ್ನೆಲೆಯಲ್ಲಿ, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(1)(ಡಿ) ಅನ್ವಯ, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಕೇಂದ್ರ ಸ್ಥಾನ ಬಿಡುವಂತಿಲ್ಲ:

ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಈ ಆದೇಶ ಹೊರಡಿಸಲಾಗಿದ್ದು, ಅಮಾನತು ಅವಧಿಯಲ್ಲಿ ನಾಗರಾಜು ಅವರು ಸಕ್ಷಮ ಪ್ರಾಧಿಕಾರದ ಅನುಮತಿ ಇಲ್ಲದೆ ಕೇಂದ್ರ ಸ್ಥಾನವನ್ನು (Headquarters) ಬಿಟ್ಟು ತೆರಳುವಂತಿಲ್ಲ ಎಂದು ಮುಜರಾಯಿ ಇಲಾಖೆ ಆಯುಕ್ತರಾದ ಶರತ್ ಬಿ. ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ. ದೇವಿಯ ಆಭರಣ ಕಳವು ಪ್ರಕರಣ ಭಕ್ತಾದಿಗಳಲ್ಲಿ ಆಕ್ರೋಶ ಮೂಡಿಸಿತ್ತು. ಇದೀಗ ಇಲಾಖೆ ತ್ವರಿತಗತಿಯಲ್ಲಿ ಎಚ್ಚೆತ್ತುಕೊಂಡು ಅಧಿಕಾರಿಯನ್ನು ಅಮಾನತು ಮಾಡಿರುವುದು ಪ್ರಕರಣದ ತನಿಖೆಗೆ ವೇಗ ನೀಡಿದಂತಾಗಿದೆ.