ತಾರತಮ್ಯ ಬಿಡಿ, ರಸ್ತೆಗುಂಡಿ ಮುಚ್ಚೋದಕ್ಕಾದ್ರೂ ಶಾಸಕರಿಗೆ ₹120 ಕೋಟಿ ಅನುದಾನ ಕೊಡಿ; ಆರ್. ಅಶೋಕ ಆಗ್ರಹ
ರಾಜ್ಯದ ಅಭಿವೃದ್ಧಿ ಕುಂಠಿತವಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 120 ರಿಂದ 150 ಕೋಟಿ ರೂ. ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಬೆಂಗಳೂರಿನ ಅಭಿವೃದ್ಧಿ ಕುಂಠಿತವಾಗಿ ಜನರು ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಬೆಲೆ ಏರಿಕೆಯ ಹೊರೆಯನ್ನು ಜನರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಆದ್ದರಿಂದ ಬೆಂಗಳೂರಿಗೆ ಹೆಚ್ಚು ಅನುದಾನ ನೀಡಿ ಎಂದು ಆಗ್ರಹಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರು (ಫೆ.28): ರಾಜ್ಯದ ಅಭಿವೃದ್ಧಿ ಕುಂಠಿತವಾಗಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 120 ರಿಂದ 150 ಕೋಟಿ ರೂ. ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು.
ಬಿಜೆಪಿ ಶಾಸಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದೆರಡು ವರ್ಷಗಳಲ್ಲಿ ಬೆಂಗಳೂರಿನಲ್ಲಾಗಿರುವ ಮಳೆ ಹಾನಿ, ರಸ್ತೆ ಗುಂಡಿ, ಕಾಮಗಾರಿ ಸ್ಥಗಿತ, ಉದ್ಯಾನಗಳಲ್ಲಿ ಸಿಬ್ಬಂದಿಗೆ ವೇತನ ವಿಳಂಬ ಮೊದಲಾದ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಚರ್ಚಿಸಲಾಗಿದೆ. ಬೆಂಗಳೂರಿನ ಅಭಿವೃದ್ಧಿ ಕುಂಠಿತವಾಗಿ ಜನರು ಸರ್ಕಾರಕ್ಕೆ ಶಾಪ ಹಾಕುತ್ತಿದ್ದಾರೆ. ಬೆಲೆ ಏರಿಕೆಯ ಹೊರೆಯನ್ನು ಜನರಿಗೆ ತಡೆದುಕೊಳ್ಳಲು ಆಗುತ್ತಿಲ್ಲ. ಆದ್ದರಿಂದ ಬೆಂಗಳೂರಿಗೆ ಹೆಚ್ಚು ಅನುದಾನ ನೀಡಿ ಎಂದು ಆಗ್ರಹಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದ ಬಿಜೆಪಿ ಶಾಸಕರು ಹಾಗೂ ಉತ್ತರ ಕರ್ನಾಟಕದ ಶಾಸಕರು ಕಣ್ಣೀರು ಹಾಕುತ್ತಿದ್ದಾರೆ. ಅಭಿವೃದ್ಧಿಗಾಗಿ ಶಾಸಕರಿಗೆ ಅನುದಾನ ಮಂಜೂರು ಮಾಡಬೇಕು. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವಿದ್ದಾಗ ತಾರತಮ್ಯವಿಲ್ಲದೆ ನೂರಾರು ಕೋಟಿ ರೂ. ಅನುದಾನ ನೀಡಲಾಗಿತ್ತು. ಈಗ ತಾರತಮ್ಯ ಏಕೆ ಮಾಡಲಾಗುತ್ತಿದೆ ಎಂದು ಪ್ರಶ್ನೆ ಮಾಡಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 120-150 ಕೋಟಿ ರೂ. ಅನುದಾನ ನೀಡಿ ಎಂದು ಕೇಳಿದ್ದೇವೆ. ಅನುದಾನ ನೀಡಿದರೆ ಶಾಸಕರು ಎರಡು ವರ್ಷ ಉತ್ತಮವಾಗಿ ಕೆಲಸ ಮಾಡಬಹುದು ಎಂದರು.
ಇದನ್ನೂ ಓದಿ: ಮಾ.22ರ ಕರ್ನಾಟಕ ಬಂದ್‌ಗೆ ಒಂದಾಗದ ಕರವೇ ಬಣ; ಪ್ರವೀಣ್ ಶೆಟ್ಟಿ ಬೆಂಬಲ, ನೋ ಎಂದ ನಾರಾಯಣಗೌಡ!
ಕೇವಲ ಬಿಜೆಪಿ ಮಾತ್ರವಲ್ಲದೆ, ಅಭಿವೃದ್ಧಿ ಬಗ್ಗೆ ಜನರೇ ಹೇಳುತ್ತಿದ್ದಾರೆ. ಮೆಟ್ರೊ ದರ ಏರಿಕೆಯ ವಿರುದ್ಧ ಜನರೇ ಪ್ರತಿಭಟನೆ ಮಾಡಿದ್ದಾರೆ. ಬಜೆಟ್ ಅಧಿವೇಶನದಲ್ಲಿ ನಾವ್ಯಾರೂ ಅಡ್ಡಿ ಮಾಡದೆ ಎಲ್ಲಕ್ಕೂ ಸಹಕಾರ ನೀಡುತ್ತೇವೆ. ಆದರೆ ಸರಿಯಾಗಿ ಅನುದಾನ ನೀಡಲಿ ಎಂದರು.