ಬೆಂಗಳೂರು(ಫೆ.19): ನಂಜುಂಡಪ್ಪ ವರದಿಯಂತೆ ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ವಿಶೇಷ ಶೈಕ್ಷಣಿಕ ವಲಯಗಳನ್ನು ಸ್ಥಾಪಿಸಿ ಅಭಿವೃದ್ಧಿಗೊಳಿಸಲು ಮತ್ತು ಆ ಭಾಗದ ಶಾಲೆಗಳಿಗೆ 10 ಸಾವಿರ ಶಿಕ್ಷಕರ ನೇಮಕಕ್ಕೆ 2021-22ನೇ ಸಾಲಿನ ಬಜೆಟ್‌ನಲ್ಲಿ ಅವಕಾಶ ಕಲ್ಪಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌. ಸುರೇಶ್‌ಕುಮಾರ್‌ ತಿಳಿಸಿದ್ದಾರೆ. 

ಗುರುವಾರ ನಡೆದ ಬಜೆಟ್‌ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಅವರು, ಆ ಸಂಬಂಧ ಅವಶ್ಯ ಅನುದಾನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿದೆ ಎಂದು ಹೇಳಿದರು. ಇದೇ ರೀತಿ ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆ ನಿಟ್ಟಿನಲ್ಲಿ ನೀತಿ ನಿರೂಪಣೆಗೆ ಶಿಕ್ಷಣ ಆಯೋಗ ಸ್ಥಾಪನೆಗೆ ಮನವಿ ಮಾಡಲಾಗಿದೆ. 50 ವರ್ಷ ಹಳೆಯದಾದ 14,613 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡಗಳ ಹಾಗೂ 634 ಸರ್ಕಾರಿ ಪ್ರೌಢಶಾಲೆಗಳ ಕಟ್ಟಡ ನಿರ್ವಹಣೆಗೆ ಅನುದಾನ ಬಿಡುಗಡೆಗೆ ಮನವಿ ಮಾಡಲಾಗಿದೆ ಎಂದರು.

ರಾಜ್ಯದಲ್ಲಿ 20 ಸಾವಿರ ಶಿಕ್ಷಕರ ನೇಮಕ: ಸುರೇಶ್‌ ಕುಮಾರ್

ಪ್ರಮುಖ ಪ್ರಸ್ತಾವನೆಗಳು:

ರಾಜ್ಯ ಸಾಕ್ಷರತಾ ಅಭಿಯಾನ ಕಾರ್ಯಕ್ರಮದ ಮೂಲಕ 30 ಸಾವಿರ ಅನಕ್ಷರಸ್ಥರಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ ಸಾಕ್ಷರತಾ ಕಾರ್ಯಕ್ರಮ ರೂಪಿಸುವುದು, ಶಾಖಾ ಗ್ರಂಥಾಲಯಗಳು, ಮಕ್ಕಳ ಗ್ರಂಥಾಲಯಗಳ ಡಿಜಿಟಲೀಕರಣ ಮತ್ತು ಗ್ರಂಥಾಲಯ ತರಬೇತಿ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾಪ ನೀಡಲಾಗಿದೆ. ಕೇಂದ್ರೀಯ ವಿದ್ಯಾಲಯ ಶಾಲೆಗಳ ಮಾದರಿಯಲ್ಲಿ ರಾಜ್ಯದ 276 ಕೆಪಿಎಸ್‌ ಶಾಲೆಗಳನ್ನು ಅಭಿವೃದ್ಧಿಪಡಿಸಲು ಅನುದಾನ ಕೋರಲಾಗಿದೆ. 2020-21ನೇ ಸಾಲಿನಲ್ಲಿ ಹಂಚಿಕೆಯಾದ ಅನುದಾನದಲ್ಲಿ ಶೇ.81ರಷ್ಟುವೆಚ್ಚ ಮಾಡಲಾಗಿದೆ ಎಂದರು.

ಸಕಾಲ ಮಿಷನ್‌ ಅಭಿವೃದ್ಧಿಗೆ ಒತ್ತು:

ಸಕಾಲ ಯೋಜನೆಯಡಿ ಸಕಾಲ ಮಿಷನ್‌ ತನಿಖಾ ಶಾಖೆ, ತಾಂತ್ರಿಕ ಶಾಖೆ, ತರಬೇತಿ ಮತ್ತು ಕುಂದುಕೊರತೆ ಹಾಗೂ ಮಾಹಿತಿ, ಪ್ರಚಾರ ಶಾಖೆಗಳನ್ನೊಳಗೊಂಡಂತೆ ಸಕಾಲ ಮಿಷನ್‌ ಅಭಿವೃದ್ಧಿಗೆ ಒತ್ತು ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.