108 ambulance strike: ರಾಜ್ಯದ 108 ಆ್ಯಂಬುಲೆನ್ಸ್‌ ನೌಕರರು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ಸೆಪ್ಟೆಂಬರ್ 20 ರಿಂದ ಸಾಮೂಹಿಕವಾಗಿ ರಾಜೀನಾಮೆ ನೀಡಿ ಹೋರಾಟ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು (ಸೆ.8): ವೇತನ ಪರಿಷ್ಕರಣೆ ಸೇರಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ ಸೆ.20ರಿಂದ ಸಾಮೂಹಿಕವಾಗಿ ರಾಜೀನಾಮೆ ನೀಡಿ ಹೋರಾಟಕ್ಕಿಳಿಯುವುದಾಗಿ ರಾಜ್ಯದಲ್ಲಿ ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 108 ಆ್ಯಂಬುಲೆನ್ಸ್‌ ನೌಕರರು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಸುವರ್ಣ ಕರ್ನಾಟಕ ಆರೋಗ್ಯ ಕವಚ-108 ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಕವಚ ಆ್ಯಂಬುಲೆನ್ಸ್‌ ನೌಕರರ ಸಂಘದ ಪದಾಧಿಕಾರಿಗಳು ಆರೋಗ್ಯ ಸಚಿವರು ಹಾಗೂ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಜಿವಿಕೆ ಗ್ರೀನ್‌ ಹೆಲ್ತ್‌ ಇಎಂಆರ್‌ಐ ಸಂಸ್ಥೆ ಅಧೀನದಲ್ಲಿ 35,000 ಕಾರ್ಮಿಕರು ನೇಮಕಗೊಂಡಿದ್ದೇವೆ. ನೇಮಕಾತಿ ವೇಳೆ ಪ್ರತಿ ವರ್ಷ ವೇತನ ಪರಿಷ್ಕರಣೆ ಭರವಸೆ ನೀಡಲಾಗಿತ್ತು. ಆದರೆ 2017 ರಿಂದ 2022ರವರೆಗೆ ಯಾವುದೇ ವೇತನ ಹೆಚ್ಚಳ ಆಗಿಲ್ಲ. ಹೀಗಾಗಿ ಪ್ರತಿ ವರ್ಷ 108 ಆ್ಯಂಬುಲೆನ್ಸ್ ನೌಕರರ ವೇತನ ಪರಿಷ್ಕರಣೆ ಮಾಡಬೇಕು, 3 ಪಾಳಿಯಲ್ಲಿ ಆ್ಯಂಬುಲೆನ್ಸ್​ ವಾಹನದ ಸೌಕರ್ಯ ಮಾಡಬೇಕು.

50 ಲಕ್ಷ ಪರಿಹಾರಕ್ಕೆ ಆಗ್ರಹ:

⁠ವಲಯವಾರು ವಿಂಗಡಣೆ ಮಾಡಿ ನಿಗದಿ ಮಾಡಿರೋ ವೇತನ ರದ್ದುಪಡಿಸಿ ಏಕರೂಪ ವಲಯವಾಗಿ ಬದಲಾವಣೆ ಮಾಡಬೇಕು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 50 ಲಕ್ಷ ರು. ಪರಿಹಾರ, ಜೇಷ್ಠತೆ ಆಧಾರದ ಮೇಲೆ ಸಿಬ್ಬಂದಿಗೆ ವೇತನ ನಿಗದಿ ಮಾಡಬೇಕು. ಕಾರ್ಮಿಕ ಇಲಾಖೆ ಪ್ರಕಾರ ಪ್ರತಿ ತಿಂಗಳು 7ರ ಒಳಗೆ ವೇತನ ನೀಡಬೇಕು. ಎಲ್ಲಾ ಕೆಲಸದ ಸ್ಥಳಗಳಲ್ಲಿ ಕಾರ್ಮಿಕರಿಗೆ ಶೌಚಾಲಯ, ವಿಶ್ರಾಂತಿ ಕೊಠಡಿ, ಆ್ಯಂಬುಲೆನ್ಸ್ ಸ್ವಚ್ಛಗೊಳಿಸಲು ನೀರಿನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದೆ.

ಸೆ.4 ರಂದು ಪತ್ರ ಬರೆದಿರುವ ಸಂಘದ ಪದಾಧಿಕಾರಿಗಳು, 15 ದಿನಗಳ ಒಳಗಾಗಿ ಬೇಡಿಕೆ ಈಡೇರಿಸದದಸಿದ್ದರೆ ಸೆ.20 ರಿಂದ ಸಾಮೂಹಿಕ ರಾಜೀನಾಮೆ ನೀಡಿ ಹೋರಾಟ ನಡೆಸುತ್ತೇವೆ. ನಂತರದ ಪರಿಣಾಮಗಳಿಗೆ ಸರ್ಕಾರವೇ ಹೊಣೆ ಎಂದು ಎಚ್ಚರಿಸಿದ್ದಾರೆ.

ಸಮಸ್ಯೆ ಆದರೆ ಕ್ರಮ

108 ಆ್ಯಂಬುಲೆನ್ಸ್ ನೌಕರರ ಮುಷ್ಕರದಿಂದ ರೋಗಿಗಳಿಗೆ ಸಮಸ್ಯೆಯಾದರೆ ಸಂಬಂಧಿಸಿದವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಚಾಲಕರಿಗೆ ಯಾವುದೇ ಸಮಸ್ಯೆ ಇದ್ದಲ್ಲಿ ಕಂಪನಿಯೊಂದಿಗೆ ಮಾತುಕತೆ ನಡೆಸಬೇಕು. ಕಂಪನಿಗೆ ತಮ್ಮ ಚಾಲಕರು ಮತ್ತು ನಿರ್ವಾಹಕರನ್ನು ನಿಭಾಯಿಸಲು ಸಾಧ್ಯವಾಗದಿದ್ದರೆ ಕಂಪನಿ ಬಿಟ್ಟು ಹೋಗಬೇಕು.

-ಯು.ಟಿ.ಖಾದರ್, ಆರೋಗ್ಯ ಸಚಿವ