Asianet Suvarna News Asianet Suvarna News

ಅಂಬೇಡ್ಕರ್‌ ಫೋಟೋ ವಿವಾದದ ಜಡ್ಜ್‌ ಸೇರಿದಂತೆ 13 ಮಂದಿ ವರ್ಗ

ಕಳೆದ ಗಣರಾಜ್ಯೋತ್ಸವದಂದು ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಅಂಬೇಡ್ಕರ್‌ ಭಾವಚಿತ್ರ ಇಡುವ ವಿಚಾರದಲ್ಲಿ ವಿವಾದದ ಕೇಂದ್ರ ಬಿಂದುವಾಗಿದ್ದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಸೇರಿದಂತೆ 13 ಮಂದಿ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಆದೇಶ ಮಾಡಿದೆ.

13 judges transferred karnataka high court over allegation insulting ambedkar photo gvd
Author
First Published Sep 4, 2022, 4:15 AM IST

ಬೆಂಗಳೂರು (ಸೆ.04): ಕಳೆದ ಗಣರಾಜ್ಯೋತ್ಸವದಂದು ರಾಯಚೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಅಂಬೇಡ್ಕರ್‌ ಭಾವಚಿತ್ರ ಇಡುವ ವಿಚಾರದಲ್ಲಿ ವಿವಾದದ ಕೇಂದ್ರ ಬಿಂದುವಾಗಿದ್ದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಸೇರಿದಂತೆ 13 ಮಂದಿ ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಆದೇಶ ಮಾಡಿದೆ. ಮಲ್ಲಿಕಾರ್ಜುನ ಗೌಡ ಅವರನ್ನು ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ. ಅದೇ ರೀತಿ ಕರ್ನಾಟಕ ನ್ಯಾಯಾಂಗ ಅಕಾಡೆಮಿ ನಿರ್ದೇಶಕರಾಗಿದ್ದ ನ್ಯಾಯಾಧೀಶ ರಾಮಚಂದ್ರ ಡಿ. ಹುದ್ದಾರ್‌ ಅವರನ್ನು ಬೆಂಗಳೂರು ನಗರದ ಪ್ರಧಾನ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿದೆ.

ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಟಿ. ವೆಂಕಟೇಶ್‌ ನಾಯ್ಕ್‌ ಅವರನ್ನು ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರನ್ನಾಗಿ, ಸಂತೋಷ್‌ ಗಜಾನನ್‌ ಭಟ್‌ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರನ್ನಾಗಿ, ಎಸ್‌. ಮಹಾಲಕ್ಷ್ಮಿ ನೆರಲೆ ಅವರನ್ನು ಬೆಂಗಳೂರಿನ ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ ನ್ಯಾಯ ಮಂಡಳಿ ಮೇಲ್ವಿಚಾರಣಾ ಅಧಿಕಾರಿ ಹುದ್ದೆಗೆ ನೇಮಕ ಮಾಡಲಾಗಿದೆ. ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರನ್ನು ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರನ್ನಾಗಿ, ಕೆ.ಬಿ. ಗೀತಾ ಅವರನ್ನು ತುಮಕೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರನ್ನಾಗಿ, ತ್ಯಾಗರಾಜ ಎನ್‌. ಅವರನ್ನು ಬೆಂಗಳೂರು ನಗರದ ಸ್ಮಾಲ್‌ ಕಾಸಸ್‌ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಅಂಬೇಡ್ಕರ್‌ಗೆ ಅಪಮಾನ ಪ್ರಕರಣ, ರಾಯಚೂರು ನ್ಯಾಯಾಧೀಶ ವರ್ಗಾವಣೆ

ಜೆ.ಎನ್‌.ಸುಬ್ರಮಣ್ಯ ಅವರನ್ನು ಬೆಂಗಳೂರಿನ ಕೈಗಾರಿಕಾ ನ್ಯಾಯ ಮಂಡಳಿಯ ಮೇಲುಸ್ತುವಾರಿ ಅಧಿಕಾರಿಯನ್ನಾಗಿ, ಮುಸ್ತಾಫಾ ಹುಸೈನ್‌ ಸಯದ್‌ ಅಜೀಜ್‌ ಅವರನ್ನು ಬೆಳಗಾವಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಮಾರುತಿ ಬಗಾಡೆ ಅವರನ್ನು ರಾಯಚೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಹುದ್ದೆಗೆ ವರ್ಗಾವಣೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ. ಅಲ್ಲದೆ, ಪ್ರಭಾವತಿ ಮೃತ್ಯುಂಜಯ ಹಿರೇಮಠ ಅವರನ್ನು ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ, ನರಹರಿ ಪ್ರಭಾಕರ ಮರಾಥೆ ಅವರನ್ನು ಬೆಂಗಳೂರು ನ್ಯಾಯಾಂಗ ಅಕಾಡೆಮಿಯ ನಿರ್ದೇಶಕರನ್ನಾಗಿ ಮತ್ತು ಸಂತೋಷ್‌ ಗಜಾನನ್‌ ಭಟ್‌ ಅವರನ್ನು ಬೆಂಗಳೂರಿನ 66ನೇ ಹೆಚ್ಚುವರಿ ನಗರ ಸಿವಿಲ್‌ ಮತ್ತು ಸತ್ರ ನ್ಯಾಯಾಧೀಶರನ್ನಾಗಿ ವರ್ಗಾವಣೆ ಮಾಡಿ ಅಧಿಸೂಚನೆ ಹೊರಡಿಸಲಾಗಿದೆ.

ಘಟನೆ ಹಿನ್ನೆಲೆ: ಜನವರಿ 26ರಂದು ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ, ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಪಾಟೀಲ್ ಅವರು ಅಂಬೇಡ್ಕರ್ ಪೋಟೋ ತೆಗೆದರೆ ಮಾತ್ರ ಧ್ವಜಾರೋಹಣ ಮಾಡುವುದಾಗಿ ಹೇಳಿದ್ದರು. ನ್ಯಾಯಾಧೀಶರ ಈ ನಡೆ ಖಂಡಿಸಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಅಲ್ಲದೇ ರಾಜ್ಯಾದ್ಯಂತ ಈಗಲೂ ಸಹ ಪ್ರತಿಭಟನೆಗಳು ನಡೆಯುತ್ತಿವೆ.

ಹೈಕೋರ್ಟ್ ಗೆ ದೂರು: ಗಣರಾಜ್ಯೋತ್ಸವ ಅಂಗವಾಗಿ ರಾಯಚೂರಿನ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಬುಧವಾರ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮದ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರವನ್ನು ತೆಗೆಸಿದ್ದಾರೆ ಎನ್ನಲಾದ ವಿವಾದ ಸಂಬಂಧ ಕೆಲ ವಕೀಲರು ಮತ್ತು ಸಂಘಟನೆಗಳು ನ್ಯಾಯಾಧೀಶರ ವಿರುದ್ಧ ಹೈಕೋರ್ಟ್ ಗೆ ದೂರು ನೀಡಿದ್ದರು. 

2750 ಕೋಟಿ ರೂ ಮೊತ್ತದ ಯೋಜನೆಗಳಿಗೆ ಅನುಮೋದನೆ: ಸಚಿವ ಮುರುಗೇಶ್ ನಿರಾಣಿ

ಈ ಬಗ್ಗೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಮತ್ತು ರಿಜಿಸ್ಟ್ರಾರ್‌ ಜನರಲ್‌ ಅವರಿಗೆ ಇ-ಮೇಲ್‌ ಮೂಲಕ ಕೆಲ ವಕೀಲರು ಮತ್ತು ವಕೀಲರ ಸಂಘ ದೂರು ಸಲ್ಲಿಸಿ, ‘ರಾಯಚೂರು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ಗೆ ಅಪಮಾನ ಮಾಡಿದ್ದಾರೆ. ಹೀಗಾಗಿ, ಪ್ರಕರಣ ಸಂಬಂಧ ಸಮಗ್ರ ತನಿಖೆಗೆ ಆದೇಶಿಸಬೇಕು. ನ್ಯಾ.ಮಲ್ಲಿಕಾರ್ಜುನ ಗೌಡ ಅವರನ್ನು ವಜಾಗೊಳಿಸಬೇಕು’ ಎಂದು ಒತ್ತಾಯಿಸಿದ್ದರು. ಘಟನೆಯ ನಂತರ ವಿದ್ಯಾರ್ಥಿ ಸಂಘಟನೆಗಳು ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಸಿದ್ದವು. ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ನಡೆಸಿವ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿತ್ತು.

Follow Us:
Download App:
  • android
  • ios