Asianet Suvarna News Asianet Suvarna News

ರೈತರಿಗೆ ಗುಡ್‌ನ್ಯೂಸ್ ಕೊಟ್ಟ ಸಿಎಂ: ವಾರದೊಳಗೆ ಅನ್ನದಾತರ ಖಾತೆಗೆ 2000 ರು. ಬೆಳೆ ನಷ್ಟ ಪರಿಹಾರ!

ಬರದಿಂದ ಬೆಳೆ ನಾಶವಾಗಿ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರು. ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. 

2 thousand crop loss compensation to farmers account within a week Says CM Siddaramaiah gvd
Author
First Published Dec 7, 2023, 4:23 AM IST

ಸುವರ್ಣ ವಿಧಾನಸೌಧ (ಡಿ.07): ಬರದಿಂದ ಬೆಳೆ ನಾಶವಾಗಿ ಸಂಕಷ್ಟಕ್ಕೆ ಒಳಗಾಗಿರುವ ರೈತರಿಗೆ ಈಗಾಗಲೇ ಸರ್ಕಾರ ಘೋಷಿಸಿರುವ ಎರಡು ಸಾವಿರ ರು. ವರೆಗಿನ ಮೊದಲ ಹಂತದ ಪರಿಹಾರವನ್ನು ಮುಂದಿನ ವಾರದೊಳಗೆ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬುಧವಾರ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ಎಲ್ಲರ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಿ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.

ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಮತ್ತಷ್ಟು ಸಮರೋಪಾದಿಯಲ್ಲಿ ಕೆಲಸ ಮುಂದುವರೆಸಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಗಳಿಗೆ ಭೇಟಿ ನೀಡಿರುವ, ಪರಿಶೀಲನೆ ನಡೆಸಿರುವ ಕುರಿತಾದ ಸಮಗ್ರ ಮಾಹಿತಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ಅಂಕಿ-ಅಂಶಗಳ ಸಹಿತ ಒದಗಿಸಬೇಕು ಎಂದು ಸೂಚನೆ ನೀಡಿದರು. ರೈತರಿಗೆ ಮೊದಲ ಹಂತದಲ್ಲಿ 2,000 ರು. ವರೆಗೆ ನೀಡಲು ಘೋಷಿಸಿರುವ ಪರಿಹಾರವನ್ನು ತ್ವರಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ರೂಪಿಸಿ, ಡಿ.ಬಿ.ಟಿ. ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಬಿಜೆಪಿ ಬ್ರಾಂಡ್‌ ಬೆಂಗಳೂರು ಮಾಡಿದ್ದಾರೆಯೇ?: ಸಿಎಂ ಸಿದ್ದರಾಮಯ್ಯ

ಜಿಲ್ಲಾಧಿಕಾರಿಗಳ ಜನಸ್ಪಂದನ ಬಗ್ಗೆ ನಿಗಾ ಇಡಿ: ಮುಖ್ಯಮಂತ್ರಿಗಳ ಕಚೇರಿವರೆಗೆ ಅಹವಾಲುಗಳು ಬಾರದಂತೆ ಮಾಡಲು ಜಿಲ್ಲಾ ಮಟ್ಟದಲ್ಲೇ ಪ್ರತಿ ತಿಂಗಳು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜನಸ್ಪಂದನ ಕಾರ್ಯಕ್ರಮ ಮಾಡುವಂತೆ ಸೂಚಿಸಲಾಗಿತ್ತು. ಈ ಬಗ್ಗೆ ನಿಗಾ ಇಟ್ಟು ಸರಿಯಾದ ರೀತಿಯಲ್ಲಿ ಅನುಷ್ಠಾನ ಮಾಡಬೇಕು. ಜತೆಗೆ ಅವುಗಳ ಕುರಿತು ನನಗೆ ವರದಿ ನೀಡಬೇಕು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಯಾ ಜಿಲ್ಲೆಗೆ ಭೇಟಿ ನೀಡಿ ತಳಮಟ್ಟದಲ್ಲಿ ಕೆಲಸ ಮಾಡಬೇಕು. ಇಲ್ಲದಿದ್ದರೆ ಜಿಲ್ಲೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸುವುದು ಕಷ್ಟವಾಗುತ್ತದೆ ಎಂದು ಕಿವಿಮಾತು ಹೇಳಿದರು.

ಟಿಪ್ಪಣಿಗಳು ಕನ್ನಡದಲ್ಲಿರಲಿ: ಆಯವ್ಯಯ ಭಾಷಣದಲ್ಲಿ ಘೋಷಿಸಿರುವ 143 ಘೋಷಣೆಗಳ ಪೈಕಿ ಈಗಾಗಲೇ 83 ಘೋಷಣೆಗಳಿಗೆ ಸರ್ಕಾರಿ ಆದೇಶ ಹೊರಡಿಸಿ, ಕಾರ್ಯಗತಗೊಳಿಸಲಾಗಿದೆ. ಉಳಿದ ಘೋಷಣೆಗಳನ್ನೂ ಶೀಘ್ರವೇ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳಬೇಕು. ಜತೆಗೆ ಪ್ರತಿ ಟಿಪ್ಪಣಿಗಳು ಕನ್ನಡದಲ್ಲೇ ಇರುವಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿದರು.

ಗ್ಯಾರಂಟಿ ಅಡಚಣೆ ನಿವಾರಿಸಿ: ಗ್ಯಾರಂಟಿ ಯೋಜನೆಗಳಲ್ಲಿ ನೋಂದಾಯಿಸಿಕೊಂಡು ಇನ್ನೂ ಸೌಲಭ್ಯ ದೊರಕದ ಅರ್ಹ ಕೆಲವು ಫಲಾನುಭವಿಗಳಿಗೆ ಸೌಲಭ್ಯ ದೊರಕಲು ಇರುವ ತಾಂತ್ರಿಕ ಅಡಚಣೆಗಳನ್ನು ಶೀರ್ಘವೇ ನಿವಾರಿಸಬೇಕು. ಜತೆಗೆ ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿದ್ದು, ಸಚಿವರಿಗೆ ಸೂಕ್ತ ಸಲಹೆ ನೀಡಬೇಕು.ಇಲಾಖೆಗಳಲ್ಲಿ ಕಡತಗಳ ವಿಲೇವಾರಿ ಸಮರ್ಪಕವಾಗಿ ನಡೆಯಬೇಕು. ಸಚಿವ ಸಂಪುಟ ಸಭೆಯಲ್ಲಿಯೂ ಬಾಕಿ ಕಡತಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

‘ಕಾಂಗ್ರೆಸ್‌ ಈಸ್‌ ರಿಯಲ್‌ ಕಮ್ಯುನಲ್‌ ಪಾರ್ಟಿ’: ಮಾಜಿ ಸಚಿವ ಸಿ.ಟಿ.ರವಿ ವ್ಯಂಗ್ಯ

ಯೋಜನಾ ವೆಚ್ಚ ಹೆಚ್ಚಳಕ್ಕೆ ಅಸಮಾಧಾನ: ಟೆಂಡರ್‌ ಅಂದಾಜು ಸಿದ್ಧಪಡಿಸುವಾಗಲೇ ಎಲ್ಲ ಅಂಶಗಳನ್ನೂ ಒಳಗೊಂಡಂತೆ ಸಮಗ್ರವಾಗಿ ಅಂದಾಜನ್ನು ಸಿದ್ಧಪಡಿಸಬೇಕು. ಪರಿಷ್ಕೃತ ಅಂದಾಜುಗಳನ್ನು ಸಲ್ಲಿಸುವುದರಿಂದ ಯೋಜನೆಯ ವೆಚ್ಚ ಗಣನೀಯವಾಗಿ ಹೆಚ್ಚುತ್ತಿರುವುದಲ್ಲದೆ ಅನುಷ್ಠಾನವೂ ವಿಳಂಬವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಸಂಬಂಧಿಸಿದಂತೆ ಆರ್ಥಿಕ ಇಲಾಖೆಯು ಹಿರಿಯ ಅಧಿಕಾರಿಗಳ ಸಮಿತಿ ರಚಿಸಿದ್ದು, ಈ ಸಮಿತಿಯು ಮಾರ್ಗಸೂಚಿಗಳನ್ನು ರೂಪಿಸುತ್ತಿದೆ. ಇದು ಅಂತಿಮ ಹಂತದಲ್ಲಿದ್ದು, ಶೀಘ್ರವೇ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ಆರ್ಥಿಕ ಇಲಾಖೆ ಹಾಗೂ ಮುಖ್ಯಮಂತ್ರಿಯವರ ಅಪರ ಕಾರ್ಯದರ್ಶಿ ಎಲ್.ಕೆ. ಅತೀಕ್‌ ತಿಳಿಸಿದರು. ಈ ವೇಳೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಸೀರ್‌ ಅಹ್ಮದ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್‌ ಗೋಯೆಲ್‌ ಸೇರಿ ಹಲವರು ಹಾಜರಿದ್ದರು.

Latest Videos
Follow Us:
Download App:
  • android
  • ios