ಬೆಂಗಳೂರು, (ಆ.12): ನಗರದ ಕೆಜಿ ಹಳ್ಳಿ, ಡಿಜೆ ಹಳ್ಳಿ ಹಾಗೂ ಕಾವಲ್ ಭೈರಸಂದ್ರದ ಗಲಭೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಮ್ಯಾಜಿಸ್ಟ್ರೇಟ್ ತನಿಖೆಗೆ ಮುಂದಾಗಿದೆ.

ಪ್ರಕರಣ ಸಂಬಂಧ ತನಿಖೆ ಮಾಡಲು ಇಂದು (ಬುಧವಾರ) ಸಿಎಂ ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಮಾರ್ಗಸೂಚಿ ಪ್ರಕಾರ ಡಿಸ್ಟಿಕ್ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ತೀರ್ಮಾನವಾಯ್ತು.

ಬೆಂಗಳೂರು ಗಲಭೆ: ಉತ್ತರ ಪ್ರದೇಶ ಮಾದರಿಯ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್​ ಠಾಣೆಗಳ ವ್ಯಾಪ್ತಿಯಲ್ಲಿ ನಿನ್ನೆ(ಮಂಗಳವಾರ) ರಾತ್ರಿ ನಡೆದ ದಾಂಧಲೆ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ಒಪ್ಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಅಲ್ಲದೇ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟುಮಾಡಿದ್ರೇ, ನಷ್ಟ ಉಂಟು ಮಾಡಿದವರಿಂದಲೇ ವಸೂಲಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶವಿದೆ. ಈ ಆದೇಶದಂತೆಯೇ  ಘಟನೆಯಲ್ಲಿ ಹಾನಿಯಾದ ನಷ್ಟವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲು ನಿರ್ಧಾರ ಮಾಡಿರುವುದಾಗಿ ತಿಳಿಸಿದರು.

ಸಭೆಯಲ್ಲಿ ಗೃಹ ಸಚಿವ ಬೊಮ್ಮಾಯಿ, ಡಿಜಿಐಜಿಪಿ ಪ್ರವೀಣ್ ಪಂತ್, ನಗರ ಪೊಲಿಸ್ ಆಯುಕ್ತ ಕಮಲ್ ಪಂತ್, ಗೃಹ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.