ಎಲ್ಲ ಕೆಳಹಂತದ ಪೊಲೀಸ್ ಸಿಬ್ಬಂದಿಗೆ ವಸತಿ ಕಲ್ಪಿಸುವ ಗುರಿ : ಗೃಹ ಸಚಿವ ಪರಮೇಶ್ವರ್
ರಾಜ್ಯಾದ್ಯಂತ ಕೆಳಹಂತದ ಪೊಲೀಸ್ ಸಿಬ್ಬಂದಿಗೆ ಸುಸಜ್ಜಿತ ಪೊಲೀಸ್ ವಸತಿಗಳನ್ನು ನಿರ್ಮಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು. ನಗರದಲ್ಲಿ ರಾಜ್ಯ ಪೊಲೀಸ್ ಇಲಾಖೆ ನಿರ್ಮಿಸಿರುವ ನೂತನ ವಸತಿ ಸಮುಚ್ಛಯ'ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವರದಿ : ಮಹಂತೇಶ್ ಕುಮಾರ್, ಏಷ್ಯನೆಟ್ ಸುವರ್ಣನ್ಯೂಸ್ ತುಮಕೂರು.
ತುಮಕೂರು (ನ.3): ರಾಜ್ಯಾದ್ಯಂತ ಕೆಳಹಂತದ ಪೊಲೀಸ್ ಸಿಬ್ಬಂದಿಗೆ ಸುಸಜ್ಜಿತ ಪೊಲೀಸ್ ವಸತಿಗಳನ್ನು ನಿರ್ಮಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.
ನಗರದಲ್ಲಿ ರಾಜ್ಯ ಪೊಲೀಸ್ ಇಲಾಖೆ ನಿರ್ಮಿಸಿರುವ ನೂತನ ವಸತಿ ಸಮುಚ್ಛಯ'ವನ್ನು ಉದ್ಘಾಟಿಸಿ ಅವರು ಮಾತನಾಡಿದರು. 2015ರಲ್ಲಿ ಗೃಹ ಸಚಿವನಾಗಿದ್ದ ಸಂದರ್ಭದಲ್ಲಿ ಬೆಂಗಳೂರಿನ ಮೈಸೂರು ರಸ್ತೆಯಲ್ಲಿರುವ ಪೊಲೀಸ್ ವಸತಿ ಗೃಹಗಳಿಗೆ ಬೇಟಿ ನೀಡಿ ಪರಿಶೀಲಿಸಿದ್ದೆ. ಸುಸಜ್ಜಿತವಾದ ಮನೆಗಳಿಲ್ಲ ಎಂಬುದು ಗಮನಕ್ಕೆ ಬಂದಿತ್ತು. ಪರಿಸ್ಥಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೆ. ಅಂದಿನ ಬಜೆಟ್‌ನಲ್ಲಿ ಪೊಲೀಸ್ ಗೃಹ ಯೋಜನೆ ಸ್ಥಾಪಿಸಿದರು ಎಂದು ತಿಳಿಸಿದರು.
ಪರಮೇಶ್ವರ್ ಗೆ ಸಿಎಂ ಆಗುವ ಅವಕಾಶವಿದೆ; ಸಹಕಾರಿ ಸಚಿವ ಕೆ.ಎನ್ ರಾಜಣ್ಣ
ಹಿಂದಿನ ಸರ್ಕಾರ ಪೊಲೀಸರಿಗೆ ಅನುಕೂಲವಾಗುವಂತಹ ಅಭಿವೃದ್ಧಿ ಕೆಲಸ ಮಾಡಿಲ್ಲ. ಈ ಹಿಂದೆ ನಾವು ಜಾರಿಗೆ ತಂದಿದ್ದ ಯೋಜನೆಗಳನ್ನು ಮುಂದುವರಿಸಲಿಲ್ಲ. ಮುಂದಿನ ಐದು ವರ್ಷದ ಅವಧಿಯಲ್ಲಿ ಎಲ್ಲ ಕೆಳಹಂತದ ಅಧಿಕಾರಿ ಮತ್ತು ಸಿಬ್ಬಂದಿಗೆ ಮನೆ ಸಿಗುವಂತೆ ಮಾಡುತ್ತೇವೆ ಎಂದು ಹೇಳಿದರು.
ಹೊಸ ನೇಮಕಾತಿಗೆ ಅಸ್ತು
ದೇಶದಲ್ಲಿ 1 ಲಕ್ಷ ಜನಸಂಖ್ಯೆಗೆ 152 ಪೊಲೀಸ್ ಸಿಬ್ಬಂದಿ ಬೇಕು. ಇದು ಸಾಧ್ಯವಾಗುತ್ತಿಲ್ಲ. ಕಳೆದ ಬಾರಿ ಗೃಹ ಸಚಿವನಾಗಿದ್ದಾಗ 21 ಸಾವಿರ ನೇಮಕಾತಿ ಮಾಡಲಾಗಿತ್ತು. ಅನಂತರ ನೇಮಕಾತಿ ಮಾಡಿಕೊಂಡಿಲ್ಲ. ರಾಜ್ಯದಲ್ಲಿ ಪೊಲೀಸರ ಸಂಖ್ಯೆ ಹೆಚ್ಚಿಸಲಾಗುವುದು. ಖಾಲಿ ಇರುವ ಹುದ್ದೆಗಳ ಸಂಖ್ಯೆಯ ಕುರಿತು ಮುಖ್ಯಂಮತ್ರಿಗಳ ಗಮನಕ್ಕೆ ತರಲಾಗಿದೆ. ಅವರು ಒಪ್ಪಿಗೆ ಸೂಚಿಸಿದ್ದು ಹಂತಹಂತವಾಗಿ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಎಎಸ್‌ಐಗಳಿಗೆ ಬಡ್ತಿ
ಈ ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅಕ್ರಮದಿಂದ, ಉಳಿದ ಪಿಎಸ್‌ಐ ನೇಮಕಾತಿಗಳು ನಿಂತಿವೆ. 1 ಸಾವಿರ ಪಿಎಸ್‌ಐ ಹುದ್ದೆಗಳು ಭರ್ತಿಯಾಗಬೇಕಿದೆ. ನೇಮಕಾತಿಗೆ ಸಾಧ್ಯವಾಗದ ಹಿನ್ನೆಲೆಯಲ್ಲಿ 600 ಮಂದಿ ASI ನಿಂದ PSI ಹುದ್ದೆಗೆ ಬಡ್ತಿ ನೀಡಲಾಗುತ್ತಿದೆ.
ಜಿಲ್ಲೆಗೆ ಇಬ್ಬರು ಎಎಸ್‌ಪಿ
ಪೊಲೀಸರಿಗೆ ಕೆಲಸದ ಒತ್ತಡ ಹೆಚ್ಚಾಗುತ್ತಿದೆ. ಕಾನೂನು ಸುವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿಭಾಯಿಸುವ ದೃಷ್ಟಿಯಿಂದ ಪ್ರತಿ ಜಿಲ್ಲೆಗೆ ಇಬ್ಬರು ಎಎಸ್‌ಪಿ (ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ)ಗಳನ್ನು ನೇಮಿಸಲಾಗುತ್ತಿದೆ. ಒಬ್ಬರನ್ನು ಅಪರಾಧ (ಕ್ರೈಮ್), ಮತ್ತೊಬ್ಬರನ್ನು ಕಾನೂನು ಸುವ್ಯವಸ್ಥೆಗೆ ನಿಯೋಜಿಸಲಾಗುವುದು.
ಬೆಂಗಳೂರು ತುಮಕೂರು ಮೆಟ್ರೋ
ತುಮಕೂರು ನಗರ ಬೆಂಗಳೂರಿಗೆ ಪರ್ಯಾಯವಾಗಿ ಬೆಳೆಯುತ್ತಿದೆ. ದಿನನಿತ್ಯ 30 ಸಾವಿರ ಜನ ತುಮಕೂರು-ಬೆಂಗಳೂರು ಪ್ರಯಾಣ ನಡೆಸುತ್ತಾರೆ. ಮೆಟ್ರೋ ತರಲು ಎಲ್ಲ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದು ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದಿದ್ದಾರೆ. ಮತ್ತೊಮ್ಮೆ ಗಮನಕ್ಕೆ ತರಲಾಗುವುದು ಎಂದು ಪರಮೇಶ್ವರ್ ಹೇಳಿದರು.
ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಶಾಸಕ ಜ್ಯೋತಿಗಣೇಶ್, ಡಿಜಿಪಿ ಕೆ.ರಾಮಚಂದ್ರ ರಾವ್, ಕೇಂದ್ರ ವಲಯ ಐಜಿಪಿ ಡಾ. ರವಿಕಾಂತೇಗೌಡ, ಜಿಲ್ಲಾಧಿಕಾರಿ ಶ್ರೀನಿವಾಸ್, ಎಸ್‌ಪಿ ಅಶೋಕ್ ಇದ್ದರು.
5 ವರ್ಷ ಸಿದ್ದರಾಮಯ್ಯ ಸಿಎಂ ಹೇಳಿಕೆಗೆ ಸಚಿವ ಸಂತೋಷ್ ಲಾಡ್ ಸಹಮತ
ಅಭಿವೃದ್ಧಿ ಕಾಮಕಾರಿಗಳ ಪರಿಶೀಲನೆ
ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ್ ಅವರು ಜಿಲ್ಲೆಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಕುಲಪತಿ, ಕುಲಸಚಿವರೊಂದಿಗೆ ಪ್ರಗತಿಪರಿಶೀಲನೆ ಸಭೆ ನಡೆಸಿದರು. ವಿದ್ಯಾರ್ಥಿಗಳು ಕಲಿಕೆಗೆ ಅನುಗುಣವಾಗಿ ಬದುಕು ಕಟ್ಟಿಕೊಳ್ಳಬೇಕು. ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವಂತೆ ಸೂಚಿಸಿದರು.
ಸಂಜೆ ವೇಳೆ ತಿಮ್ಮಸಂದ್ರ-ಬಿದರಕಟ್ಟೆಯಲ್ಲಿ ನಿರ್ಮಾಣ ಹಂತದಲ್ಲಿರುವ ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್‌ಗೆ ಭೇಟಿ ನೀಡಿದರು. ಅಧಿಕಾರಿಗಳ ಜೊತೆ ಖುದ್ದಾಗಿ ಕಾಮಗಾರಿಯನ್ನು ಪರಿಶೀಲಿಸಿ, ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದರು.