ಬೆಂಗಳೂರು :  ಯಲಹಂಕದ ವಾಯುನೆಲೆಯಲ್ಲಿ ಫೆ.20ರಿಂದ 24ರ ವರೆಗೆ ನಡೆಯಲಿರುವ ಏರೋ ಇಂಡಿಯಾ-2019ರ 12ನೇ ಆವೃತ್ತಿಯ ವೈಮಾನಿಕ ಪ್ರದರ್ಶನಕ್ಕೆ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಉಚಿತ ಪಾಸ್‌ ವಿತರಿಸುತ್ತಿದೆ.

ವೈಮಾನಿಕ ಪ್ರದರ್ಶನದಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಕಲ್ಪಿಸಲಾಗಿದೆ. ಫೆ.20ರಿಂದ 22ರ ವರೆಗೆ ಮಾತ್ರ ವಿದ್ಯಾರ್ಥಿಗಳು ವಿಮಾನ ಹಾರಾಟವನ್ನು ವೀಕ್ಷಿಸಬಹುದು.

ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಉಚಿತ ಪಾಸ್‌ಗಳನ್ನು ವಿತರಿಸಲಾಗುವುದು.ಈ ಸಂಬಂಧ ಆಯಾ ಕಾಲೇಜು ಅಧ್ಯಾಪಕರ ಮೇಲುಸ್ತುವಾರಿ ಸಮಿತಿ ರಚಿಸಲಾಗಿದೆ. ಅಗತ್ಯ ಸಾರಿಗೆ ವ್ಯವಸ್ಥೆಯನ್ನು ಕಾಲೇಜುಗಳ ಹಂತದಲ್ಲಿಯೇ ಮಾಡಿಕೊಳ್ಳುವಂತೆ ತಿಳಿಸಿದೆ.

ವೈಮಾನಿಕ ಪ್ರದರ್ಶನದಲ್ಲಿ ಪಾಲ್ಗೊಳ್ಳಲು ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಪ್ರಾಂಶುಪಾಲರ ದೃಢೀಕರಣದೊಂದಿಗೆ ಇ- ಮೇಲ್‌ dcekar.sports@gmail.com  ಮೂಲಕ ಕಳುಹಿಸುವಂತೆ ತಿಳಿಸಿದೆ. ಇಲಾಖೆ ವೆಬ್‌ಸೈಟ್‌ನಲ್ಲಿ ಅರ್ಜಿಗಳನ್ನು ಡೌನ್‌ಲೋಡ್‌ ಮಾಡಿಕೊಂಡು ಫೆ.8ರೊಳಗೆ ಕಳುಹಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪ್ರಕಟಣೆ ಹೊರಡಿಸಿದ್ದಾರೆ.

ಪ್ರಾಥಮಿಕ ಶಿಕ್ಷಣಕ್ಕೆ ಐದು ಸಾವಿರ ಪಾಸ್‌:  ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದಲೂ ಐದು ಸಾವಿರ ವಿದ್ಯಾರ್ಥಿಗಳಿಗೆ ಪಾಸ್‌ ನೀಡಲಾಗುತ್ತಿದೆ. ಈಗಾಗಲೇ ಎಲ್ಲ ಶಾಲೆಗಳಿಗೂ ಸುತ್ತೋಲೆ ಹೊರಡಿಸಿ ಅರ್ಜಿಗಳನ್ನು ತುಂಬಿ ಕಳುಹಿಸುವಂತೆ ಸೂಚನೆ ನೀಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಗಳಿಗೆ ಅರ್ಜಿಗಳನ್ನು ಕಳುಹಿಸಿರುವ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪಾಸ್‌ ನೀಡಲಾಗುತ್ತಿದೆ ಎಂದು ಆಯುಕ್ತರ ಕಚೇರಿ ಮೂಲಗಳು ತಿಳಿಸಿವೆ.