ಬೆಂಗಳೂರು (ಮೇ.18):  ಕೊರೋನಾ ಸೋಂಕಿನಿಂದ ಗುಣಮುಖರಾದವರಲ್ಲಿ ಬ್ಲ್ಯಾಕ್‌ ಫಂಗಸ್‌ ಸೋಂಕು ದೃಢಪಡುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಸೋಮವಾರ ಮತ್ತೆ 41 ಪ್ರಕರಣಗಳು ದೃಢಪಟ್ಟು, ಒಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಅತಿ ಹೆಚ್ಚು 26 ಮಂದಿಯಲ್ಲಿ ಬ್ಲ್ಯಾಕ್‌ ಫಂಗಸ್‌ ಕಾಣಿಸಿಕೊಂಡಿದ್ದರೆ, ಬೆಂಗಳೂರು ನಗರದಲ್ಲಿ 12, ಕಲಬುರಗಿ, ಗದಗಗಳಲ್ಲಿ ತಲಾ ಇಬ್ಬರು, ಬಳ್ಳಾರಿಯಲ್ಲಿ ಒಬ್ಬರಿಗೆ ಸೋಂಕು ತಗಲಿದೆ.

ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ 83 ವರ್ಷದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಗ್ಗೆ ಮೃತಪಟ್ಟಿದ್ದು, ಈ ಮೂಲಕ ಈ ಆಸ್ಪತ್ರೆಯಲ್ಲಿ ಸೋಂಕಿಗೆ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಮವಾರ ಸೋಂಕು ದೃಢಪಟ್ಟಿರುವ 12 ಮಂದಿಯಲ್ಲಿ 10 ಮಂದಿ ಬೌರಿಂಗ್‌ ಆಸ್ಪತ್ರೆಯಲ್ಲಿ, ಇಬ್ಬರು ವಿಕ್ಟೋರಿಯಾದಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

BBMP ಮಹಾ ಎಡವಟ್ಟು, ಬ್ಲ್ಯಾಕ್‌ ಫಂಗಸ್‌ಗೆ ಖುದ್ದು ಆಹ್ವಾನ!

ವಿಜಯಪುರ ಜಿಲ್ಲೆಯಲ್ಲಿ 26 ಮಂದಿಗೆ ಬ್ಲ್ಯಾಕ್‌ ಫಂಗಸ್‌ ಕಾಣಿಸಿಕೊಂಡಿರುವುದಾಗಿ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್‌ ದೃಢಪಡಿಸಿದ್ದಾರೆ. ಬಿಎಲ…ಡಿಇ ಆಸ್ಪತ್ರೆಯಲ್ಲಿ -15, ಅಲ್ ಅಮೀನ್‌ ಆಸ್ಪತ್ರೆಯಲ್ಲಿ 1, ಆಯುಷ್‌ ಆಸ್ಪತ್ರೆಯಲ್ಲಿ 5, ಅಶ್ವಿನಿ ಆಸ್ಪತ್ರೆಯಲ್ಲಿ 1, ಚೌಧರಿ ಆಸ್ಪತ್ರೆಯಲ್ಲಿ 2, ಯಶೋಧಾ ಆಸ್ಪತ್ರೆಯಲ್ಲಿ 2 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಕಲಬುರಗಿಯಲ್ಲಿ ಬ್ಲ್ಯಾಕ್‌ ಫಂಗಸ್‌ ಸೋಂಕು ಕಾಣಿಸಿಕೊಂಡಿರುವ ಇಬ್ಬರಿಗೆ ಮುಂಬೈ ಮತ್ತು ಬೆಂಗಳೂರಿನಿಂದ ಆ್ಯಂಟಿ ಫಂಗಸ್‌ ಔಷಧಿ ತರಿಸಿ ಚಿಕಿತ್ಸೆ ಪ್ರಾರಂಭಿಸಿರುವುದಾಗಿ ಸಂಸದ ಡಾ.ಉಮೇಶ್‌ ಜಾಧವ್‌ ತಿಳಿಸಿದ್ದಾರೆ. ಗದಗ ಜಿಲ್ಲೆಯಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದ್ದು ಸರ್ಕಾರದ ಮಾರ್ಗಸೂಚಿ ಪ್ರಕಾರ ಅವರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಸಿ.ಸಿ.ಪಾಟೀವ್‌ ಮಾಹಿತಿ ನೀಡಿದ್ದಾರೆ.

ಇನ್ನು ಬಳ್ಳಾರಿ ಜಿಲ್ಲೆಯ ಹರಪನಹಳ್ಳಿಯಲ್ಲೂ ಕೋವಿಡ್‌ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಹಂತದಲ್ಲಿದ್ದ ವ್ಯಕ್ತಿಗೆ ಬ್ಲಾಕ್‌ ಫಂಗಸ್‌ ಕಾಣಿಸಿಕೊಂಡ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಭಾನುವಾರ ಹುಬ್ಬಳ್ಳಿಗೆ ಕಳುಹಿಸಿಕೊಡಲಾಗಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona