Ahmedabad Air India Crash:ಗುಜರಾತ್‌ನ ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡು, 242 ಪ್ರಯಾಣಿಕರು ಮತ್ತು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಪ್ರಯಾಣಿಸುತ್ತಿದ್ದರು.
ಬೆಂಗಳೂರು (ಜೂ.12): ಗುಜರಾತ್‌ನ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ನ ಗ್ಯಾಟ್ವಿಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ (AI-171) ಗುರುವಾರ ಮಧ್ಯಾಹ್ನ 1:30ರ ಸುಮಾರಿಗೆ ಟೇಕ್‌ಆಫ್ ಆದ ಕೆಲವೇ ನಿಮಿಷಗಳಲ್ಲಿ ತಾಂತ್ರಿಕ ದೋಷದಿಂದ ಮೇಘನಿ ನಗರದಲ್ಲಿ ಪತನಗೊಂಡಿದೆ. ಈ ದುರಂತದಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿದಂತೆ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ವಿಮಾನದಲ್ಲಿ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಪ್ರಯಾಣಿಸುತ್ತಿದ್ದರು ಎಂದು ದೃಢಪಟ್ಟಿದೆ.
ವಿಮಾನ ದುರಂತದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಕರ್ನಾಟಕದ ಗೃಹ ಸಚಿವ ಪರಮೇಶ್ವರ್, ಇವತ್ತು ಏರ್ ಇಂಡಿಯಾ ವಿಮಾನ ಅಹಮದಾಬಾದ್‌ನಿಂದ ಲಂಡನ್‌ಗೆ ತೆರಳುತ್ತಿದ್ದಾಗ ದುರಾದೃಷ್ಟವಶಾತ್ ಅಪಘಾತಕ್ಕೊಳಗಾಗಿದೆ. ಸದ್ಯಕ್ಕೆ ಬಂದಿರುವ ಮಾಹಿತಿಯಂತೆ, ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇದು ಬಹಳ ನೋವಿನ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಕೊಡಲಿ ಎಂದು ಸಂತಾಪ ಸೂಚಿಸಿದರು.
ಇಂಥ ಘಟನೆ ಎಲ್ಲಿಯೂ ಆಗಬಾರದು:
ಈ ವಿಮಾನದಲ್ಲಿ ಗುಜರಾತ್‌ನ ಮಾಜಿ ಸಿಎಂ ವಿಜಯ್ ರೂಪಾನಿ ಕೂಡ ಇದ್ದರು. ಆದರೆ, ಒಬ್ಬರೇ ಮುಖ್ಯವಲ್ಲ, ಎಲ್ಲರೂ ಮುಖ್ಯ. ಇಂತಹ ಘಟನೆ ಎಲ್ಲಿಯೂ ಆಗಬಾರದು. ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ, ಈ ದುರಂತಕ್ಕೆ ಕಾರಣವೇನು, ಟೇಕ್‌ಆಫ್ ಆದ ಕೂಡಲೇ ಯಾವ ತಾಂತ್ರಿಕ ದೋಷ ಸಂಭವಿಸಿತು ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.
ವಿಮಾನವು ಬೋಯಿಂಗ್ 787-8 ಡ್ರೀಮ್‌ಲೈನರ್ ಆಗಿದ್ದು, 230 ಪ್ರಯಾಣಿಕರು ಮತ್ತು 12 ಸಿಬ್ಬಂದಿಯೊಂದಿಗೆ 242 ಮಂದಿ ಇದ್ದರು. ಈ ದುರಂತಕ್ಕೆ ತಾಂತ್ರಿಕ ದೋಷ ಕಾರಣ ಎಂದು ಪ್ರಾಥಮಿಕವಾಗಿ ತಿಳಿದುಬಂದಿದ್ದು, ವಿಮಾನವು ಟೇಕ್‌ಆಫ್ ಆದ ಕೆಲವೇ ಸೆಕೆಂಡ್‌ಗಳಲ್ಲಿ 625-835 ಅಡಿ ಎತ್ತರದಿಂದ ವಸತಿ ಪ್ರದೇಶದ ಮೇಲೆ ಬಿದ್ದಿದೆ. ವಿಮಾನವು ಸಿವಿಲ್ ಆಸ್ಪತ್ರೆಯ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಕಟ್ಟಡಕ್ಕೆ ಡಿಕ್ಕಿ ಹೊಡೆದಿದ್ದು, 20 ವೈದ್ಯಕೀಯ ವಿದ್ಯಾರ್ಥಿಗಳು ಸೇರಿದಂತೆ ಹಲವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ಮುಖ್ಯಮಂತ್ರಿ, ಗೃಹ ಸಚಿವರು ಮತ್ತು ಡಿಜಿಪಿಯೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರದಿಂದ ಸಂಪೂರ್ಣ ನೆರವು ನೀಡುವ ಭರವಸೆ ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ಈ ದುರಂತಕ್ಕೆ ಸಂತಾಪ ಸೂಚಿಸಿದ್ದಾರೆ.
