ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಸಚಿವ ರಾಜಣ್ಣಗೆ ಖರ್ಗೆ ಸೂಚನೆ ನೀಡಿದ್ದಾರೆ. ಡಿ.ಕೆ.ಶಿವಕುಮಾರ್ ವಿರುದ್ಧ ಹೇಳಿಕೆ ನೀಡಿದ್ದ ರಾಜಣ್ಣಗೆ ಖರ್ಗೆ ಬುದ್ಧಿವಾದ ಹೇಳಿದ್ದಾರೆ ಎನ್ನಲಾಗಿದೆ.

ಬೆಂಗಳೂರು (ಫೆ.21) : ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ಅನಗತ್ಯವಾಗಿ ಹೇಳಿಕೆ ನೀಡದಂತೆ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Add Asianetnews Kannada as a Preferred SourcegooglePreferred

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ಪ್ರಸ್ತಾಪ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ವಿರುದ್ಧ ಬಹಿರಂಗ ಹೇಳಿಕೆಗಳನ್ನು ನೀಡುತ್ತಿರುವ ಬಗ್ಗೆ ರಾಜಣ್ಣ ಅವರಿಗೆ ಖರ್ಗೆ ಎಚ್ಚರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: 'ಎಚ್ಚರಿಕೆ ಗಿಚ್ಚರಿಕೆ ಎಲ್ಲಾ ನಡೆಯೋಲ್ಲ, ಯಾರು ಕೇಳ್ತಾರೆ ಇವೆಲ್ಲ? ಡಿಕೆ ಶಿವಕುಮಾರ ಹೇಳಿಕೆಗೆ ರಾಜಣ್ಣ ತಿರುಗೇಟು!

ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಬಗ್ಗೆ ಮಾತನಾಡುತ್ತಿದ್ದ ರಾಜಣ್ಣ ಇತ್ತೀಚೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಬಹಿರಂಗವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದರು. ಅಲ್ಲದೆ ಸಿದ್ದರಾಮಯ್ಯ ಹೆಸರು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂಬ ಡಿ.ಕೆ.ಶಿವಕುಮಾರ್ ಸಲಹೆಗೆ ಪ್ರತಿಕ್ರಿಯೆಯಾಗಿ, ‘ಡಿ.ಕೆ.ಶಿವಕುಮಾರ್‌ ಅವರೇ ಎಐಸಿಸಿ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಮೊದಲು ಅದನ್ನು ನಿಲ್ಲಿಸಲಿ. ಅವರ ಎಚ್ಚರಿಕೆ ಗಿಚ್ಚರಿಕೆ ಎಲ್ಲ ನಡೆಯಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷರ ವಿರುದ್ಧವೇ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಜಣ್ಣ ಅವರಿಗೆ ಖುದ್ದು ಖರ್ಗೆ ಅವರೇ ಬುದ್ಧಿವಾದ ಹೇಳಿದ್ದಾರೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು‌. ಸೂಕ್ತ ಸಮಯದಲ್ಲಿ ನಾನು ಏನು ಮಾಡಬೇಕೋ ಮಾಡುತ್ತೇನೆ. ಅನಗತ್ಯವಾಗಿ ಈ ವಿಚಾರದಲ್ಲಿ ಗೊಂದಲ ಸೃಷ್ಟಿ ಮಾಡಬೇಡಿ. ಯಾವುದೇ ಕಾರಣಕ್ಕೂ ಬಹಿರಂಗ ಹೇಳಿಕೆ ನೀಡಬೇಡಿ ಎಂದು ತಿಳಿಸಿದ್ದಾಗಿ ಹೇಳಲಾಗಿದೆ. 

ಇದನ್ನೂ ಓದಿ: ದಿನಬೆಳಗಾದ್ರೆ ಸಿದ್ದರಾಮಯ್ಯರ ಹೆಸರು ದುರ್ಬಳಕೆ ನಿಲ್ಲಿಸಿ: ಚುನಾವಣೆಗೆ ಬೇಕೇ ಬೇಕು ಎಂದು ಜಾರಕಿಹೊಳಿಗೆ ಡಿಕೆಶಿ ಪರೋಕ್ಷ ತಿರುಗೇಟು