ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಅವರು ಕೆಆರ್‌ಐಡಿಎಲ್ ಮಂಗಳೂರು ವಿಭಾಗದ ಇಂಜಿನಿಯರ್‌ಗಳ ವಿರುದ್ಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಸಚಿವರ ಹೆಸರಿನಲ್ಲಿ ಗುತ್ತಿಗೆದಾರರಿಂದ ಶೇ.7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ, ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ.
ಮಂಗಳೂರು: ಕೆಆರ್‌ಐಡಿಎಲ್ (ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ)ನ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ ಗಳ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿವೆ. ಸರ್ಕಾರಿ ಕಾಮಗಾರಿಗಳನ್ನು ನಿರ್ವಹಿಸುವ ಗುತ್ತಿಗೆದಾರರಿಂದ ಶೇ.7ರಷ್ಟು ಕಮಿಷನ್ ಗೆ ಬೇಡಿಕೆ ಇಡಲಾಗುತ್ತಿದೆ. ಈ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ (Congress MLA Ashok Kumar Rai) ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಕೆಆರ್‌ಐಡಿಎಲ್ ಚಾರ್ಜ್ ಹೆಸರಿನಲ್ಲಿ ಶೇ.7ರವರೆಗೆ ಹೆಚ್ಚುವರಿ ಹಣ
ಮಂಗಳೂರು ಕೆಆರ್‌ಐಡಿಎಲ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಯ ನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್ ಅವರ ಕರ್ತವ್ಯ ನಿರ್ವಹಣೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗಂಭೀರ ಆರೋಪಗಳಿವೆ. ಕಾಮಗಾರಿಗಳನ್ನು ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ವಿವಿಧ ರೀತಿಯಲ್ಲಿ ಕಿರುಕುಳ ನೀಡಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇಲಾಖೆಯ ಸಚಿವರಿಗೆ ಮಾಸಿಕವಾಗಿ ಹಣ ಸಂದಾಯ ಮಾಡಬೇಕಾಗುತ್ತದೆ ಎಂದು ಹೇಳಿ, ಕೆಆರ್‌ಐಡಿಎಲ್ ಚಾರ್ಜ್ ಹೆಸರಿನಲ್ಲಿ ಶೇ.7ರವರೆಗೆ ಹೆಚ್ಚುವರಿ ಹಣವನ್ನು ಪಡೆಯಲಾಗುತ್ತಿದೆ. ಈ ಬಗ್ಗೆ ಪ್ರಶ್ನಿಸಿದ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡಲಾಗಿದೆ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ.
ಅಧಿಕಾರಿಗಳ ವಿರುದ್ಧ ಈಗಾಗಲೇ ಬಂದಿರುವ ದೂರುಗಳು ಮತ್ತು ಆರೋಪಗಳ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ಇಲಾಖಾ ತನಿಖೆ ನಡೆಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಆರೋಪಗಳ ಗಂಭೀರತೆಯನ್ನು ಪರಿಗಣಿಸಿ, ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಅಥವಾ ಆಡಳಿತಾತ್ಮಕ ಹಿತದೃಷ್ಟಿಯಿಂದ ಬೇರೆಡೆಗೆ ವರ್ಗಾವಣೆ ಮಾಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ರೈ ಪತ್ರದಲ್ಲಿ ವಿನಂತಿಸಿಕೊಂಡಿದ್ದಾರೆ.
ಇದಕ್ಕೆ ಏನಂತೀರಿ ಸಿಎಂ ಡಿಕೆ ಅವರೇ?
ವಿಪಕ್ಷಗಳು ಆರೋಪ ಮಾಡಿದರೆ ರಾಜಕೀಯ ಎನ್ನುತ್ತಿದ್ದೀರಲ್ಲ, ಈಗ ಕೆಆರ್‌ಐಡಿಎಲ್ ಎಂಜಿನಿಯರ್‌ಗಳು ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರ ಹೆಸರಿನಲ್ಲಿ ಶೇ.7ವರೆಗೆ ಶುಲ್ಕ ವಸೂಲಿ ಮಾಡುತ್ತಿದ್ದಾರೆ ಎಂದು ನಿಮ್ಮ ಶಾಸಕರೇ ನಿಮಗೆ ಲಿಖಿತ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ, ಇದಕ್ಕೇನು ಉತ್ತರ ನೀಡುತ್ತೀರಿ? ಎಂದು ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ ಮಾಡಿದ್ದಾರೆ.


