ಬೆಂಗಳೂರು(ಅ.11): ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಸೋಂಕು ಪ್ರಕರಣಗಳಿಂದಾಗಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಪಾಲಿಗೆ ಕಂಟಕಪ್ರಾಯವೆನಿಸಿದ ‘ವಿದ್ಯಾಗಮ’ ಯೋಜನೆ ಸ್ಥಗಿತಗೊಳಿಸಬೇಕು ಎಂದು ರಾಜ್ಯಾದ್ಯಂತ ಶಿಕ್ಷಕ ಸಮುದಾಯ, ರಾಜಕೀಯ ಪಕ್ಷಗಳು, ಸಾರ್ವಜನಿಕರ ತೀವ್ರ ಒತ್ತಡಕ್ಕೆ ಕಡೆಗೂ ಮಣಿದಿರುವ ರಾಜ್ಯ ಸರ್ಕಾರ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಯೋಜನೆಯನ್ನು ಕೂಡಲೇ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ತಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ಅವರಿಗೆ ಸೂಚನೆ ನೀಡಿದ್ದಾರೆ. ಯೋಜನೆ ಸ್ಥಗಿತಕ್ಕೆ ಇಲಾಖೆಯ ಅಧಿಕೃತ ಆದೇಶವಷ್ಟೇ ಬಾಕಿ ಇದ್ದು, ಸೋಮವಾರ ಹೊರಬೀಳುವ ಸಾಧ್ಯತೆ ಇದೆ.

ಕಲಬುರಗಿ, ಬೆಳಗಾವಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ವಿದ್ಯಾಗಮ ಕಲಿಕಾ ಕಾರ್ಯಕ್ರಮದಲ್ಲಿ ತೊಡಗಿದ್ದ ಕೆಲ ಶಿಕ್ಷಕರು, ವಿವಿಧ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದ ಬಗ್ಗೆ ಶುಕ್ರವಾರ ‘ಕನ್ನಡಪ್ರಭ’ ಮುಖಪುಟದಲ್ಲಿ ವರದಿ ಪ್ರಕಟಿಸಿತ್ತು. ಅನಂತರ ಸತತವಾಗಿ ಈ ಬಗ್ಗೆ ವರದಿಗಳನ್ನು ಪ್ರಕಟಿಸಿತ್ತು. ಯೋಜನೆಯಿಂದ ಜೀವ ಕಳೆದುಕೊಂಡವರು, ಅವರ ಕುಟುಂಬದವರು ಅಭಿಪ್ರಾಯ ಸೇರಿದಂತೆ ರಾಜ್ಯದಲ್ಲಿ ಯಾವ್ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟುಮಕ್ಕಳು, ಶಿಕ್ಷಕರಿಗೆ ಸೋಂಕು ತಗುಲಿದೆ. ಎಷ್ಟುಶಿಕ್ಷಕರು, ಮಕ್ಕಳು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂಬ ಬಗ್ಗೆಯೂ ಆಯಾ ಜಿಲ್ಲಾಡಳಿತ, ಜಿಲ್ಲಾ ಉಪನಿರ್ದೇಶಕರ ಮೂಲಕ ಮಾಹಿತಿ ಕಲೆಹಾಕಿ ವಿಸ್ತೃತ ವರದಿ ಮಾಡಿತ್ತು. ಜನಾಂದೋಲದನದ ವೇಳೆ ರಾಜ್ಯಾದ್ಯಂತ ಶಿಕ್ಷಕರು, ಪೋಷಕರು, ಮಕ್ಕಳ ವಲಯದಲ್ಲಿ ವಿದ್ಯಾಗಮದ ಬಗ್ಗೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಕೂಡಲೇ ಕಾರ್ಯಕ್ರಮ ಸ್ಥಗಿತಗೊಳಿಸುವಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಗ್ರಹ ಕೇಳಿಬಂದಿತ್ತು.

ಯೋಜನೆ ಸ್ಥಗಿತಕ್ಕೆ ಸಚಿವರ ಸೂಚನೆ:

ಅಲ್ಲದೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಸಹ ವಿದ್ಯಾಗಮ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಈ ಒತ್ತಡಕ್ಕೆ ಕಡೆಗೂ ಮಣಿದ ಸಚಿವ ಸುರೇಶ್‌ ಕುಮಾರ್‌ ಯೋಜನೆ ಸ್ಥಗಿತಗೊಳಿಸುವಂತೆ ತಮ್ಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ಅವರಿಗೆ ಸೂಚಿಸಿದ್ದಾರೆ.

ಈ ಸಂಬಂಧ ಶನಿವಾರ ಫೇಸ್‌ಬುಕ್‌ನಲ್ಲಿ ಮಾಹಿತಿ ನೀಡಿರುವ ಅವರು, ‘ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ. ವಿದ್ಯಾಗಮ ಸಮಾಜದ ಕೆಳಸ್ತರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ. ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ ಹಾಗೂ ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೂ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ಅವರಿಗೆ ನಿರ್ದೇಶನ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.

ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹೇಳಿದ್ದೇನು?

ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿರುವುದನ್ನು ಗಮನಿಸಿದ್ದೇನೆ. ವಿದ್ಯಾಗಮ ಸಮಾಜದ ಕೆಳಸ್ತರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ. ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ಈ ಕುರಿತು ಸಂಗ್ರಹಿಸಲು ಉದ್ದೇಶಿಸಿರುವ ಜಿಲ್ಲಾವಾರು ಅಂಕಿ ಅಂಶಗಳ ಸ್ವೀಕಾರ ಹಾಗೂ ಅದರ ಸಮರ್ಪಕ ವಿಶ್ಲೇಷಣೆ ಪೂರ್ಣಗೊಳ್ಳುವವರೆಗೂ ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್‌ ಅವರಿಗೆ ನಿರ್ದೇಶನ ನೀಡಲಾಗಿದೆ.

ಯಡಿ​ಯೂ​ರಪ್ಪ ಬದ್ಧತೆ ಪ್ರದರ್ಶ​ನ

ವ್ಯಾಪಕ ಟೀಕೆಗೊಳಗಾದ ಬಳಿಕ ವಿದ್ಯಾಗಮ ಯೋಜನೆಯನ್ನು ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದು ಅಭಿನಂದನಾರ್ಹ. ಕೊರೋನಾ ಸೋಂಕಿನ ಗಾಂಭೀರ್ಯತೆಯನ್ನು ಅರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿಕ್ಷಕರ, ಮಕ್ಕಳ, ಪೋಷಕರ ಬಗ್ಗೆ ಬದ್ಧತೆ ಪ್ರದರ್ಶಿಸಿದ್ದಾರೆ.

- ಎಚ್‌.​ಡಿ. ಕುಮಾ​ರ​ಸ್ವಾಮಿ, ಮಾಜಿ ಮುಖ್ಯ​ಮಂತ್ರಿ