Asianet Suvarna News Asianet Suvarna News

ಯಡಿಯೂರಪ್ಪ ಆಡಳಿತಕ್ಕೆ ಅಮಿತ್ ಶಾ ಶಹಬ್ಬಾಸ್‌ಗಿರಿ!

ಯಡಿಯೂರಪ್ಪ ಆಡಳಿತ ಹಾಡಿ ಹೊಗಳಿದ ಅಮಿತ್‌ ಶಾ| ಬಿಜೆಪಿ ಸರ್ಕಾರ ಉತ್ತಮವಾಗಿ ಅಭಿವೃದ್ಧಿ ಕೆಲಸ ಮಾಡಿದೆ| ಸರ್ಕಾರ ಅವಧಿ ಪೂರೈಸಲಿದೆ, ಮತ್ತೆ ಅಧಿಕಾರಕ್ಕೆ ಬರಲಿದೆ

Amit Shah Praises CM BS Yediyurappa  Administration Work pod
Author
Bangalore, First Published Jan 17, 2021, 7:22 AM IST

ಬೆಂಗಳೂರು(ಜ.17): ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರ್ಕಾರ ಕರ್ನಾಟಕದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಅವರು ಮುಕ್ತಕಂಠದಿಂದ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

"

ಯಡಿಯೂರಪ್ಪ ನೇತೃತ್ವದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗಿದೆ. ರಾಜ್ಯದ ಬಿಜೆಪಿ ಸರ್ಕಾರ ತನ್ನ ಅವಧಿ ಪೂರ್ಣಗೊಳಿಸಲಿದೆ. ಮುಂದೆಯೂ ಮತ್ತೊಮ್ಮೆ ಬಿಜೆಪಿ ಸರ್ಕಾರವೇ ಅಸ್ತಿತ್ವಕ್ಕೆ ಬರಲಿದೆ ಎಂದೂ ಅವರು ಸ್ಪಷ್ಟಮಾತುಗಳಲ್ಲಿ ಹೇಳಿದ್ದಾರೆ.

ಶನಿವಾರ ಸಂಜೆ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ನಡೆದ ಪೊಲೀಸ್‌ ಗೃಹ ಯೋಜನೆ- 2020ರಡಿ ನಿರ್ಮಿಸಿರುವ ಪೊಲೀಸ್‌ ವಸತಿ ಗೃಹ, ಪೊಲೀಸ್‌ ಗೃಹ ಯೋಜನೆ- 2025ರಡಿ 10 ಸಾವಿರಕ್ಕೂ ಹೆಚ್ಚು ವಸತಿ ಗೃಹ ನಿರ್ಮಾಣ ಕಾರ್ಯಕ್ಕೆ ಚಾಲನೆ ಮತ್ತು ವಿಜಯಪುರದಲ್ಲಿನ ಇಂಡಿಯನ್‌ ರಿಸವ್‌ರ್‍ ಬೆಟಾಲಿಯನ್‌ನ ಆಡಳಿತ ಕೇಂದ್ರ ಕಚೇರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್‌ ನಿಯಂತ್ರಣಕ್ಕೆ ಸಂಬಂಧಿಸಿದಂತೆ ನನ್ನ ಗೃಹ ಇಲಾಖೆ ದೇಶಾದ್ಯಂತ ಸಮನ್ವಯದ ಜವಾಬ್ದಾರಿ ಹೊತ್ತಿತ್ತು. ಈ ಹಿನ್ನೆಲೆಯಲ್ಲಿ ನಾನು ಅನೇಕ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸತತ ಸಂವಾದ, ಸಮಾಲೋಚನೆ ನಡೆಸಿದ್ದೇನೆ. ಪರಾಮರ್ಶೆಯನ್ನೂ ಮಾಡಿದ್ದೇನೆ. ಕರ್ನಾಟಕದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಕೋವಿಡ್‌ ನಿಯಂತ್ರಿಸಲು ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿದೆ. ಇದನ್ನು ಹೇಳುವುದಕ್ಕೆ ನನಗೆ ಯಾವುದೇ ಹಿಂಜರಿಕೆ ಇಲ್ಲ ಎಂದು ತಿಳಿಸಿದರು.

ಬಿಜೆಪಿ ಸರ್ಕಾರ ಪತವಾಗಲಿದೆ ಎಂದು ಕಾಂಗ್ರೆಸ್ಸಿಗರು ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಬಿಜೆಪಿ ಸರ್ಕಾರವು ಸುಭದ್ರವಾಗಿದೆ. ಮುಂದಿನ ಎರಡೂವರೆ ವರ್ಷಗಳ ಕಾಲ ಬಿಜೆಪಿ ಸರ್ಕಾರ ಆಡಳಿತ ನಡೆಸಲಿದೆ. ಮಾತ್ರವಲ್ಲ, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿಯೂ ಬಿಜೆಪಿ ಬಹುಮತದೊಂದಿಗೆ ಜಯಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ. ಜನರ ಮಧ್ಯೆ ಇದ್ದು ಆಡಳಿತ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ರಾಜ್ಯಕ್ಕೆ ಅಗತ್ಯ ಇರುವ ನೆರವು ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಬದ್ಧವಾಗಿದೆ. ಪೊಲೀಸರ ಕಾರ್ಯಕ್ಷಮತೆ ಹೆಚ್ಚಿಸಲು ಈಗಾಗಲೇ ಹಲವು ಸವಲತ್ತುಗಳನ್ನು ರಾಜ್ಯ ಸರ್ಕಾರವು ನೀಡಿದೆ. ಮುಂದಿನ ದಿನದಲ್ಲಿ ಮತ್ತಷ್ಟುಸೌಕರ್ಯಗಳನ್ನು ನೀಡಲಿದೆ. ಪೊಲೀಸ್‌ ಇಲಾಖೆಯನ್ನು ಆಧುನೀಕರಣಗೊಳಿಸಿ ಕಾಲಕ್ಕೆ ತಕ್ಕಂತೆ ತಂತ್ರಜ್ಞಾನಗಳ ಮೂಲಕ ಬಲಿಷ್ಠಗೊಳಿಸಲಿದೆ. ಕೃಷಿ, ಶಿಕ್ಷಣ ಸೇರಿದಂತೆ ಪ್ರತಿ ರಂಗದಲ್ಲಿಯೂ ಬದಲಾವಣೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಮೂಲಸೌಕರ್ಯಗಳನ್ನು ಕಲ್ಪಿಸಲು ಕೇಂದ್ರ ಸರ್ಕಾರವು ಸಹ ರಾಜ್ಯ ಸರ್ಕಾರದ ಜತೆ ಕೈ ಜೋಡಿಸಲಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮಾತನಾಡಿ, ಅತ್ಯಾಧುನಿಕತೆ ಬೆಳೆದಂತೆ ತಂತ್ರಜ್ಞಾನಗಳು ಸಹ ಅಭಿವೃದ್ಧಿಯಾಗಿದ್ದು, ಅಪರಾಧ ಸ್ವರೂಪಗಳು ಸಹ ಬದಲಾಗಿವೆ. ಇವುಗಳನ್ನು ಸಮರ್ಥವಾಗಿ ಎದುರಿಸಲು ಪೊಲೀಸ್‌ ಇಲಾಖೆ ದಕ್ಷವಾಗಿದೆ. ಪೊಲೀಸ್‌ ಇಲಾಖೆಗೆ ಬೇಕಾಗುವ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಸಿದ್ಧವಿದೆ. ಜನರ ರಕ್ಷಣೆಗಾಗಿ ಹಾಗೂ ಕಾನೂನು, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್‌ ಇಲಾಖೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಪೊಲೀಸ್‌ ಸಿಬ್ಬಂದಿಯ ಕುಟುಂಬದವರ ಆರೋಗ್ಯ ಕಾಪಾಡಲು ಆರೋಗ್ಯಭಾಗ್ಯ ಯೋಜನೆ ಜಾರಿಯಲ್ಲಿದೆ. ಪೊಲೀಸ್‌ ಕುಟುಂಬಗಳಿಗೂ ಉತ್ತಮ ಸೌಲಭ್ಯ ಕಲ್ಪಿಸಲು ಸಹ ಸರ್ಕಾರ ಬದ್ಧವಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಸಚಿವ ಡಿ.ವಿ.ಸದಾನಂದಗೌಡ, ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಸಿ.ಎನ್‌.ಅಶ್ವತ್ಥ ನಾರಾಯಣ, ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಇತರರು ಉಪಸ್ಥಿತರಿದ್ದರು.

Follow Us:
Download App:
  • android
  • ios