ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವುಗಳ ಸರಣಿ ಮುಂದುವರೆದಿದ್ದು, ಇತ್ತೀಚೆಗೆ ಸಂಪತ್ ಕುಮಾರ್ (53) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಳೆದ 42 ದಿನಗಳಲ್ಲಿ 28 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದು, ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಹಾಸನ (ಜು.2): ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವುಗಳ ಸರಣಿ ಆತಂಕಕ್ಕೆ ಕಾರಣವಾಗಿದೆ. ಕಳೆದ ತಿಂಗಳಿಂದ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇದೀಗ ಕರಿಗೌಡ ಕಾಲೋನಿಯ ನಿವಾಸಿ ಸಂಪತ್ ಕುಮಾರ್ (53) ಎಂಬಾತ ನಿನ್ನೆ ಎದೆನೋವಿನಿಂದ ಬಳಲುತ್ತಿದ್ದ ಕಾರಣ ಮನೆಯವರು ತಕ್ಷಣವೇ ಹಾಸನದ ಹಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

Add Asianetnews Kannada as a Preferred SourcegooglePreferred

ಕಳೆದ 42 ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಈ ಘಟನೆಗಳು ಆರೋಗ್ಯ ಇಲಾಖೆಯ ಗಮನಕ್ಕೆ ಬಂದಿದ್ದು, ಹೃದಯಾಘಾತದ ಕಾರಣಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಸ್ಥಳೀಯರು ಒತ್ತಡ, ಜೀವನಶೈಲಿ, ಮತ್ತು ಆರೋಗ್ಯ ಸೌಲಭ್ಯಗಳ ಕೊರತೆಯನ್ನು ಈ ಸಾವುಗಳಿಗೆ ಕಾರಣವೆಂದು ಆರೋಪಿಸುತ್ತಿದ್ದಾರೆ. ಆಸ್ಪತ್ರೆಯ ವೈದ್ಯರು, ಸಂಪತ್ ಕುಮಾರ್ ಅವರಿಗೆ ತಕ್ಷಣದ ಚಿಕಿತ್ಸೆ ನೀಡಿದರೂ ಉಳಿಸಲಾಗಲಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Hassan Heart Attack Deaths: ಹೃದಯಾಘಾತ ಸರಣಿ ಸಾವು: ಒಂದೂವರೆ ತಿಂಗಳ ಬಾಣಂತಿ ಹಾರ್ಟ್​ ಅಟ್ಯಾಕ್​​ಗೆ ಬಲಿ

ಈ ಘಟನೆಯಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಧ್ಯತೆಯಿದೆ. ಹೃದಯಾಘಾತದ ಲಕ್ಷಣಗಳ ಬಗ್ಗೆ ಜನರಿಗೆ ತಿಳಿವಳಿಕೆ ನೀಡುವ ಅಗತ್ಯವನ್ನು ಸ್ಥಳೀಯರು ಒತ್ತಾಯಿಸಿದ್ದಾರೆ.