ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂ*ಗಿಕ ದೌರ್ಜನ್ಯ ಪ್ರಕರಣದಲ್ಲಿ, 2ನೇ ಆರೋಪಿ ಶಿವಕುಮಾರ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈ ಮೂಲಕ ಪ್ರಕರಣವು ಹೊಸ ತಿರುವು ಪಡೆದುಕೊಂಡಿದೆ.

ಬೆಂಗಳೂರು: ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂ*ಗಿಕ ದೌರ್ಜನ್ಯ ಆರೋಪದ ಪ್ರಕರಣದ ಎರಡನೇ ಆರೋಪಿಯಾಗಿರುವ ಶಿವಕುಮಾರ್ ತನ್ನನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಕೋರಿ ಸಲ್ಲಿಸಿದ ಅರ್ಜಿಯನ್ನು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಜಾಗೊಳಿಸಿದೆ.

ಪ್ರಕರಣದ ಹಿನ್ನೆಲೆ ಏನು?

ಜೆಡಿಎಸ್ ಕಾರ್ಯಕರ್ತರೊಬ್ಬರು ಸೂರಜ್‌ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಈ ಸಂಬಂಧ 2024ರ ಜೂ.22ರಂದು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಸೂರಜ್ ಮತ್ತು ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಪೊಲೀಸರು ಜೂ.23ರಂದು ಸೂರಜ್‌ರನ್ನು ಬಂಧಿಸಿ ಜೈಲಿಗಟ್ಟಿದ್ದರು. ಕೆಲ ತಿಂಗಳ ಬಳಿಕ ಸೂರಜ್‌ಗೆ ಜಾಮೀನು ಸಿಕ್ಕಿತ್ತು.

ಮತ್ತೊಂದೆಡೆ ಸೂರಜ್‌ರ ಆಪ್ತ ಶಿವಕುಮಾರ್ ಅವರು ಸಂತ್ರಸ್ತನ ವಿರುದ್ಧವೇ ಪ್ರತಿ ದೂರು ನೀಡಿದ್ದರು. ದೂರುದಾರ ಐದು ಕೋಟಿ ರು. ಹಣಕ್ಕೆ ಬ್ಲ್ಯಾಕ್ ಮೇಲ್ ಮಾಡಿದ್ದರು. ಹಣ ನೀಡದಿದ್ದಕ್ಕೆ ಸೂರಜ್ ವಿರುದ್ಧ ಅಸಹಜ ಲೈಂ*ಗಿಕ ದೌರ್ಜನ್ಯದ ಸುಳ್ಳು ಆರೋಪ ಮಾಡಿದ್ದಾರೆ ಎಂದು ಪ್ರತಿ ದೂರಿನಲ್ಲಿ ಆರೋಪಿಸಿದ್ದರು. ಪ್ರಕರಣದ ಗಂಭೀರತೆ ಅರಿತ ರಾಜ್ಯ ಸರ್ಕಾರವು ತನಿಖೆಗೆ ವಿಶೇಷ ತನಿಖಾ ತಂಡ(ಎಸ್ಐಟಿ) ರಚಿಸಿತ್ತು. ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ ನ್ಯಾಯಾಲಯಕ್ಕೆ ‘ಬಿ’ ರಿಪೋರ್ಟ್ ಸಲ್ಲಿಸಿತ್ತು.

ಈ ‘ಬಿ’ ರಿಪೋರ್ಟ್ ತಿರಸ್ಕರಿಸಿದ್ದ ಕೋರ್ಟ್‌, ನ್ಯಾಯಾಲಯವು, ಮರು ತನಿಖೆಗೆ ಆದೇಶಿಸಿತ್ತು. ಈ ನಡುವೆ ಸೂರಜ್ ಈ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು.

ಇದನ್ನೂ ಓದಿ: Bengaluru: ಮತ್ತೊಂದು ಟೋಲ್ ಶುಲ್ಕದ 18.50 km ಉದ್ದದ ಫ್ಲೈಓವರ್: ಕನಕಪುರ ರಸ್ತೆಗೆ ಪರ್ಯಾಯ ಮಾರ್ಗ

ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯ

ತನ್ನನ್ನು ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಶಿವಕುಮಾರ್‌ ಅರ್ಜಿ ಸಲ್ಲಿಸಿದರು. ಬಳಿಕ ನ್ಯಾಯಾಲಯವು ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಸೂರಜ್‌ ರೇವಣ್ಣ ಪರ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಮೇ 16 ಕ್ಕೆ ಮುಂದೂಡಿತು. ಮಂಗಳವಾರ ಈ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ಇದನ್ನೂ ಓದಿ: ಔಟರ್ ರಿಂಗ್ ರಸ್ತೆಯ 17 ಕಿ.ಮೀ ಮಾರ್ಗದ ವೈಟ್‌ ಟಾಪಿಂಗ್ ಕಾಮಗಾರಿ ಈಗ ಬೇಡ ಎಂದ ORRCA