ಬೆಂಗಳೂರು(ಸೆ.21): ಕೊರೋನಾ ನಡುವೆಯೂ ತಮ್ಮ ವಿವಿಧ ಬೇಡಿಕೆಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ಧೋರಣೆ ತೋರಿರುವ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಸೆ.23ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಬೃಹತ್‌ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.

ಪ್ರತಿಭಟನೆ ಹಿಂಪಡೆದು ಒಂದೂವರೆ ತಿಂಗಳು ಕಳೆದರೂ ಸರ್ಕಾರದ ಕಡೆಯಿಂದ ಯಾವ ಅಧಿಕೃತ ಘೋಷಣೆಯೂ ಬಾರದ ಕಾರಣ ಪುನಃ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ. ಸೆ.21, 22ರಂದು ಎರಡು ದಿನಗಳ ಕಾಲ ರಾಜ್ಯದ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಬಳಿಕ ಸೆ.23ರಂದು ಬೃಹತ್‌ ಮಟ್ಟದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ತಿಳಿಸಿದೆ.

ಸಿಡಿದೆದ್ದ 'ಆಶಾ'; ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ

ಕಳೆದ ಜುಲೈನಲ್ಲಿ ಮಾಸಿಕ 12 ಸಾವಿರ ಗೌರವ ಧನ, ಕಾರ್ಯಕರ್ತೆಯರಿಗೆ ಆರೋಗ್ಯ ರಕ್ಷಣಾ ಪರಿಕರಗಳನ್ನು ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 20 ದಿನಗಳ ಮುಷ್ಕರ ನಡೆಸಿದ್ದರು. ಅಂತಿಮವಾಗಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಬೇಡಿಕೆಗಳನ್ನು ಪೂರ್ಣಗೊಳಿಸುವ ಭರವಸೆ ನೀಡಿದ ಬಳಿಕ ಮುಷ್ಕರ ಸ್ಥಗಿತಗೊಳಿಸಲಾಗಿತ್ತು ಎಂದು ಸಂಘದ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಹೇಳಿದರು.