ಹಲವು ಜಿಲ್ಲೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಹೆಚ್ಚುತ್ತಿರುವ ಮದ್ಯದಂಗಡಿಗಳ ಬಗ್ಗೆ ಮಹಿಳೆಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ, ರಾಜ್ಯ ಮಹಿಳಾ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ. ರಾಜ್ಯದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸುವಂತೆ ಆಯೋಗವು ಮನವಿ ಮಾಡಿದೆ.

ಬೆಂಗಳೂರು (ಡಿ.17): ಅಕ್ರಮ ಮದ್ಯ ಮಾರಾಟ ಮತ್ತು ಹೆಚ್ಚುತ್ತಿರುವ ಮದ್ಯದಂಗಡಿಗಳ ಬಗ್ಗೆ ಹಲವು ಜಿಲ್ಲೆಗಳಿಂದ ದೂರು ಸಲ್ಲಿಕೆ ಆಗಿರುವುದರಿಂದ ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಬೇಕು ಎಂದು ರಾಜ್ಯ ಮಹಿಳಾ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ.

ಈ ಬಗ್ಗೆ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಪತ್ರ ಬರೆದಿದ್ದು, ಕಲಬುರಗಿ, ಶಿವಮೊಗ್ಗ, ಬೀದರ್‌, ತುಮಕೂರು ಮತ್ತು ಹಾಸನ ಜಿಲ್ಲೆಗಳಿಗೆ ನಾನು ಭೇಟಿ ನೀಡಿದ್ದಾಗ ಅಕ್ರಮ ಮದ್ಯ ಮಾರಾಟ ಮತ್ತು ಹೆಚ್ಚುತ್ತಿರುವ ಮದ್ಯದಂಗಡಿಗಳ ಬಗ್ಗೆ ಮಹಿಳೆಯರು ಅಹವಾಲುಗಳನ್ನು ಸಲ್ಲಿಸಿದ್ದಾರೆ. ಆದ್ದರಿಂದ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಅಕ್ರಮ ಮದ್ಯ ಮಾರಾಟ ತಡೆಗಟ್ಟಬೇಕು. ಶಾಲೆ-ಕಾಲೇಜು, ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣ, ಸರ್ಕಾರಿ ಕಚೇರಿ ಹಾಗೂ ಆಸ್ಪತ್ರೆಗಳ ಸಮೀಪ ಹೊಸದಾಗಿ ಮದ್ಯದ ಅಂಗಡಿಗಳನ್ನು ತೆರೆಯಲು ಪರವಾನಗಿ ನೀಡಬಾರದು. ಮದ್ಯ ಮಾರಾಟದಿಂದ ಮಹಿಳೆಯರು ಮತ್ತು ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮಗಳನ್ನು ಗಮನದಲ್ಲಿ ಇಟ್ಟುಕೊಂಡು ರಾಜ್ಯದಲ್ಲಿ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲು ಚಿಂತನೆ ನಡೆಸಬೇಕು ಎಂದು ಕೋರಿದ್ದಾರೆ.