ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಬಿಬಿಎಂಪಿ ಒತ್ತು ನೀಡಿದೆ. ಪಿಓಪಿ ಗಣೇಶ ಮೂರ್ತಿಗಳನ್ನು ನಿಷೇಧಿಸಲಾಗಿದ್ದು, ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ವಿಸರ್ಜನೆಗೆ ಕಲ್ಯಾಣಿಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು (ಆ.05): ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗೌರಿ-ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಗೌರಿ-ಗಣೇಶ ಹಬ್ಬ ಆಚರಿಸಲು ನಾಗರಿಕರಲ್ಲಿ ಅರಿವು ಮೂಡಿಸಬೇಕು. ಯಾರಾದರೂ ಪಿಓಪಿ ಗಣೇಶ ಮೂರ್ತಿಗಳನ್ನು ರಚಿಸಿದರೆ ಅವರ ವಿರುದ್ಧ ಕೇಸ್ ದಾಖಲಿಸುವಂತೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಗೌರಿ-ಗಣೇಶೋತ್ಸವ ಹಬ್ಬ ಆಚರಣೆ ಸಂಬಂಧ ಮಲ್ಲೇಶ್ವರಂನ ಐಪಿಪಿ ಕೇಂದ್ರದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಓಪಿ) ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪಿಓಪಿ ಗಣೇಶ ಮೂರ್ತಿಗಳನ್ನು ತಯಾರಿಸುವವರ ಮೇಲೆ ಕೇಸ್ ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಿದರು. ನಗರದಲ್ಲಿ 40ಕ್ಕೂ ಹೆಚ್ಚು ಕೆರೆಗಳ ಬಳಿಯ ಕಲ್ಯಾಣಿಗಳು ಹಾಗೂ ಪ್ರತ್ಯೇಕ ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಿದೆ ಎಂದು ತಿಳಿಸಿದರು.
ಇನ್ನು ಪಾಲಿಕೆಯಿಂದ ಗಣೇಶ ಮೂರ್ತಿಗಳ ವಿಸರ್ಜನೆಗೆ ವ್ಯವಸ್ಥೆ ಮಾಡಲಾದ ಎಲ್ಲಾ ಕಲ್ಯಾಣಿಗಳ ಬಳಿ ವ್ಯವಸ್ಥಿತವಾಗಿ ಬ್ಯಾರಿಕೇಡಿಂಗ್, ನುರಿತ ಈಜುಗಾರರು, ವಿದ್ಯುತ್ ದೀಪಗಳ ಸೌಲಭ್ಯ, ಅಗತ್ಯವಿರುವ ಕಡೆ ಕ್ರೇನ್‌ಗಳ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ವಿಸರ್ಜನಾ ಸ್ಥಳಗಳಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ತೆರವುಗೊಳಿಸಲು ಅಗತ್ಯ ಸ್ವಚ್ಛತಾ ಸಿಬ್ಬಂದಿ ಹಾಗೂ ಸಾಗಾಣೆ ವಾಹನಗಳ ವ್ಯವಸ್ಥೆ ಮಾಡಬೇಕು. ಭದ್ರತಾ ದೃಷ್ಟಿಯಿಂದ ಸಿಸಿಟಿವಿ ಅಳವಡಿಕೆ, ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.
ತಾತ್ಕಾಲಿಕ ಮೊಬೈಲ್ ಟ್ಯಾಂಕ್‌ಗಳ ವ್ಯವಸ್ಥೆ:
ನಗರದ ಮನೆಗಳಲ್ಲಿ ಪ್ರತಿಷ್ಠಾಪಿಸುವ ಸಣ್ಣ-ಸಣ್ಣ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡುವ ಸಲುವಾಗಿ, ಆಯಾ ವಾರ್ಡ್ ಗಳ ಪ್ರಮುಖ ಸ್ಥಳ ಹಾಗೂ ಜಂಕ್ಷನ್‌ಗಳಲ್ಲಿ ಸಂಚಾರಿ ವಿಸರ್ಜನಾ ಘಟಕ (ಮೊಬೈಲ್ ಟ್ಯಾಂಕ್) ಗಳನ್ನು ತಾತ್ಕಾಲಿವಾಗಿ ವ್ಯವಸ್ಥೆ ಮಾಡಲು ಸೂಚಿಸಿದರು. ನಗರದಲ್ಲಿ ಒಟ್ಟು 75 ಉಪ ವಿಭಾಗಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಏಕಗವಾಕ್ಷಿ ಕೇಂದ್ರ ವ್ಯವಸ್ಥೆಯಲ್ಲಿ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈ ವೇಳೆ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಕರೀಗೌಡ, ನವೀನ್ ಕುಮಾರ್ ರಾಜು, ವಲಯ ಆಯುಕ್ತರಾದ ಸತೀಶ್, ದಿಗ್ವಿಜಯ್ ಬೋಡ್ಕೆ, ಸ್ನೇಹಲ್, ಮುಖ್ಯ ಅಭಿಯಂತರರು, ಪೊಲೀಸ್, ಬೆಸ್ಕಾಂ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
