ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ವೀರಸಂದ್ರ ಬಳಿಯ ರಾಷ್ಟ್ರೀಯ ಹೆದ್ದಾರಿ ಜಲಾವೃತಗೊಂಡು ಸಂಚಾರ ಅಸ್ತವ್ಯಸ್ತಗೊಂಡಿದೆ. ಇದೇ ವೇಳೆ, ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಿಂದ ನೀರು ಜಲಪಾತದಂತೆ ಧುಮ್ಮಿಕ್ಕುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಅ.3):ಸಂಜೆ ಸುರಿದ ಧಾರಾಕಾರ ಮಳೆಗೆ ಎಲೆಕ್ಟ್ರಾನಿಕ್ ಸಿಟಿಯ ಸಮೀಪದ ವೀರಸಂದ್ರ ಸಿಗ್ನಲ್ ಬಳಿಯ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಜಲಾವೃತಗೊಂಡು ಕೆರೆಯಂತಾಗಿದೆ. 

ಭಾರೀ ಪ್ರಮಾಣದ ಮಳೆ ನೀರು ರಸ್ತೆಯಲ್ಲಿ ನಿಂತಿದ್ದು, ವಾಹನ ಸವಾರರು ಸಂಚಾರಕ್ಕೆ ಪರದಾಡುವಂತಾಯ್ತು. ಪ್ರತಿ ಮಳೆಗೆ ಈ ರಸ್ತೆ ಜಲಾವೃತಗೊಳ್ಳುತ್ತಿದ್ದರೂ, ಹೆದ್ದಾರಿ ಪ್ರಾಧಿಕಾರದಿಂದ ಸೂಕ್ತ ಒಳಚರಂಡಿ ವ್ಯವಸ್ಥೆಯಿಲ್ಲದಿರುವುದರಿಂದ ಸಮಸ್ಯೆ ವರ್ಷಗಟ್ಟಲೇ ಬಗೆಹರಿಯದೇ ಉಳಿದಿದೆ. ಇದರಿಂದ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತೀವ್ರ ತೊಂದರೆ ಎದುರಿಸುತ್ತಿದ್ದಾರೆ.

ಮಳೆಗೆ ಫಾಲ್ಸ್ ಆದ ಫ್ಲೈಓವರ್!

ಇದೇ ವೇಳೆ, ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್‌ಗೆ ತೆರಳುವ ಎಲಿವೇಟೆಡ್ ಫ್ಲೈಓವರ್‌ನಲ್ಲಿ ಮಳೆ ನೀರು ಸಂಗ್ರಹವಾಗಿ, ಗಾರ್ವೇಬಾವಿಪಾಳ್ಯದ ಬಳಿ 'ಮಿನಿ ಫಾಲ್ಸ್' ರೀತಿಯಲ್ಲಿ ಧುಮ್ಮಿಕ್ಕುತ್ತಿದೆ. ಫ್ಲೈಓವರ್‌ನಿಂದ ಮಳೆ ನೀರು ಹೊರಹೋಗಲು ಸೂಕ್ತ ವ್ಯವಸ್ಥೆ ಇಲ್ಲದಿರುವುದರಿಂದ ಈ ಅವ್ಯವಸ್ಥೆ ಸೃಷ್ಟಿಯಾಗಿದ್ದು, ಬಿಇಟಿಪಿಎಲ್ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರು ಕಿಡಿಕಾರುತ್ತಿದ್ದಾರೆ. 

ಈ ಘಟನೆಗಳಿಂದ ಎಲೆಕ್ಟ್ರಾನಿಕ್ ಸಿಟಿಯ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಧಿಕಾರಿಗಳಿಂದ ತಕ್ಷಣದ ಕ್ರಮಕ್ಕೆ ವಾಹನ ಸವಾರರು ಒತ್ತಾಯಿಸಿದ್ದಾರೆ.