ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣಕ್ಕೆ 7 ಸ್ಥಳಗಳು ಆಯ್ಕೆ; ಸರ್ಕಾರದಿಂದ ಗಂಭೀರ ಚರ್ಚೆ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏಳು ಸ್ಥಳಗಳನ್ನು ಗುರುತಿಸಲಾಗಿದೆ.
ಬೆಂಗಳೂರು (ಆ.05): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏಳು ಸ್ಥಳಗಳನ್ನು ಗುರುತಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಂಗಳವಾರ ಅಥವಾ ಬುಧವಾರ ಚರ್ಚಿಸಿ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಕ್ಷಿಪ್ರಗತಿಯಲ್ಲಿ ಪ್ರಸ್ತಾವನೆ ಸಲ್ಲಿಸಲು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ನೇತೃತ್ವದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಐಡೆಕ್ ಮತ್ತು ಬೋಸ್ಟನ್ ಕನ್ಸಲ್ಟೆನ್ಸಿ ಗ್ರೂಪ್ ಸಂಸ್ಥೆಗಳು ಸಿದ್ಧಪಡಿಸಿರುವ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದರು. ನಂತರ ಮಾತನಾಡಿದ ನಾಯಕರು, 'ನೂತನ ವಿಮಾನ ನಿಲ್ದಾಣಕ್ಕೆ ಐಡೆಕ್ ಸಂಸ್ಥೆಯು 9 ಜಾಗಗಳನ್ನು ಗುರುತಿಸಿದೆ. ಈ ಪೈಕಿ ಎರಡು ಸ್ಥಳಗಳನ್ನು ತಾಂತ್ರಿಕ ಕಾರಣಗಳಿಂದ ಕೈಬಿಡಲಾಗಿದೆ. ಉಳಿದ 7 ಸ್ಥಳಗಳ ಮಾಹಿತಿಯೊಂದಿಗೆ ವಿಮಾನ ನಿಲ್ದಾಣಗಳ ಪ್ರಾಧಿಕಾರಕ್ಕೆ ಕಳಿಸಲಾಗುವುದು. ಇದಕ್ಕೂ ಮೊದಲು ಮುಖ್ಯಮಂತ್ರಿಗಳ ಜತೆ ಅಂತಿಮ ಚರ್ಚೆ ನಡೆಸಲಾಗುವುದು' ಎಂದರು.
ತುಮಕೂರು-ಚಿತ್ರದುರ್ಗ ನಡುವೆ ಏರ್ಪೋರ್ಟ್ ಇಲ್ಲ; ತಮಿಳುನಾಡಿಗೆ ಕೌಂಟರ್ ಕೊಡಲು ಬೆಂಗಳೂರಲ್ಲೇ 2ನೇ ಏರ್ಪೋರ್ಟ್ ನಿರ್ಮಾಣ
ವಿಮಾನ ನಿಲ್ದಾಣಕ್ಕೆ ಯಾವ ಜಾಗ ಸೂಕ್ತ ಎನ್ನುವುದನ್ನು ಬೆಂಗಳೂರು ಮತ್ತು ಕರ್ನಾಟಕದ ಹಿತದೃಷ್ಟಿಯಿಂದ ತೀರ್ಮಾನಿಸಲಾಗುವುದು. ಇದರಲ್ಲಿ ರಾಜಕೀಯ ಏನೂ ಇರುವುದಿಲ್ಲ. ಪ್ರಾಧಿಕಾರವು 15 ಮಾನದಂಡಗಳನ್ನು ಇಟ್ಟುಕೊಂಡಿದ್ದು, ಅದರಂತೆ ನಿರ್ಧಾರವಾಗಲಿದೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು. ಜೊತೆಗೆ, ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ನೂತನ ವಿಮಾನ ನಿಲ್ದಾಣದ ಸಂಬಂಧ ಈಗಾಗಲೇ ಹತ್ತಕ್ಕೂ ಹೆಚ್ಚು ಸಭೆಗಳನ್ನು ನಡೆಸಲಾಗಿದೆ. ಬೆಂಗಳೂರು ನಗರದ ಅಭಿವೃದ್ಧಿ, ಅವಕಾಶ ಮತ್ತು ಪ್ರಯಾಣಿಕರು ಹಾಗೂ ಸರಕು ಸಾಗಣೆ ಒತ್ತಡ ಪರಿಗಣಿಸಿ, ಮುಂದಿನ ಹೆಜ್ಜೆ ಇಡಲಾಗುವುದು ಎಂದು ಮಾಹಿತಿ ನೀಡಿದರು.
ಬೆಂಗಳೂರು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2033ಕ್ಕೆ ವಿಮಾನ ಸಂಚಾರ ಆರಂಭ: ಸಚಿವ ಎಂ.ಬಿ. ಪಾಟೀಲ್
ಈ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ ಶೆಟ್ಟಿ, ಹಣಕಾಸು ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಸಿಂಗ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಬಿಎಂಆರ್ ಡಿ ಆಯುಕ್ತ , ಮೂಲಸೌಕರ್ಯ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ ಹೆಬ್ಸಿಬಾ ರಾಣಿ ಕೊರ್ಲಪಟಿ, ಕೆಎಸ್ಎಸ್ಐಡಿಸಿ ಎಂ.ಡಿ.ಸತೀಶ ಇದ್ದರು.