ಆರ್‌ಸಿಬಿ ವಿಜಯೋತ್ಸವ ಸಂಭ್ರಮಾಚರಣೆಯ ಕಾಲ್ತುಳಿತ ದುರಂತದಲ್ಲಿ 11 ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಮತ್ತು ಕೆಸಿಎ ಪದಾಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದಾರೆ. 

ಬೆಂಗಳೂರು (ಜೂ.5): ಆರ್‌ಸಿಬಿ ವಿಜಯೋತ್ಸವ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ ಹಾಗೂ ಕೆಸಿಎ ಪದಾಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕಬ್ಬನ್ ಪಾರ್ಕ್ ಠಾಣೆಗೆ ದೂರು ನೀಡಿದ್ದಾರೆ.

ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸ್ನೇಹಮಯಿ ಕೃಷ್ಣ ಅವರು, ಇದು ಸರ್ಕಾರದ ಬೇಜವಾಬ್ದಾರಿಯಿಂದ ಆಗಿರುವ ದುರಂತ. ಆರ್‌ಸಿಬಿ ರಾಜ್ಯವನ್ನು ಪ್ರತಿನಿಧಿಸುವ ತಂಡವಲ್ಲ. ಮದ್ಯ ಮಾರಾಟಗಾರರು ಖರೀದಿಸಿರುವ ಖಾಸಗಿ ತಂಡವಿದು. ಹೀಗಿರುವಾಗ ರಾಜ್ಯ ಸರ್ಕಾರ ಅವರನ್ನು ಕರೆದು ಸನ್ಮಾನಿಸುವ ಅಗತ್ಯವಿರಲಿಲ್ಲ. ಯಾವುದೇ ಕಾನೂನು, ಸುರಕ್ಷತೆ ಕುರಿತು ಪೂರ್ವ ತಯಾರಿ ಇಲ್ಲದೇ ತರಾತುರಿಯಲ್ಲಿ ವಿಧಾನಸೌಧದ ಮುಂದೆ ಕಾರ್ಯಕ್ರಮ ಮಾಡಿದ್ದೇ ದುರಂತಕ್ಕೆ ಕಾರಣ ಎಂದು ಆರೋಪಿಸಿದರು.

ದುರಂತಕ್ಕೆ ಸಿಎಂ, ಡಿಸಿಎಂ ಹೊಣೆಗಾರರು:

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಸಿಎಂ, ಡಿಸಿಎಂ ಇದಕ್ಕೆ ಹೊಣೆಗಾರರಾಗಿದ್ದಾರೆ. ಪೊಲೀಸರು ಯುಡಿಆರ್ ದಾಖಲಿಸಿಕೊಂಡಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಭಾರತೀಯ ದಂಡ ಸಂಹಿತೆ 106 ಅಡಿ ಪ್ರಕರಣ ದಾಖಲಿಸಬೇಕು. ಈ ಪ್ರಕರಣವನ್ನು ಸಿದ್ದರಾಮಯ್ಯ ನ್ಯಾಯಾಂಗ ತನಿಖೆಗೆ ಕೊಟ್ಟಿರುವುದು ಕಣ್ಣೊರೆಸುವ ತಂತ್ರ. ಇದರಿಂದ ಏನೂ ಪ್ರಯೋಜನವಿಲ್ಲ. ಪ್ರಕರಣ ಮುಚ್ಚಿಹಾಕಲು ಮುಂದಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಸ್ನೇಹಮಯಿ ಕೃಷ್ಣ ಅವರು, ದೂರಿನ ಪ್ರತಿಯನ್ನ ಮುಖ್ಯ ನ್ಯಾಯಮೂರ್ತಿಗಳಿಗೂ ಕಳುಹಿಸಿದ್ದೇನೆ ಎಂದರು.

ಘಟನೆ ಹಿನ್ನೆಲೆ: 

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಐಪಿಎಲ್ ವಿಜಯೋತ್ಸವದ ಸಂಭ್ರಮಾಚರಣೆಯ ಸಂದರ್ಭದಲ್ಲಿ ದುರಂತ ಘಟನೆ ಸಂಭವಿಸಿತು. ಆರ್‌ಸಿಬಿ ತಂಡವು 18 ವರ್ಷಗಳ ಕಾಯುವಿಕೆಯ ನಂತರ ಐಪಿಎಲ್ ಟ್ರೋಫಿಯನ್ನು ಗೆದ್ದ ಸಂತಸದಲ್ಲಿ, ವಿಧಾನಸೌಧದ ಬಳಿ ಸರ್ಕಾರದಿಂದ ಸನ್ಮಾನ ಕಾರ್ಯಕ್ರಮ ಆಯೋಜನೆಯಾಗಿತ್ತು. ಈ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗಡೆ ದೊಡ್ಡ ಸಂಖ್ಯೆಯ ಅಭಿಮಾನಿಗಳ ಗುಂಪು ಜಮಾಯಿಸಿದ್ದರಿಂದ, ಜನಸಂದಣಿಯ ನಿರ್ವಹಣೆಯಲ್ಲಿ ವೈಫಲ್ಯದಿಂದಾಗಿ ಕಾಲ್ತುಳಿತ ಸಂಭವಿಸಿತು.

ಈ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದು, 56ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ, ಕೆಲವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ವೈದೇಹಿ ಆಸ್ಪತ್ರೆ ಸೇರಿದಂತೆ ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಸರ್ಕಾರವು 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದು, ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಬಿಜೆಪಿಯು ಈ ಘಟನೆಗೆ ಸರ್ಕಾರದ ವೈಫಲ್ಯವೇ ಕಾರಣ ಎಂದು ಆರೋಪಿಸಿದ್ದಾರೆ.